ಕರ್ನಾಟಕ

karnataka

ಬಕ್ರೀದ್ ಹಬ್ಬಕ್ಕೆ ಗೋವುಗಳ ಬಲಿ ಬೇಡ: ಸಚಿವ ಪ್ರಭು ಚವ್ಹಾಣ್

By

Published : Jul 20, 2021, 1:38 AM IST

ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಗೋಹತ್ಯೆ ನಿಷೇಧ ಅನುಷ್ಠಾನ ಆಗಿರುವುದರಿಂದ ಗೋವುಗಳ ಹತ್ಯೆ ಯಾವುದೇ ಕಾರಣಕ್ಕೂ ನಡೆಯದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸಚಿವ ಪ್ರಭು ಚವ್ಹಾಣ್ ಈಗಾಗಲೇ ತಿಳಿಸಿದ್ದಾರೆ.

ಸಚಿವ ಪ್ರಭು ಚವ್ಹಾಣ್
ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ಮುಂದಿನ ತಿಂಗಳು ಬಕ್ರೀದ್ ಹಬ್ಬ ಎದುರಾಗುತ್ತಿದೆ. ತ್ಯಾಗ ಮತ್ತು ಬಲಿದಾನದ ಹಬ್ಬ ಎಂದೇ ಕರೆಯುವ ಬಕ್ರೀದ್ ಹಬ್ಬದ ಸಮಯದಲ್ಲಿ ಸಹಜವಾಗಿಯೇ ಪ್ರಾಣಿಗಳ ಬಲಿ ನೀಡಲಾಗುತ್ತದೆ ಆದರೆ ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ರಾಜ್ಯದಿಂದ ಹೊರಗಡೆ ಅಥವಾ ಹೊರ ರಾಜ್ಯದಿಂದ ನಮ್ಮ ರಾಜ್ಯಕ್ಕೆ ಯಾವುದೇ ಮಾರ್ಗದಿಂದ ಅಕ್ರಮ ಗೋವುಗಳು ಮತ್ತು ಗೋಮಾಂಸ ಸಾಗಿಸುವುದರ ಮೇಲೆ ಇಲಾಖೆಯ ಅಧಿಕಾರಿಗಳು ಹದ್ದಿನ ಕಣ್ಣಿಡಲು ಇಲಾಖೆಯ ಎಲ್ಲ ಅಧಿಕಾರಿಗಳಿಗೆ ಸಚಿವ ಪ್ರಭು ಚವ್ಹಾಣ್ ಸೂಚನೆ ನೀಡಿದ್ದಾರೆ.

ಸಾಮಾನ್ಯವಾಗಿ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಬಲಿ ಕೊಡುವ ಸಂಪ್ರದಾಯವಿದ್ದು, ಇದಕ್ಕಾಗಿ ಗೋವುಗಳನ್ನು ಸಹ ಬಳಕೆ ಮಾಡಲಾಗುತ್ತದೆ. ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಗೋಹತ್ಯೆ ನಿಷೇಧ ಅನುಷ್ಠಾನ ಆಗಿರುವುದರಿಂದ ಗೋವುಗಳ ಹತ್ಯೆ ಯಾವುದೇ ಕಾರಣಕ್ಕೂ ನಡೆಯದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ತಿಳಿಸಲಾಗಿದೆ.

ರಾಜ್ಯದ ಎಲ್ಲ ಗಡಿ ಭಾಗಗಳಲ್ಲಿ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಲು ತಿಳಿಸಲಾಗಿದ್ದು, ಗೋಹತ್ಯೆ ನಿಷೇಧ ಕಾಯ್ದೆಯ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ.

ಒಂದು ವೇಳೆ ಎಲ್ಲಾದರೂ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿರುವುದು ಕಂಡುಬಂದಲ್ಲಿ ಗೋಪಾಲಕರು, ಗೋರಕ್ಷಕರು ಹಾಗೂ ಸಾರ್ವಜನಿಕರು ಪಶುಸಂಗೋಪನೆ ಇಲಾಖೆಯ ಪ್ರಾಣಿ ಕಲ್ಯಾಣ ಸಹಾಯವಾಣಿಗೆ ತಿಳಿಸಿ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ. ಆದ್ರೆ ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳುವುದು ಬೇಡ ಎಂದು ಸಚಿವರು ಮನವಿ ಮಾಡಿದ್ದಾರೆ.

ಸಮನ್ವಯತೆಯಿಂದ ಕಾರ್ಯನಿರ್ವಹಿಸಿ:
ಈಗಾಗಲೇ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಈ ಕುರಿತಾಗಿ ಸಭೆಗಳು ನಡೆದಿದ್ದು, ಗಡಿಭಾಗದಲ್ಲಿ ಪೊಲೀಸ್ ಇಲಾಖೆಯ ಜೊತೆ ಸೇರಿ ನಿಗಾ ಇಡಲು ತಿಳಿಸಿದ್ದಾರೆ. ಪ್ರಾಣಿ ಕಲ್ಯಾಣ ಮಂಡಳಿಗೆ ಸದಸ್ಯರಿಗೆ ವಲಯವಾರು ಜವಾಬ್ದಾರಿ ಹಂಚಿಕೆ ಮಾಡಲಾಗಿದ್ದು, ಅಕ್ರಮ ಗೋವುಗಳ ಸಾಗಣೆ ಆಗದಂತೆ ನೋಡಿಕೊಳ್ಳಲು ತಿಳಿಸಲಾಗಿದೆ.

ಗೋಹತ್ಯೆ ಕಂಡುಬಂದರೆ ಶಿಸ್ತುಕ್ರಮ:
ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾವಾರು ಜವಾಬ್ದಾರಿ ನೀಡಲಾಗಿದ್ದು, ಅವರಿಗೆ ಸಂಬಂಧಪಟ್ಟ ಪ್ರದೇಶದಲ್ಲಿ ಗೋಹತ್ಯೆ ನಡೆದಿದ್ದು ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

ವದಂತಿಗಳಿಗೆ ಕಿವಿ ಕೊಡಬೇಡಿ:
ಸಮಾಜದಲ್ಲಿ ಸಾಮಾಜಿಕ ಸಾಮರಸ್ಯ ಕದಡಲು ಅನೇಕರು ಸಾಮಾಜಿಕ ಜಾಲತಾಣವನ್ನು ಮಾಧ್ಯಮವಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಾರೆ. ಗೋಹತ್ಯೆ ಕುರಿತಾಗಿ ಯಾವುದೇ ಸುಳ್ಳು ಸುದ್ದಿ ಅಥವಾ ಸಂದೇಶಗಳನ್ನು ಹರಿಬಿಡುವುದು ಕಂಡುಬಂದಲ್ಲಿ ಪೊಲೀಸ್ ಇಲಾಖೆ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.

ABOUT THE AUTHOR

...view details