ಕರ್ನಾಟಕ

karnataka

ಬರಗೆಟ್ಟ ಹೊತ್ತಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡುತ್ತಿರುವ ಮತಿಗೆಟ್ಟ ವರನಂತೆ ಸರ್ಕಾರದ ವರ್ತನೆ: ಹೆಚ್​ಡಿಕೆ

By

Published : Jun 26, 2023, 8:18 PM IST

ಆಹಾರ ಪದಾರ್ಥಗಳ ಬೆಲೆ ಏರಿಕೆಯನ್ನು ನಿಯಂತ್ರಿಸದ ಕಾಂಗ್ರೆಸ್​ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.​​

former-cm-hd-kumarswamy-slams-state-govt-of-price-hike
ಬರಗೆಟ್ಟ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡುತ್ತಿರುವ ಮತಿಗೆಟ್ಟ ವರನಂತೆ ಸರ್ಕಾರ ವರ್ತನೆ: ಹೆಚ್​ಡಿಕೆ

ಬೆಂಗಳೂರು: ಈ ಸರಕಾರ ಬರಗೆಟ್ಟ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಿಗೆಟ್ಟ ವರನಂತೆ ವರ್ತಿಸುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಆಹಾರ ಪದಾರ್ಥಗಳ ಬೆಲೆ ನಿರಂತರವಾಗಿ ಏರಿಕೆ ಆಗುತ್ತಿದ್ದರೂ ಅದಕ್ಕೆ ನಿಯಂತ್ರಣ ಹಾಕದ ರಾಜ್ಯ ಕಾಂಗ್ರೆಸ್ ಸರಕಾರ ಮೇಲೆ ಟೀಕಾಪ್ರಹಾರ ನಡೆಸಿದ್ದಾರೆ.

ಐದು ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿ ಸುಳ್ಳು ಹೇಳಿದ್ದ ರಾಜ್ಯ ಕಾಂಗ್ರೆಸ್ ಸರಕಾರ ಬರಗೆಟ್ಟ ಈ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಗೆಟ್ಟ ವರನಂತೆ ವರ್ತಿಸುತ್ತಿದೆ. ಬೆಲೆ ಏರಿಕೆ ಹೊಡೆತಕ್ಕೆ ಜನ ತತ್ತರಿಸುತ್ತಿರುವುದು ಅದರ ಕಣ್ಣಿಗೆ ಕಾಣುತ್ತಿಲ್ಲ ಎಂದಿರುವ ಅವರು, 'ಜನರಿಗೆ ಬೆಲೆ ಏರಿಕೆ ಗ್ಯಾರಂಟಿ ' ಎಂದು ಹ್ಯಾಷ್ ಟ್ಯಾಗ್ ಮಾಡಿದ್ದಾರೆ.

ನನಗೂ ಫ್ರೀ, ನಿನಗೂ ಫ್ರೀ ಎಂದು ಗ್ಯಾರಂಟಿ ಜಾಗಟೆ ಹೊಡೆದ ಈ ಸರಕಾರಕ್ಕೆ ಮಾರುಕಟ್ಟೆಯಲ್ಲಿ ಗಗನಮುಖಿಯಾದ ಆಹಾರ ಪದಾರ್ಥಗಳ ಬೆಲೆ ಮೇಲೆ ನಿಯಂತ್ರಣವೇ ಇಲ್ಲ. ಆಹಾರ ಮತ್ತು ನಾಗರಿಕ ಪೂರೈಕೆ, ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಗಳು ಜನರ ಕಣ್ಣೀರಿನಲ್ಲಿ ಗೆಣಸು ಬೇಯಿಸಿಕೊಳ್ಳುತ್ತಿವೆ. ಅವರಿಗೆ ಬೆಲೆ ಇಳಿಕೆ ಬಗ್ಗೆ ಚಿಂತನೆಯೇ ಇಲ್ಲ ಎಂದು ಕಿಡಿಕಾರಿದ್ದಾರೆ.

ಇನ್ನೊಬ್ಬರ ಮೇಲೆ ಗೂಬೆ ಕೂರಿಸುವ ಈ ಸರಕಾರ ಬಂದು ತಿಂಗಳ ಮೇಲಾಯಿತು. ಅಧಿಕಾರ ಸಿಕ್ಕ ಕೂಡಲೇ ವರ್ಗಾವಣೆ ದಂಧೆಯ ದಾಸ್ಯಕ್ಕೆ ಬಿದ್ದ ಸರಕಾರಕ್ಕೆ ಮಾರುಕಟ್ಟೆಯಲ್ಲಿ ಹೆಚ್ಚುತ್ತಲೇ ಹೋಗುತ್ತಿರುವ ಬೆಲೆಗಳ ಬಗ್ಗೆ, ಆಹಾರ ಪದಾರ್ಥಗಳ ದುಬಾರಿ ಬಗ್ಗೆ ಗಮನ ಹೋಗಲೇ ಇಲ್ಲ. ಹಣದ ಹಪಾಹಪಿ ಭಾಗ್ಯಗಳನ್ನು ಬಲಿ ತೆಗೆದುಕೊಳ್ಳುವ ದುಸ್ಥಿತಿಗೆ ದೂಡಿದೆ ಎಂದು ದೂರಿದ್ದಾರೆ.

ಬೆಲೆ ಏರಿಕೆ ಪಟ್ಟಿ ಓದಿದರೆ ಎದೆ ನಡುಗುತ್ತದೆ. ಅಕ್ಕಿ ಬೆಲೆ ಕೆಜಿಗೆ ಸರಾಸರಿ 20 ರೂಪಾಯಿ ಏರಿದ್ದರೆ, ಕೆಜಿ ಟೊಮ್ಯಾಟೋ ಬೆಲೆ 100 ರೂಪಾಯಿ ಮುಟ್ಟಿದೆ. ಈ ಏರಿಕೆ ಲಾಭ ಅತ್ತ ರೈತನಿಗೂ ಇಲ್ಲ, ಇತ್ತ ಗ್ರಾಹಕನಿಗೂ ಇಲ್ಲ. ಜನ ಬೆಲೆ ಬೆಂಕಿಯಲ್ಲಿ ಬೇಯುತ್ತಿದ್ದರೆ ಈ ಸರಕಾರ ಆ ಬೇಗೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತಿದೆ, ಹೊಸ ಹುಂಡಿಗಳಿಗೆ ಜಾಗ ಹುಡುಕುತ್ತಿದೆ ಎಂದು ಟೀಕಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಪಕ್ಷ, ತಾನು ಕೊಟ್ಟ ಭರವಸೆಗಳ ಬಗ್ಗೆ ಉತ್ತರ ಹೇಳಲಿ? ಬೆಲೆಗಳ ಇಳಿಕೆಯ ಬಗ್ಗೆ ಹೇಳಿದ್ದೆಲ್ಲ ಎಲ್ಲಿ ಹೋಯಿತು? ಮತ ಪಡೆದ ಮೇಲೆ ಎಲ್ಲಾ ಮರೆತು ಹೋಯಿತಾ? 135 ಸೀಟು ಸಿಕ್ಕಿದ ಮೇಲೆ ಪ್ರಣಾಳಿಕೆ ಪುಸ್ತಕಕ್ಕೆ ಮೂವತ್ತೇ ದಿನದಲ್ಲಿ ಗೆದ್ದಲು ಹಿಡಿಯಿತಾ? ನುಡಿದಂತೆ ನಡೆದಿದ್ದೇವೆ ಎಂದಿರಿ, ನುಡಿದಂತೆ ಎಲ್ಲಿ ನಡೆದಿದ್ದೀರಿ? ನುಡಿದಂತೆ ನಡೆದಿದ್ದೇವೆ ಎಂದರೆ ಲಂಗೂ ಲಗಾಮು ಇಲ್ಲದೆ ಬೆಲೆಗಳನ್ನು ಆಕಾಶಕ್ಕೆ ಜಿಗಿಸುವುದಾ? ಮಾರುಕಟ್ಟೆಯ ದಲ್ಲಾಳಿಗಳಿಗೆ ಶಕ್ತಿ ತುಂಬುವುದಾ? ಶಕ್ತಿ ಯೋಜನೆ ಮೂಲಕ ಮಹಿಳೆಯರ ಗಮನ ಬೇರೆಡೆಗೆ ಸೆಳೆದು, ಅವರ ಅಡುಗೆ ಮನೆ ಬಜೆಟ್'ಗೆ ಕೊಳ್ಳಿ ಇಡುವುದಾ? ಎಂದು ಸರಕಾರವನ್ನು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಹೊಸ ಗ್ಯಾರಂಟಿಗಳು ಹೀಗಿವೆ ಎಂದು ಟಾಂಗ್ ನೀಡಿರುವ ಅವರು ಸರಕಾರದ ಹೊಸ 5 ಗ್ಯಾರಂಟಿಗಳನ್ನು ಹೀಗೆ ಪಟ್ಟಿ ಮಾಡಿದ್ದಾರೆ.

1.ಅಕ್ಕಿಭಾಗ್ಯ ಹಗಲು ಕನಸು, ಬೆಲೆ ಏರಿಕೆ ಕನಸು ನನಸು!

2.ಗೃಹಜ್ಯೋತಿ ಈಗ ಸುಡುಜ್ಯೋತಿ!

3.ಶಕ್ತಿ ಯೋಜನೆಯಿಂದ ಸಾರಿಗೆ ವ್ಯವಸ್ಥೆಯಲ್ಲಿ ಅರಾಜಕತೆ!

4.ಗೃಹಲಕ್ಷ್ಮಿಗೆ ಗ್ರಹಣ!

5.ನಿದಿರೆಗೆ ಜಾರಿದೆ ಯುವನಿಧಿ!

ಕಾಂಗ್ರೆಸ್ ಸರಕಾರ ಸುಳ್ಳು ಹೇಳಿದ್ದು ಸಾಕು, ಇನ್ನಾದರೂ ಏರಿದ ಬೆಲೆ ಕಡಿತಕ್ಕೆ ಕ್ರಮ ಕೈಗೊಳ್ಳಲಿ. ಇಲ್ಲವಾದರೆ ರಾಜ್ಯದ ನಾರಿಶಕ್ತಿ ಆಕ್ರೋಶಕ್ಕೆ ನೀವು ನಾಮಾವಶೇಷ ಇಲ್ಲದಂತೆ ಹೋಗುತ್ತೀರಿ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ :Price hike: ಗಗನಕ್ಕೇರಿದ ದಿನಸಿ ಹಾಗೂ ತರಕಾರಿ ಬೆಲೆ: ಜನಸಾಮಾನ್ಯರು ಕಂಗಾಲು

ABOUT THE AUTHOR

...view details