ಕರ್ನಾಟಕ

karnataka

7 ಜಿಲ್ಲೆಗಳಲ್ಲಿ ಸಂಪರ್ಕಿತರ ಪತ್ತೆಗೆ ವಿಶೇಷ ಕ್ರಮಕ್ಕೆ ಆರೋಗ್ಯ ಇಲಾಖೆ ಆದೇಶ

By

Published : Aug 16, 2021, 10:52 PM IST

ಸೋಂಕು ದೃಢಪಟ್ಟ ವ್ಯಕ್ತಿಯ ಸಂಪರ್ಕ ಹೊಂದಿರುವ ತಲಾ 20 ಮಂದಿಯನ್ನು ಕಡ್ಡಾಯವಾಗಿ ಸೋಂಕು ಪರೀಕ್ಷೆಗೊಳಪಡಿಸಬೇಕು ಎಂದು ಆರೋಗ್ಯ ಇಲಾಖೆ ಆಯುಕ್ತ ತ್ರಿಲೋಕಚಂದ್ರ ಆದೇಶದಲ್ಲಿ ತಿಳಿಸಿದ್ದಾರೆ.

health-department-order-to-find-corona-primary-contacts
ಏಳು ಜಿಲ್ಲೆಗಳಲ್ಲಿ ಸಂಪರ್ಕಿತರ ಪತ್ತೆಗೆ ವಿಶೇಷ ಕ್ರಮಕ್ಕೆ ಆರೋಗ್ಯ ಇಲಾಖೆ ಆದೇಶ

ಬೆಂಗಳೂರು: ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಮೈಸೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಸೋಂಕಿತರ ಸಂಪರ್ಕಿತರ ಪತ್ತೆಗೆ ವಿಶೇಷ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಆದೇಶ ನೀಡಿದೆ.

ಈ ಜಿಲ್ಲೆಗಳಲ್ಲಿ ಪ್ರತಿ ಸೋಂಕಿತರ ಕನಿಷ್ಠ 20 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಪತ್ತೆ ಹಚ್ಚಿ ಪರೀಕ್ಷೆಗೊಳಪಡಿಸುವಂತೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಹಾಸನ, ಮೈಸೂರು, ಕೊಡಗು, ಚಿಕ್ಕಮಗಳೂರು ಹಾಗೂ ಚಾಮರಾಜನಗರದಲ್ಲಿ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಶೇಕಡಾ 3ರಿಂದ ಶೇಕಡಾ 4ರಷ್ಟಿದೆ.

ಹಾಗಾಗಿ, ಈ ಜಿಲ್ಲೆಗಳಲ್ಲಿ ಸೋಂಕು ಪರೀಕ್ಷೆಗಳನ್ನು ಗಣನೀಯವಾಗಿ ಹೆಚ್ಚಿಸಲು ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಸೋಂಕು ದೃಢಪಟ್ಟ ವ್ಯಕ್ತಿಯ ಸಂಪರ್ಕ ಹೊಂದಿರುವ ತಲಾ 20 ಮಂದಿಯನ್ನು ಕಡ್ಡಾಯವಾಗಿ ಸೋಂಕು ಪರೀಕ್ಷೆಗೊಳಪಡಿಸಬೇಕು ಎಂದು ಆರೋಗ್ಯ ಇಲಾಖೆ ಆಯುಕ್ತ ತ್ರಿಲೋಕಚಂದ್ರ ಆದೇಶದಲ್ಲಿ ತಿಳಿಸಿದ್ದಾರೆ.

ಶೇಕಡಾ 2ಕ್ಕಿಂತ ಅಧಿಕ ಪಾಸಿಟಿವಿಟಿ ದರ ಹೊಂದಿರುವ ಜಿಲ್ಲೆಗಳು ಅಲ್ಲಿನ ಸೋಂಕಿತರ ಆಸ್ಪತ್ರೆ ದಾಖಲಾತಿಗೆ ಅನುಗುಣವಾಗಿ ಆಕ್ಸಿಜನ್, ಐಸಿಯು ಹಾಸಿಗೆಗಳನ್ನು ವ್ಯವಸ್ಥೆ ಮಾಡಿಕೊಳ್ಳಬೇಕು. ಪ್ರತಿ ವಾರ ಜಿಲ್ಲಾ ಮಟ್ಟದ ಕೊರೊನಾ ತಾಂತ್ರಿಕ ತಜ್ಞರ ಸಮಿತಿ ಸದಸ್ಯರ ಸಭೆಯನ್ನು ಕಡ್ಡಾಯವಾಗಿ ನಡೆಸಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ:ವಿಮಾನದಿಂದ ಜಾರಿಬಿದ್ದ ಅಫ್ಘಾನ್ ಪ್ರಜೆಗಳು..ಭಯಾನಕ ವಿಡಿಯೋ!

ABOUT THE AUTHOR

...view details