ಕರ್ನಾಟಕ

karnataka

ನೂತನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ರಾಜ್ಯ ಕೈ ನಾಯಕರಿಂದ ಅಭಿನಂದನೆ

By

Published : Oct 19, 2022, 3:31 PM IST

ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು, ಮಾಜಿ ಸಚಿವರು, ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರು ಶುಭಾಶಯ ಕೋರಿದ್ದಾರೆ.

mallikarjun-kharge-congratulated-by-state-congress-leader
ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆಗೆ ರಾಜ್ಯ ಕೈ ನಾಯಕರಿಂದ ಅಭಿನಂದನೆ

ಬೆಂಗಳೂರು: ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆಗೆ ರಾಜ್ಯ ಕಾಂಗ್ರೆಸ್ ನಾಯಕರು ಶುಭ ಕೋರಿದ್ದಾರೆ. ಅಕ್ಟೋಬರ್ 17 ರಂದು ನಡೆದ ಚುನಾವಣೆಯಲ್ಲಿ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ ಶಶಿ ತರೂರ್ ಕಣದಲ್ಲಿದ್ದರು. ಇಂದು ಮತ ಎಣಿಕೆ ನಡೆದು ಅಂತಿಮ ಫಲಿತಾಂಶ ಹೊರಬಿದ್ದಿದೆ.

ಮಲ್ಲಿಕಾರ್ಜುನ ಖರ್ಗೆ 7,897 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಶಶಿ ತರೂರ್ ಒಂದು ಸಾವಿರ ಮತಗಳನ್ನು ಗಳಿಸಿದ್ದಾರೆ. ಒಟ್ಟು 416 ಮತಗಳು ಅಸಿಂಧುಗೊಂಡಿವೆ.

ಸಿದ್ದರಾಮಯ್ಯ, ಬಿ ಕೆ ಹರಿಪ್ರಸಾದ್, ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಮಾಜಿ ಸಚಿವರು ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರು ಖರ್ಗೆ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

ಟ್ವೀಟ್ ಮೂಲಕ ಶುಭಾಶಯ ಕೋರಿರುವ ಬಿ ಕೆ ಹರಿಪ್ರಸಾದ್, ಎಐಸಿಸಿ ಅಧ್ಯಕ್ಷರಾಗಿ ಚುನಾಯಿತರಾದ ಹಿರಿಯ ನಾಯಕರು, ಆತ್ಮೀಯರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆಗಳು. ಪಕ್ಷ ನಿಷ್ಠೆ, ತತ್ವ ಸಿದ್ಧಾಂತಕ್ಕೆ ಬದ್ಧರಾಗಿ, ಜಾತ್ಯಾತೀತ ಮೌಲ್ಯಗಳನ್ನು ಖರ್ಗೆ ಅವರು ಅಳವಡಿಸಿಕೊಂಡಿದ್ದಾರೆ. ಅವರ ನೇತೃತ್ವದಲ್ಲಿ ಪಕ್ಷ ಮತ್ತಷ್ಟು ಬಲಗೊಳ್ಳಲಿ ಎಂದು ಆಶಿಸಿದ್ದಾರೆ.

ಸಿದ್ದರಾಮಯ್ಯ ಟ್ವೀಟ್ ಮಾಡಿ, ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಖರ್ಗೆ ಅವರಿಗೆ ಹಾರ್ದಿಕ ಅಭಿನಂದನೆಗಳು. ಪ್ರತಿಭೆ ಮತ್ತು ಅನುಭವವನ್ನು ಖರ್ಗೆ ಮೈಗೂಡಿಸಿಕೊಂಡಿದಾರೆ. ಕಾಂಗ್ರೆಸ್ ಪಕ್ಷವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವ ಶಕ್ತಿ ಅವರಿಗಿದೆ. ಖರ್ಗೆ ಆಯ್ಕೆ ಕನ್ನಡಿಗರಿಗೂ ಹೆಮ್ಮೆಯ ಸಂಗತಿ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ :ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: 24 ವರ್ಷಗಳ ನಂತರ ಗಾಂಧಿಯೇತರ ಮುಖ್ಯಸ್ಥರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ABOUT THE AUTHOR

...view details