ಕರ್ನಾಟಕ

karnataka

ನೆಲಮಂಗಲದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

By

Published : Oct 30, 2021, 7:41 PM IST

ನೆಲಮಂಗಲ ತಾಲೂಕಿನ ಕಲ್ಲನಾಯಕನ ಹಳ್ಳಿಯಲ್ಲಿ ನಡೆಯುತ್ತಿದ್ದ, ಅಕ್ರಮ ಗಣಿಗಾರಿಕೆಗೆ ತಡೆ ನೀಡಬೇಕು. ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

High Court
ಹೈಕೋರ್ಟ್

ಬೆಂಗಳೂರು: ನೆಲಮಂಗಲ ತಾಲೂಕಿನ ಕಲ್ಲನಾಯಕನ ಹಳ್ಳಿಯಲ್ಲಿ ಕೆಲ ವ್ಯಕ್ತಿಗಳು ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ಚಿಲುಮೆ ಟ್ರಸ್ಟ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕರು, ಜಿಲ್ಲಾ ಪರಿಸರ ಪರಿಣಾಮ ಅಧ್ಯಯನ ಪ್ರಾಧಿಕಾರ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ, ಕಾರ್ಮಿಕರ ಆಯುಕ್ತರು ಹಾಗು ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ನಡೆಸುತ್ತಿದ್ದಾರೆ ಎನ್ನಲಾದ ನೆಲಮಂಗಲದ ಅಗಲಕುಪ್ಪೆ ನಿವಾಸಿಗಳಾದ ಜಯಮ್ಮ, ಕೆ.ಗೋವಿಂದರಾಜು ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ಅರ್ಜಿದಾರರ ಆರೋಪ:
'ಕಲ್ಲನಾಯಕನ ಹಳ್ಳಿಯ ಸರ್ವೆ ನಂಬರ್ 41/3 ಹಾಗು 42/2 ರಲ್ಲಿ ಜಯಮ್ಮ ಮತ್ತು ಗೋವಿಂದರಾಜು ನಿಯಮಗಳನ್ನು ಉಲ್ಲಂಘಿಸಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ. ಇದರಿಂದ ಪರಿಸರ ಮಾಲಿನ್ಯ ಉಂಟಾಗುತ್ತಿರುವುದರ ಜತೆಗೆ ಸ್ಥಳೀಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.

ನೈಸರ್ಗಿಕ ಸಂಪತ್ತು ಲೂಟಿ ಮಾಡಲಾಗುತ್ತಿದೆ. ಕಲ್ಲು ಸ್ಫೋಟಿಸಲು ಸ್ಫೋಟಕಗಳನ್ನು ಬಳಕೆ ಮಾಡುತ್ತಿರುವುದರಿಂದ ಶಬ್ಧ ಮತ್ತು ವಾಯು ಮಾಲಿನ್ಯ ಉಂಟಾಗುತ್ತಿದೆ. ಪಕ್ಕದ ಕೃಷಿ ಜಮೀನಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಅಂತರ್ಜಲ ಕುಸಿಯುತ್ತಿದ್ದು, ಸ್ಥಳೀಯ ಗ್ರಾಮಗಳಲ್ಲಿ ಮನೆಗಳು ಹಾನಿಗೆ ಒಳಗಾಗಿವೆ. ಸ್ಥಳೀಯ ಜನರು ಕಿವುಡುತನ, ನಿದ್ರಾಹೀನತೆ ಸೇರಿ ಅನೇಕ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ.

ಆದ್ದರಿಂದ, ಕೂಡಲೇ ಅಕ್ರಮ ಗಣಿಗಾರಿಕೆಗೆ ತಡೆ ನೀಡಬೇಕು. ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಆದೇಶಿಸಬೇಕು' ಎಂದು ಅರ್ಜಿದಾರರು ಕೋರಿದ್ದಾರೆ.

ABOUT THE AUTHOR

...view details