ಕರ್ನಾಟಕ

karnataka

CT Ravi: ಹಸ್ತಕ್ಕೆ ಆಪರೇಷನ್ ಹೇಗೆ ಮಾಡಬೇಕೆಂದು ನಮಗೆ ಗೊತ್ತಿದೆ; ಕಾಂಗ್ರೆಸ್​ಗೆ ಸಿ.ಟಿ.ರವಿ ಟಾಂಗ್

By

Published : Aug 19, 2023, 7:52 PM IST

Updated : Aug 19, 2023, 10:52 PM IST

ತಮ್ಮ ಪಕ್ಷದ ಹಿರಿಯ ಶಾಸಕರನ್ನು ಹಿಡಿದಿಡಲಾಗದ ಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಇದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಟೀಕಿಸಿದ್ದಾರೆ.

ct-ravi-reaction-on-congress-party
CT Ravi: ಹಸ್ತಕ್ಕೆ ಆಪರೇಷನ್ ಹೇಗೆ ಮಾಡಬೇಕೆಂದು ನಮಗೆ ಗೊತ್ತಿದೆ.. ಕಾಂಗ್ರೆಸ್​ಗೆ ಟಾಂಗ್​ ಕೊಟ್ಟ ಸಿ.ಟಿ.ರವಿ

ಮಾಜಿ ಸಚಿವ ಸಿ.ಟಿ.ರವಿ

ಬೆಂಗಳೂರು: "ರಾಜ್ಯ ಕಾಂಗ್ರೆಸ್ ಸರ್ಕಾರವು ಅತಿಯಾಗಿ ವರ್ತಿಸಿದರೆ ಹಸ್ತಕ್ಕೆ ಆಪರೇಷನ್ ಹೇಗೆ ಮಾಡಬೇಕೆಂದು ನಮಗೆ ಗೊತ್ತಿದೆ" ಎಂದು ಬಿಜೆಪಿ ಮಾಜಿ ರಾಷ್ಟ್ರ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಎಚ್ಚರಿಕೆ ನೀಡಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಹಸ್ತಕ್ಕೆ ಆಪರೇಷನ್ ಮಾಡಿದರೆ ಏನಾಗುತ್ತದೆ ಎಂಬುದನ್ನು ನಾನೀಗ ಹೇಳುವುದಿಲ್ಲ. ನಮಗೆ ಹಿಂದೆ 104 ಸೀಟು ಬಂದಿತ್ತು. ಯಾರಿಗೂ ಬಹುಮತ ಇರಲಿಲ್ಲ. ಕಾಂಗ್ರೆಸ್- ಜೆಡಿಎಸ್ ಸೇರಿ ಸರ್ಕಾರ ನಡೆಸಿದ್ದವು. 3 ತಿಂಗಳಿಗೇ ನಿಮ್ಮದು ಅಧ್ವಾನ ಆಗಿತ್ತು. ಒಬ್ಬರಿಗೆ ಒಬ್ಬರನ್ನು ಕಂಡರೆ ಆಗದ ಸ್ಥಿತಿ ಇತ್ತು. ಅದರ ಪರಿಣಾಮವಾಗಿ ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ಆದರೂ ಎರಡೂ ಪಕ್ಷಗಳು ಹೀನಾಯವಾಗಿ ಸೋತಿದ್ದವು" ಎಂದು ಹೇಳಿದರು.

"ಅನಿಶ್ಚಿತತೆ, ಅರಾಜಕೀಯ ಪರಿಸ್ಥಿತಿ ಬಂದಾಗ ಶಾಸಕರಿಗೆ ಬಿಜೆಪಿಯೇ ಪರ್ಯಾಯ ಎನಿಸಿತ್ತು. ಈಗ ಪೂರ್ಣ ಬಹುಮತ ಇದೆ. ಅತಿಯಾಗಿ ಮಾಡಲು ಹೋದರೆ ಪರಿಸ್ಥಿತಿ ಕೆಟ್ಟದ್ದಾಗಲಿದೆ. ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತ ಪಡೆದು ಆಡಳಿತ ನಡೆಸುತ್ತಿದೆ. ಒಳ್ಳೆಯ ಆಡಳಿತ ನಡೆಸುವ ಗುರಿ ಇಟ್ಟುಕೊಳ್ಳಬೇಕು. ಇಲ್ಲದೇ ಇರುವುದನ್ನು ಮಾಡಲು ಹೊರಟರೆ ಸುಮ್ಮನೆ ಕುಳಿತುಕೊಳ್ಳುವವರು ನಾವಲ್ಲ. ನಾವೇನಾದರೂ ಮಾಡಿದರೆ ಮೇಲೇಳಲು ಆಗಲ್ಲ. ನಾವೇನು ಮಾಡುತ್ತೇವೆಂದು ಹೇಳುವುದಿಲ್ಲ. ಮುಟ್ಟಿನೋಡುವಂತೆ ಮಾಡುತ್ತೇವೆ" ಎಂದರು.

"ತಮ್ಮ ಪಕ್ಷದ ಹಿರಿಯ ಶಾಸಕರನ್ನು ಹಿಡಿದಿಡಲಾಗದ ಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಇದೆ. ನಮ್ಮ ಪಕ್ಷ ಬಿಟ್ಟು ಯಾರೂ ಹೋಗುವುದಿಲ್ಲ ಎಂದು ಪ್ರಶ್ನೆಗಳಿಗೆ ಉತ್ತರ ಕೊಟ್ಟರು. ಇವತ್ತು 4 ಜನ ಸಚಿವರು ಪತ್ರ ಬರೆದಿದ್ದಾರೆ. ಎಲ್ಲವೂ ಸರಿ ಇದ್ದರೆ ಯಾಕೆ ಪತ್ರ ಬರೆಯುತ್ತಾರೆ ಎಂದು ಪ್ರಶ್ನಿಸಿದರು. ಎಲ್ಲವೂ ಸರಿ ಇಲ್ಲದಾಗ ರಾಜಕೀಯದಲ್ಲಿ ಪ್ರೇಮಪತ್ರಗಳು ಶುರುವಾಗುತ್ತವೆ. ಈಗ ಕಾಂಗ್ರೆಸ್‍ನಲ್ಲಿ ಎಲ್ಲವೂ ಸರಿ ಇಲ್ಲವೆಂದು ಸಚಿವರು, ಶಾಸಕರೇ ಹೇಳುವಾಗ ಯಾರೂ ಅಲ್ಲಿಗೆ ಹೋಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನು ಮೀರಿ ಅತಿರೇಕಕ್ಕೆ ಕೈ ಹಾಕಿದರೆ ನಮಗೂ ಏನು ಮಾಡಬೇಕೆಂದು ಗೊತ್ತಿದೆ" ಎಂದು ಹೇಳಿದರು.

"ನಮಗೆ ಪಾರ್ಟಿ ಕಟ್ಟಲು ಗೊತ್ತು. ಅದನ್ನು ಉಳಿಸಿಕೊಳ್ಳುವುದೂ ಗೊತ್ತು. ಅಡ್ಡ ಬಂದವರಿಗೆ ಹೇಗೆ ಉತ್ತರ ಕೊಡಬೇಕೆಂದು ಗೊತ್ತಿದೆ. ನಾವು ರಾಜಕೀಯ ದೃಷ್ಟಿಯಿಂದ ಕಾಂಗ್ರೆಸ್ ಶಾಸಕರನ್ನು ಸಂಪರ್ಕ ಮಾಡಿಲ್ಲ ಎಂದು ಪ್ರಶ್ನೆಗೆ ಉತ್ತರ ಕೊಟ್ಟ ಅವರು, ರಾಜಕೀಯದ ಪಗಡೆ ದಾಳ ಏಕಮುಖ ಅಲ್ಲ, ಚೆಸ್ ಏಕಮುಖ ಅಲ್ಲ. ನಮಗೆ ಚೆಕ್‍ಮೇಟ್ ಮಾಡಲು ಬಂದರೆ ನಾವೂ ಚೆಕ್‍ಮೇಟ್ ಮಾಡಲು ಸಿದ್ಧರಿದ್ದೇವೆ" ಎಂದು ಮಾರ್ಮಿಕವಾಗಿ ನುಡಿದರು.

"ಡಿ.ಕೆ.ಶಿವಕುಮಾರ್ ಡಿಸಿಎಂ ಆಗಿದ್ದಾರೆ. ತಮ್ಮ ಹುದ್ದೆಯನ್ನು ಅರಿತು ಜವಾಬ್ದಾರಿಯಿಂದ ಮಾತನಾಡಲಿ. ಆ ದಿನಗಳ ಧ್ವನಿ ಅವರದಾಗಬಾರದು ಎಂದರು. ನೀವು ಮೊದಲು ಲೋಕಾಯುಕ್ತಕ್ಕೆ ಬಾಗಿಲು ಹಾಕಿದ್ದಿರಿ. ಕೇಸು ಮುಚ್ಚಿಹಾಕಲು ಎಸಿಬಿ ತಂದಿದ್ದೀರಿ. ಅರ್ಕಾವತಿ 8 ಸಾವಿರ ಕೋಟಿ ಕುರಿತ ನನ್ನ ಆರೋಪಕ್ಕೆ ಒಂದು ಶಬ್ದದಲ್ಲಾದರೂ ಪ್ರತಿಕ್ರಿಯೆ ಕೊಟ್ಟಿದ್ದೀರಾ? ಇದ್ದ ಮೂವರಲ್ಲಿ ಕದ್ದವರ್ಯಾರು? ಎಂದು ಪ್ರಶ್ನಿಸಿದರು. ಈಗ ಅವರು ಪ್ರಾಮಾಣಿಕರಲ್ಲವೇ? ಪ್ರಧಾನಿ ಹುದ್ದೆಗೆ ಟವೆಲ್ ಹಾಕಿದ್ದಾರಲ್ಲವೇ? ಎಂದು ಪ್ರಶ್ನಿಸಿದರಲ್ಲದೆ, ದೇವೇಗೌಡರೇ ಪ್ರಧಾನಿ ಆಗಿದ್ದಾರೆ, ಸಿದ್ದರಾಮಯ್ಯ ಯಾಕಾಗಬಾರದು ಎಂದು ವಿಶ್ವನಾಥ್ ಹೇಳಿದ್ದಾರೆ. ಈ ಮೂಲಕ ಪ್ರಿಯಾಂಕ ಮತ್ತು ರಾಹುಲ್ ಗಾಂಧಿಗೆ ಟಾಂಗ್ ಕೊಟ್ಟಿದ್ದಾರೆ" ಎಂದು ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಗುವುದಿಲ್ಲ: "ನರೇಂದ್ರ ಮೋದಿ ಅವರೇ ಮತ್ತೆ ಪ್ರಧಾನಿ ಆಗಲಿದ್ದಾರೆ. ಕಳೆದ ಸಾರಿಗಿಂತ ಹೆಚ್ಚು ಮೆಜಾರಿಟಿ ಬರಲಿದೆ. ಆದರೆ, ಕಾಂಗ್ರೆಸ್ಸಿನೊಳಗೆ ಪ್ರಿಯಾಂಕ ಮತ್ತು ರಾಹುಲ್ ಗಾಂಧಿಯ ನೇತೃತ್ವವನ್ನು ಒಪ್ಪುವುದಿಲ್ಲ ಎಂಬ ಸಂದೇಶವನ್ನು ಸಿದ್ದರಾಮಯ್ಯನವರು ವಿಶ್ವನಾಥ್ ಮೂಲಕ ಕೊಟ್ಟಿದ್ದಾರೇನೋ ಎಂಬ ಅನುಮಾನ ನನ್ನದು" ಎಂದು ತಿಳಿಸಿದರು.

ಇದನ್ನೂ ಓದಿ:ಮಹದಾಯಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಬದ್ಧ: ಪ್ರಹ್ಲಾದ್ ಜೋಶಿ

Last Updated : Aug 19, 2023, 10:52 PM IST

ABOUT THE AUTHOR

...view details