ಕರ್ನಾಟಕ

karnataka

ಸಿಎಂ ಹುದ್ದೆಯ ಜಂಗಿ ಕುಸ್ತಿಗೆ ಕೊನೆಗೂ ಪರಿಹಾರ: ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

By

Published : May 18, 2023, 6:43 AM IST

Updated : May 18, 2023, 11:19 AM IST

ಕರ್ನಾಟಕ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕಗ್ಗಂಟಿಗೆ ತೆರೆ ಬಿದ್ದಿದೆ.

Legislative meeting
ಶಾಸಕಾಂಗ ಸಭೆ

ಬೆಂಗಳೂರು:ಮುಖ್ಯಮಂತ್ರಿ ಹುದ್ದೆಗಾಗಿ ಪಟ್ಟು ಹಿಡಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಡುವೆ ಸಂಧಾನ ಮಾಡುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ನೇಮಕ ಮಾಡುವ ಬಗ್ಗೆ ಹೈಕಮಾಂಡ್​ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅಂತಿಮ ನಿರ್ಧಾರಕ್ಕೆ ಬರಲಾಗಿದೆ.

ಕಾಂಗ್ರೆಸ್ ಹೈಕಮಾಂಡ್​ಗೆ ಜಟಿಲವಾಗಿ ಪರಿಣಮಿಸಿದ್ದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟನ್ನು ಬಗೆಹರಿಸಿದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬೀಡುಬಿಟ್ಟಿದ್ದ ರಾಜ್ಯ ಕಾಂಗ್ರೆಸ್ ಮುಖಂಡರುಗಳು ಇಂದು ಮಧ್ಯಾಹ್ನದ ವೇಳೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೈಕಮಾಂಡ್ ಸೂಚನೆಯ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇಂದು ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ತಿಳಿಸಿದ್ದಾರೆ. ಸಭೆಗೆ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗು ಸಂಸದರುಗಳು ಆಗಮಿಸಬೇಕೆಂದು ಡಿಕೆಶಿ ಸೂಚಿಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಸೂಚನ ಪ್ರತಿ

ಸಾಕಷ್ಟು ಪರ - ವಿರೋಧ ಚರ್ಚೆಗಳು, ಬರಲಿರುವ ಲೋಕಸಭಾ ಚುನಾವಣೆ ಸೇರಿದಂತೆ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಈ ನೇಮಕಾತಿಗೆ ಹೈಕಮಾಂಡ್ ಒಪ್ಪಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಪಕ್ಷದ ಹೈಕಮಾಂಡ್ ಕೊನೆಗೂ ಮನವೊಲಿಸಿ ಮುಖ್ಯಮಂತ್ರಿ ನೇಮಕದ ಬೇಡಿಕೆಯೊಂದನ್ನು ಹೊರತುಪಡಿಸಿ ಉಳಿದ ಎಲ್ಲ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಹುದ್ದೆಗಾಗಿ ಪಟ್ಟು ಹಿಡಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಡುವೆ ಅಧಿಕಾರ ಹಂಚಿಕೆಯ ಸೂತ್ರವನ್ನು ಹೈಕಮಾಂಡ್ ಸಿದ್ದಪಡಿಸಿ ಇಬ್ಬರು ಮುಖಂಡರ ಪರಸ್ಪರ ಒಪ್ಪಿಗೆಯನ್ನು ಪಡೆದು ಅಧಿಕಾರ ಹಂಚಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಅಧಿಕಾರ ಸೂತ್ರದ ಪ್ರಕಾರ, ಮೊದಲ ಎರಡು ವರ್ಷ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ನಂತರ ಉಳಿದ ಮೂರು ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಆಡಳಿತ ನಡೆಸುವ ಸಂಬಂಧ ಹೈಕಮಾಂಡ್ ಇಬ್ಬರ ನಡುವೆ ಒಪ್ಪಂದ ಮಾಡಿದೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರೆ ಡಿಕೆಶಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಅವರು ಅಪೇಕ್ಷಿಸುವ ಎರಡು ಪ್ರಮುಖ ಖಾತೆಗಳನ್ನು ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನು, ಕಾಂಗ್ರೆಸ್ ಶಾಸಕಂಗ ಪಕ್ಷ ನಾಯಕನ ಆಯ್ಕೆಯನ್ನು ಮಾಡುವ ಸಂಬಂಧ ಗುರುವಾರ ಸಂಜೆ 7 ಗಂಟೆಗೆ ಕಾಂಗ್ರೆಸ್ ಪಕ್ಷದ ಇಂದಿರಾ ಗಾಂಧಿ ಭವನದಲ್ಲಿ ಶಾಸಕಂಗ ಪಕ್ಷದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಅಧಿಕೃತವಾಗಿ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಲಾಗುತ್ತದೆ. ಶಾಸಕಾಂಗ ಪಕ್ಷ ನಾಯಕನ ಆಯ್ಕೆ ಜವಾಬ್ದಾರಿಯನ್ನು ಮೊನ್ನೆ ನಡೆದ ಶಾಸಕರ ಸಭೆಯಲ್ಲಿ ಹೈಕಮಾಂಡ್​ಗೆ ನೀಡುವ ನಿರ್ಣಯ ತಗೆದುಕೊಳ್ಳಲಾಗಿತ್ತು. ಅದರಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಜೊತೆ ಸುದೀರ್ಘ ಚರ್ಚೆ ನಡೆಸಿ ಕೈಗೊಂಡ ತೀರ್ಮಾನವನ್ನು ಸಂಜೆ ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಕಟಿಸಲಾಗುತ್ತದೆ.

ಈ ಸಭೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಪ್ರತಿನಿಧಿಗಳು ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾದ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಿರಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಿದ ಬಳಿಕ ಶುಕ್ರವಾರದಂದು ನೂತನ ಮುಖ್ಯಮಂತ್ರಿಯ ಹಾಗು ಸಚಿವರುಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ:ಮುಂದುವರೆದ ಸಿಎಂ ಆಯ್ಕೆ ಕಸರತ್ತು: ವೇಣುಗೋಪಾಲ್​ ಭೇಟಿಯಾದ ಸಿದ್ದರಾಮಯ್ಯ

Last Updated :May 18, 2023, 11:19 AM IST

ABOUT THE AUTHOR

...view details