ಕರ್ನಾಟಕ

karnataka

ಪ್ರತಿಭಟನೆಗಳು ಕಡಿಮೆಯಾದರೆ ಜ್ವಲಂತ ಸಮಸ್ಯೆಗಳ ಚರ್ಚೆಗೆ ಅನುಕೂಲ : ಸಭಾಪತಿ ಬಸವರಾಜ ಹೊರಟ್ಟಿ

By ETV Bharat Karnataka Team

Published : Nov 22, 2023, 3:35 PM IST

ಸುವರ್ಣಸೌಧದ ಹೊರಗಡೆ ಪ್ರತಿಭಟನೆಗಳ ಸಂಖ್ಯೆ ಇಳಿಮುಖವಾದರೆ, ಸದನದ ಒಳಗಡೆ ಜ್ವಲಂತ ಸಮಸ್ಯೆಗಳ ಚರ್ಚೆಗೆ ಅನುಕೂಲವಾಗಲಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

basavaraj horatti
ಬಸವರಾಜ ಹೊರಟ್ಟಿ

ಬೆಂಗಳೂರು : ಡಿಸೆಂಬರ್ 4 ರಿಂದ ಬೆಳಗಾವಿ ಅಧಿವೇಶನ ಆರಂಭವಾಗುತ್ತಿದೆ. ಈ ಸಂದರ್ಭದಲ್ಲಿ ಸುವರ್ಣ ಸೌಧದ ಹೊರಗಡೆ ಪ್ರತಿಭಟನೆಗಳ ಸಂಖ್ಯೆ ಇಳಿಮುಖವಾದರೆ ಹಾಗೂ ಸದನದ ಒಳಗಡೆ ಜನಸಾಮಾನ್ಯರ ಹಾಗೂ ಜ್ವಲಂತ ಸಮಸ್ಯೆಗಳ ಕುರಿತು ಅರ್ಥಪೂರ್ಣ ಹಾಗೂ ಗಂಭೀರ ಚರ್ಚೆ ನಡೆದು, ಪರಿಹಾರ ಕಂಡುಕೊಂಡರೆ ಉತ್ತರ ಕರ್ನಾಟಕ ಭಾಗದಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಸಿದ್ದಕ್ಕೆ ಸಾರ್ಥಕವಾಗುತ್ತದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಇದರಿಂದ ಸರ್ಕಾರಕ್ಕೆ ಗೌರವ ಹಾಗೂ ಒಳ್ಳೆಯ ಹೆಸರು ಬರುತ್ತದೆ ಎನ್ನುವುದು ನನ್ನ ಅನಿಸಿಕೆ ಎಂದರು. ಸಂಘಟನೆಗಳು ಅಧಿವೇಶನದ ಸಂದರ್ಭದಲ್ಲಿ ಸುವರ್ಣ ಸೌಧದ ಹೊರಗಡೆ ಧರಣಿ ಸತ್ಯಾಗ್ರಹ ನಡೆಸದಂತೆ ಸಂಘಟನೆಗಳ ಮುಖಂಡರಲ್ಲಿ ಮನವಿ ಮಾಡಲು ತಮ್ಮ ಸಚಿವ ಸಂಪುಟದ ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು.

ಪ್ರತಿ ಬಾರಿ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಉತ್ತರ ಕರ್ನಾಟಕವೂ ಸೇರಿದಂತೆ ರಾಜ್ಯದ ವಿವಿಧ ಭಾಗಗಳ ರೈತ ಸಂಘ, ಶಿಕ್ಷಕರ ಸಂಘ, ನೌಕರರ ಸಂಘ, ಕನ್ನಡ ಪರ ಸಂಘಟನೆಗಳು ಸೇರಿದಂತೆ ನೂರಾರು ಸಂಘ ಸಂಸ್ಥೆಗಳು ತಮ್ಮ ಹಲವಾರು ಸಮಸ್ಯೆ, ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ನಿರಂತರವಾಗಿ ಧರಣಿ, ಸತ್ಯಾಗ್ರಹ, ಪ್ರತಿಭಟನೆ ನಡೆಸುವುದು ಸರ್ವೇ ಸಾಮಾನ್ಯವಾಗಿದೆ.

ಒಂದು ಅರ್ಥದಲ್ಲಿ ಬೆಳಗಾವಿಯ ಅಧಿವೇಶನ ಎಂದರೆ ಕೇವಲ ಪ್ರತಿಭಟನೆ, ಸತ್ಯಾಗ್ರಹ, ಧರಣಿಗಳಿಗೆ ವೇದಿಕೆ ಕಲ್ಪಿಸಿದಂತಾಗಿದೆ ಎಂದರೆ ಅತಿಶಯೋಕ್ತಿ ಎನಿಸಲಾರದು ಎನ್ನುವುದು ಹಲವರ ಅಭಿಪ್ರಾಯವಾಗಿದ್ದು, ಬಹಳಷ್ಟು ಜನ ಈ ರೀತಿಯ ಭಾವನೆಯನ್ನು ನನ್ನ ಮುಂದೆ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಸಲಾಗುವ ಅಧಿವೇಶನದ ಸಂದರ್ಭದಲ್ಲಿ ವಿಧಾನಸೌಧದ ಹೊರಗಡೆ ಧರಣಿ, ಸಮಾವೇಶ, ಸತ್ಯಾಗ್ರಹ ಇನ್ನು ಮುಂತಾದ ಚಟುವಟಿಕೆಗಳಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಮೂಲ ಉದ್ದೇಶ ಸಮರ್ಪಕವಾಗಿ ಈಡೇರುತ್ತಿಲ್ಲ ಎನ್ನುವುದು ಹಲವು ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ ಎಂದರು.

ಕಳೆದ 43 ವರ್ಷಗಳಿಂದ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯನಾಗಿ ಹಾಗೂ ಮೂರನೇ ಬಾರಿ ವಿಧಾನ ಪರಿಷತ್ತಿನ ಸಭಾಪತಿಯಾಗಿ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ನಡೆಸುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಸಲಹೆ ನೀಡಬಯಸುವುದು ಸೂಕ್ತ ಎಂದು ನಾನು ಭಾವಿಸುತ್ತೇನೆ. ಈ ಕುರಿತಂತೆ ಮುಖ್ಯಮಂತ್ರಿಗಳಿಗೆ ಹಾಗೂ ಕೃಷಿ, ಕಂದಾಯ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಿಗೆ ಪತ್ರ ಬರೆದು ನನ್ನ ಭಾವನೆಗಳನ್ನು ಹಂಚಿಕೊಂಡಿದ್ದೇನೆ ಎಂದು ತಿಳಿಸಿದರು.

ಅಧಿವೇಶನದ ಸಂದರ್ಭದಲ್ಲಿ ಕೃಷಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವಾರು ಸಂಘಟನೆಗಳು ಧರಣಿ, ಸತ್ಯಾಗ್ರಹ ನಡೆಸುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅಧಿವೇಶನ ಆರಂಭಗೊಳ್ಳುವ ಮುಂಚೆಯೇ ಸಂಬಂಧಪಟ್ಟ ಸಂಘಟನೆಗಳ ಪ್ರಮುಖರ ಸಭೆ ಕರೆದು ಅವರ ಬೇಡಿಕೆ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಿ, ಅವುಗಳ ಪರಿಹಾರಕ್ಕೆ ಪ್ರಯತ್ನಿಸಬೇಕೆಂದು ಕೋರಿರುವುದಾಗಿ ಹೊರಟ್ಟಿ ಹೇಳಿದರು.

ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ಕಲಾಪದ ಎರಡು ದಿನಗಳನ್ನು ಅಂದರೆ ಡಿ. 6 ಮತ್ತು 7 ರಂದು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಕಾಯ್ದಿರಿಸಿದ್ದೇವೆ ಎಂದು ಹೇಳಿದರು. ಅಧಿವೇಶನಕ್ಕಾಗಿ ಕೋಟ್ಯಂತರ ರೂ. ಹಣವನ್ನು ಸರ್ಕಾರ ಖರ್ಚು ಮಾಡುತ್ತಿದೆ. ಇದಕ್ಕಾದರೂ ಬೆಲೆ ಬೇಡವೇ?. ಬೆಳಗಾವಿ ಧರಣಿ ಹೋರಾಟಕ್ಕಾಗಿಯೇ 80 ಸಾವಿರ ಜನ ಸೇರುತ್ತಾರೆ. ಕಳೆದ ವರ್ಷ 2022 ರ ಡಿಸೆಂಬರ್ 19 ರಿಂದ 29ರ ವರೆಗೆ ನಡೆದ ಅಧಿವೇಶನದ ಸಂದರ್ಭದಲ್ಲಿ ಪೊಲೀಸ್ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕೃತ ಮಾಹಿತಿ ಪ್ರಕಾರ, 10 ದಿನಗಳಲ್ಲಿ 102ಕ್ಕೂ ಹೆಚ್ಚು ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ ಸಲ್ಲಿಸಿವೆ.

ಅವುಗಳಲ್ಲಿ ಸುಮಾರು 64 ಕ್ಕೂ ಹೆಚ್ಚು ಸಂಘಟನೆಗಳು ಪ್ರತಿಭಟನೆ, ಸತ್ಯಾಗ್ರಹ, ಧರಣಿ ಮುಂತಾದ ಹೋರಾಟಾತ್ಮಕ ಚಟುವಟಿಕೆಗಳನ್ನು ನಡೆಸಿವೆ. ಪ್ರತಿಭಟನೆ ನಡೆಯುವುದು ಬೇಡ ಎನ್ನುವುದಿಲ್ಲ. ಅದು ಅವರ ಹಕ್ಕು. ಆದರೆ ಅದಕ್ಕೆ ಸೂಕ್ತ ಪರಿಹಾರ ಕೊಡಿಸುವ ಕೆಲಸ ಆಗಬೇಕು. ಪ್ರತಿಭಟನೆಗಳಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ :ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಕುರಿತ ಚರ್ಚೆಗೆ ಎರಡು ದಿನ‌ ಮೀಸಲು: ಬಸವರಾಜ ಹೊರಟ್ಟಿ

ABOUT THE AUTHOR

...view details