ಕರ್ನಾಟಕ

karnataka

ದೇಶದ ಚರಿತ್ರೆಯಲ್ಲಿ ದಾಖಲಾಗುವ ಕೆಲಸವನ್ನು ಸ್ಪೀಕರ್‌ರಿಂದ ಕೇಂದ್ರ ಸರ್ಕಾರ ಮಾಡಿಸಿದೆ: ಡಿಕೆಶಿ

By ETV Bharat Karnataka Team

Published : Dec 22, 2023, 6:32 PM IST

Updated : Dec 22, 2023, 7:16 PM IST

Congress protest in Freedom Park, Bengaluru: 146 ಸಂಸದರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಇಂದು​ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಿದರು.

Congress Protest in Freedom Park
ಫ್ರೀಡಂ ಪಾರ್ಕ್​ನಲ್ಲಿ ಕಾಂಗ್ರೆಸ್​ ಪ್ರತಿಭಟನೆ

ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿಕೆ

ಬೆಂಗಳೂರು: "ದೇಶದ ಸಂಸತ್ತಿನ ಮೇಲೆ ದಾಳಿ ನಡೆದ ಕುರಿತು ಪ್ರಧಾನಮಂತ್ರಿ ಹಾಗೂ ಗೃಹ ಸಚಿವರಿಂದ ಉತ್ತರ ಕೇಳಿದ ಕಾರಣಕ್ಕೆ ವಿರೋಧ ಪಕ್ಷಗಳ 146 ಸಂಸದರನ್ನು ಸದನದಿಂದ ಅಮಾನತು ಮಾಡಿರುವುದನ್ನು ಖಂಡಿಸುತ್ತೇವೆ" ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸಂಸದರ ಅಮಾನತು ಖಂಡಿಸಿ ಫ್ರೀಡಂ ಪಾರ್ಕ್​ನಲ್ಲಿ ಇಂದು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, "ಪ್ರಜಾಪ್ರಭುತ್ವ, ಅದರ ಮೌಲ್ಯಗಳನ್ನು ಉಳಿಸುವ ಉದ್ದೇಶದಿಂದ ಸರ್ಕಾರದ ವೈಫಲ್ಯ ಹಾಗೂ ಭದ್ರತಾ ಲೋಪದ ಬಗ್ಗೆ ಸದನದಲ್ಲಿ ಚರ್ಚೆಗೆ ಆಗ್ರಹಿಸಲಾಯಿತು. ಆದರೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತುಪಡಿಸಿ ಉಳಿದ ಎಲ್ಲರನ್ನೂ ಸದನದಿಂದ ಅಮಾನತು ಮಾಡಲಾಯಿತು. ವಿರೋಧ ಪಕ್ಷದ ಸಂಸದರ ವಿರುದ್ಧದ ದಾಳಿ, ಕೇಂದ್ರ ಸರ್ಕಾರದ ದುರಾಡಳಿತ, ಸಂವಿಧಾನ ವಿರೋಧಿ ನೀತಿಯನ್ನು ಖಂಡಿಸಿ ಸಂಸತ್ ಆವರಣದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ನಮ್ಮ ಸಂಸದರು ಪ್ರತಿಭಟನೆ ಮಾಡಿದ್ದಾರೆ. ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ" ಎಂದು ತಿಳಿಸಿದರು.

"ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯ ಗೆದ್ದಿದ್ದೇವೆ. ನಾವು ಏನು ಬೇಕಾದರೂ ಮಾಡಬಹುದು ಎಂದು ಬಿಜೆಪಿ ನಾಯಕರು ಬೀಗುತ್ತಿದ್ದಾರೆ. ಜನ ಯಾವಾಗ ಬೇಕಾದರೂ ತಮ್ಮ ನಿರ್ಧಾರವನ್ನು ಬದಲಿಸಬಹುದು. ರಾಜ್ಯ ವಿಧಾನಸಭೆ ನಂತರ ಲೋಕಸಭೆ ಚುನಾವಣೆಯಲ್ಲಿ ಜನ ಬೇರೆ ರೀತಿಯ ಫಲಿತಾಂಶ ಕೊಟ್ಟಿರುವ ಉದಾಹರಣೆಗಳಿವೆ. ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿ ವಿಧಾನಸಭೆ ಚುನಾವಣೆ ನಂತರ ಎರಡೇ ತಿಂಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಜನರ ತೀರ್ಪು ಬದಲಾಗಿತ್ತು. ಹೀಗಾಗಿ ನಾವು ಹತಾಶರಾಗುವುದು ಬೇಡ. ನಾವು ನೀತಿ ಮೇಲೆ ರಾಜಕಾರಣ ಮಾಡುತ್ತಿದ್ದು, ಬಿಜೆಪಿಯ ಸರ್ವಾಧಿಕಾರ ಸರ್ಕಾರಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ" ಎಂದು ಹೇಳಿದರು.

"ಈ ಹೋರಾಟವನ್ನು ಜನರ ಮಧ್ಯೆ ತೆಗೆದುಕೊಂಡು ಹೋಗಬೇಕು. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು, ಸಂವಿಧಾನದ ಹಕ್ಕುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಿದೆಯೇ ಎಂಬ ಪ್ರಶ್ನೆಯನ್ನು ವಿರೋಧ ಪಕ್ಷಗಳ ನಾಯಕರು ಎತ್ತುತ್ತಿದ್ದಾರೆ. ಶೇ.98ರಷ್ಟು ಫಲಾನುಭವಿಗಳಿಗೆ ನಮ್ಮ ಯೋಜನೆಗಳು ತಲುಪಿವೆ. ಸುಮಾರು 59 ಸಾವಿರ ಕೋಟಿಯಷ್ಟು ಹಣವನ್ನು ನಾವು ಈ ಗ್ಯಾರಂಟಿ ಯೋಜನೆಗಳಿಗೆ ಮೀಸಲಿಟ್ಟಿದ್ದೇವೆ. ಕೊಟ್ಟ ಮಾತು ಉಳಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಬದ್ಧತೆ" ಎಂದರು.

"ಕೇಂದ್ರದ ಬಿಜೆಪಿ ಸರ್ಕಾರ ದೇಶದ ಚರಿತ್ರೆಯಲ್ಲಿ ದಾಖಲಾಗುವಂತಹ ಕೆಲಸವನ್ನು ಸಂಸತ್ತಿನ ಉಭಯ ಸದನಗಳಲ್ಲಿ ಸ್ಪೀಕರ್ ಅವರಿಂದ ಮಾಡಿಸಿದೆ. ಈ ದೇಶದ ಐಕ್ಯತೆ, ಸಮಗ್ರತೆ, ಶಾಂತಿಗೆ ಭಂಗವಾಗುತ್ತಿದ್ದು, ಸಂಸತ್ ಭದ್ರತಾ ಲೋಪದ ಬಗ್ಗೆ ಸರ್ಕಾರ ಅಧಿಕೃತ ಹೇಳಿಕೆಯನ್ನು ಸದನದಲ್ಲಿ ನೀಡಬೇಕು ಎಂದು ಆಗ್ರಹಿಸಿದೆವು. ಈ ಬಗ್ಗೆ ಹೇಳಿಕೆ ನೀಡಲು ಅವರಿಂದ ಸಾಧ್ಯವಾಗದೇ ವಿರೋಧ ಪಕ್ಷಗಳ ಸಂಸತ್ ಸದಸ್ಯರನ್ನು ಅಮಾನತು ಮಾಡಿ ತಮಗೆ ಬೇಕಾದ ಮಸೂದೆ ಮಂಡನೆ ಮಾಡಿ ಅನುಮೋದನೆ ಪಡೆದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಅಪಮಾನ. ಈ ವಿಚಾರವಾಗಿ ಜನರ ಗಮನ ಸೆಳೆಯಲು ದೇಶದಾದ್ಯಂತ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ" ಎಂದು ಹೇಳಿದರು.

ಯಶವಂತಪುರದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, "3 ಗಂಟೆಗೆ ಪಾಲಿಕೆ ವ್ಯಾಪ್ತಿಯ ಶಾಲೆಗಳ ವಿಚಾರವಾಗಿ ಸಭೆ ಕರೆದಿದ್ದು, ಈ ಘಟನೆ ಬಗ್ಗೆ ವರದಿ ತರಿಸಿಕೊಳ್ಳುತ್ತಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುವುದು. ಇತ್ತೀಚೆಗೆ ಕೋಲಾರದ ಶಾಲೆಯ ಘಟನೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಮಕ್ಕಳನ್ನು ನಾವು ಯಾವ ರೀತಿ ನಡೆಸಿಕೊಳ್ಳಬೇಕೋ ಆ ರೀತಿ ನಡೆಸಿಕೊಳ್ಳಬೇಕು. ಮಕ್ಕಳನ್ನು ದುರುಪಯೋಗ ಮಾಡಿಕೊಳ್ಳುವಂತಿಲ್ಲ. ಶೌಚಾಲಯಗಳನ್ನು ಮಕ್ಕಳಿಂದ ಸ್ವಚ್ಛಗೊಳಿಸಲು ಅವಕಾಶ ನೀಡಿಲ್ಲ, ಮುಂದೆಯೂ ನೀಡುವುದಿಲ್ಲ" ಎಂದು ಸ್ಪಷ್ಟಪಡಿಸಿದರು.

ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, "ಅವರು ಮೇಧಾವಿಗಳು, ಅವರಿಗೆ ಅನುಭವ ಹೆಚ್ಚಾಗಿದೆ. ಅವರಿಗೆ ಜೋತಿಷ್ಯ ಗೊತ್ತಿದೆ. ಅವರ ನುಡಿಮುತ್ತುಗಳನ್ನು ನಾವು ಸಂತೋಷದಿಂದ ಕೇಳುತ್ತಿದ್ದೇವೆ. ಅವರ ಬಾಯಿಗೆ ಬೀಗ ಹಾಕುವ ಶಕ್ತಿ ನನ್ನಲಿಲ್ಲ. ಅವರು ಮಾತನಾಡುತ್ತಿರಬೇಕು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ನಮ್ಮ ಪಕ್ಷ ಅಧಿಕಾರದಲ್ಲಿರುವುದನ್ನು ಅವರಿಂದ ಸಹಿಸಲಾಗುತ್ತಿಲ್ಲ. ಅವರಿಗೆ ಅಧಿಕಾರ ಸಿಗಲಿಲ್ಲ ಎಂಬ ಹತಾಶೆಯಿಂದ ಅವರು ಏನೇನೋ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ" ಎಂದರು.

ಸಿಎಂ ಸಮರ್ಥಿಸಿಕೊಂಡ ಡಿಸಿಎಂ: ಸಿಎಂ ಖಾಸಗಿ ವಿಮಾನ ಪ್ರಯಾಣದ ಬಗ್ಗೆ ವಿರೋಧ ಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿ, "ಸಮಯ ಉಳಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳು ವಿಮಾನಗಳಲ್ಲಿ ಓಡಾಡುವುದು ಸಹಜ" ಎಂದು ಸಮರ್ಥಿಸಿಕೊಂಡರು.

ಮುಖ್ಯಮಂತ್ರಿಗಳು ಪ್ರಧಾನಿ ಭೇಟಿಗೆ ವಿರೋಧ ಪಕ್ಷಗಳ ನಾಯಕರನ್ನು ಕರೆದುಕೊಂಡು ಹೋಗಬೇಕಿತ್ತು ಎನ್ನುವ ಪ್ರಶ್ನೆಗೆ, ನಾವು ಸರ್ವಪಕ್ಷ ನಿಯೋಗವನ್ನು ಪ್ರಧಾನಿ ಬಳಿ ಕರೆದೊಯ್ಯಲು ಸಿದ್ಧವಿದ್ದೇವೆ. ಅವರು ಅಧಿಕಾರಿಗಳ ಭೇಟಿಗೆ ಸಮಯ ನೀಡಿಲ್ಲ ಎಂದರು.

ಸಚಿವ ಸಂಪುಟ ಸಭೆಯಲ್ಲಿ ನೀರಿನ ದರ ಹೆಚ್ಚಳ ಮಾಡಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, "ಜನಸಾಮಾನ್ಯರ ಮನೆಗಳ ನೀರಿನ ದರ ಏರಿಕೆ ಆಗಿಲ್ಲ. 2018ರಲ್ಲಿ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಹೈಕೋರ್ಟ್​ನಲ್ಲಿ ತಡೆಯಾಜ್ಞೆ ಇತ್ತು. ಹೀಗಾಗಿ 2018ರಲ್ಲಿ ನಿಗದಿ ಮಾಡಿದಂತೆ ಕೈಗಾರಿಕೆಗಳ ನೀರಿನ ದರ ಏರಿಕೆ ಮಾಡಲಾಗಿದೆ. 2013ರಿಂದ ಇಲ್ಲಿಯವರೆಗೂ ಕಳೆದ 10 ವರ್ಷಗಳಿಂದ ಬೆಂಗಳೂರಿನ ಜನಸಾಮಾನ್ಯರ ಬಳಕೆ ನೀರಿನ ದರವನ್ನು ಏರಿಕೆ ಮಾಡಿಲ್ಲ. ಈಗ 2018ರ ಕಾನೂನನ್ನು ಸಕ್ರಮ ಮಾಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ:ಪತ್ರಿಕಾ ರಂಗ ತನ್ನ ಜವಾಬ್ದಾರಿ ಮರೆತಿದೆ: ಸಿಎಂ ಸಿದ್ದರಾಮಯ್ಯ

Last Updated : Dec 22, 2023, 7:16 PM IST

ABOUT THE AUTHOR

...view details