ಕರ್ನಾಟಕ

karnataka

ಬೆಳಗಾವಿ ಚಳಿಗಾಲ ಅಧಿವೇಶನ ಕಲಾಪ ನೇರಪ್ರಸಾರ: ಸಭಾಪತಿ ಹೊರಟ್ಟಿ

By

Published : Nov 8, 2021, 10:44 PM IST

ಡಿಸೆಂಬರ್​ನಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಕಲಾಪವನ್ನು ಸಾರ್ವಜನಿಕರೂ ವೀಕ್ಷಿಸಲು ಅನುಕೂಲವಾಗುವಂತೆ ಮೊದಲ ಬಾರಿ ವೆಬ್ ಕಾಸ್ಟಿಂಗ್ ಮೂಲಕ ನೇರಪ್ರಸಾರ‌ಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

belagavi-winter-session-live-telecast
ಸಭಾಪತಿ ಬಸವರಾಜ ಹೊರಟ್ಟಿ

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಇದೇ ಡಿಸೆಂಬರ್​ನಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನದ ಕಲಾಪವನ್ನು ಸಾರ್ವಜನಿಕರೂ ವೀಕ್ಷಿಸಲು ಅನುಕೂಲವಾಗುವಂತೆ ಮೊದಲ ಬಾರಿ ವೆಬ್ ಕ್ಯಾಸ್ಟಿಂಗ್ ಮೂಲಕ ನೇರಪ್ರಸಾರ‌ ವ್ಯವಸ್ಥೆ ಮಾಡಲಾಗುವುದು ಎಂದು ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ಪರಿಷತ್ತಿನ ಸಭಾಂಗಣವನ್ನು ಪರಿಶೀಲಿಸಿದ ಸಭಾಪತಿ ಹೊರಟ್ಟಿ

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ವಿಧಾನಮಂಡಲ ಅಧಿವೇಶನದ ಕಲಾಪವನ್ನು ನೇರವಾಗಿ ವೀಕ್ಷಿಸಲು ಬೇಕಿರುವ ಪರಿಕರ ಮತ್ತು ಸೌಲಭ್ಯವನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರತಿಯೊಂದು ಇಲಾಖೆಯ ಕಚೇರಿಯಲ್ಲಿ ಇ-ಆಫೀಸ್ ಬಳಕೆ ಮಾಡುತ್ತಿರುವುದರಿಂದ ಇಂಟರ್ನೆಟ್ ಸೇರಿದಂತೆ ಎಲ್ಲ ಸಮರ್ಪಕ ಸೌಲಭ್ಯಗಳನ್ನು ಒಂದು ವಾರದೊಳಗೆ ಒದಗಿಸುವಂತೆ ಅಧಿಕಾರಿಗಳಿಗೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಅಧಿವೇಶನ ಎಲ್ಲ ರೀತಿಯಿಂದಲೂ ಸುಗಮವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಕೆಲಸಕಾರ್ಯಗಳನ್ನು ತ್ವರಿತವಾಗಿ ಆರಂಭಿಸಬೇಕು ಎಂದರು.

ಸಭಾಪತಿ ಬಸವರಾಜ ಹೊರಟ್ಟಿ

ಇದಕ್ಕೂ ಮುನ್ನ ಪರಿಷತ್ತಿನ ಸಭಾಂಗಣವನ್ನು ಪರಿಶೀಲಿಸಿದ ಸಭಾಪತಿ, ಬೆಳಗಾವಿಯಲ್ಲಿ ಮೊದಲ ಅಧಿವೇಶನ ಆರಂಭಗೊಂಡ ಹಿನ್ನೆಲೆಯನ್ನು ವಿವರಿಸಿದರು. ವಿಧಾನ ಮಂಡಲದ ಕಲಾಪವನ್ನು ನೇರಪ್ರಸಾರ ವ್ಯವಸ್ಥೆ ಕಲ್ಪಿಸುವ ಮೂಲಕ ಪ್ರತಿಯೊಂದು ವಿಷಯವನ್ನು ಸಾರ್ವಜನಿಕರಿಗೆ ತಲುಪಿಸಲಾಗುತ್ತಿದೆ. ಅದೇ ರೀತಿ ಡಿಸೆಂಬರ್​ನಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕೂಡ ಇದೇ ರೀತಿಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಭಾಪತಿ ತಿಳಿಸಿದರು.

ಅಧಿವೇಶನದ ಸಿದ್ಧತೆ ಕುರಿತು ಪೂರ್ವಭಾವಿ ಸಭೆಗಳನ್ನು ನಡೆಸಿ ಸೂಕ್ತ ನಿರ್ದೇಶನಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮೀ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ABOUT THE AUTHOR

...view details