ಕರ್ನಾಟಕ

karnataka

ಕರ್ನಾಟಕ ಸಂಕಷ್ಟದಲ್ಲಿದೆ: ನಾವೆಲ್ಲರೂ ಪಣತೊಟ್ಟು ಹೊರಾಡೋಣ, ಹೆಚ್​ ಡಿ ಕುಮಾರಸ್ವಾಮಿ ಟ್ವೀಟ್

By ETV Bharat Karnataka Team

Published : Sep 8, 2023, 4:09 PM IST

ಪಕ್ಷದ ಚಟುವಟಿಕೆಗಳಲ್ಲಿ ಮತ್ತೆ ಸಕ್ರಿಯವಾಗಿ ಭಾಗಿಯಾಗುತ್ತಿದ್ದೇನೆ ಎಂದು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಟ್ವೀಟ್​ ಮೂಲಕ ಹೇಳಿದ್ದಾರೆ.

ಹೆಚ್​ ಡಿ ಕುಮಾರಸ್ವಾಮಿ ಟ್ವೀಟ್
ಹೆಚ್​ ಡಿ ಕುಮಾರಸ್ವಾಮಿ ಟ್ವೀಟ್

ಬೆಂಗಳೂರು:ನಿಮ್ಮೆಲ್ಲರ ಪ್ರೀತಿ, ಹಾರೈಕೆ, ದೈವದ ಕರುಣೆ, ತಂದೆ ತಾಯಿಯರ ಆಶೀರ್ವಾದದಿಂದ ನನ್ನ ಆರೋಗ್ಯ ಅತ್ಯುತ್ತಮವಾಗಿ ಸುಧಾರಿಸಿದೆ. ಜೆಡಿಎಸ್ ಪಕ್ಷದ ಚಟುವಟಿಕೆಗಳಲ್ಲಿ ಮತ್ತೆ ಸಕ್ರಿಯವಾಗಿ ಭಾಗಿಯಾಗುತ್ತಿದ್ದೇನೆ. ನಾವೆಲ್ಲರೂ ಪಣತೊಟ್ಟು ಹೊರಾಡೋಣ, ಪಕ್ಷವನ್ನು ಚೈತನ್ಯಶೀಲವಾಗಿ ಮರಳಿ ಕಟ್ಟೋಣ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಸಂಕಷ್ಟದಲ್ಲಿದೆ. ತೀವ್ರ ಬರ-ನೆರೆ, ಅನಧಿಕೃತ ಲೋಡ್ ಶೆಡ್ಡಿಂಗ್, ಕಾವೇರಿ ಬಿಕ್ಕಟ್ಟಿನಿಂದ ತತ್ತರಿಸುತ್ತಿದೆ. ಅನ್ನ ಕೊಡುವ ರೈತರನ್ನು, ತೆರಿಗೆ ತೆರುವ ನಾಗರಿಕರನ್ನು ಕಾಲ ಕಸದಂತೆ ಕಡೆಗಣಿಸಲಾಗಿದೆ. ಈ ಸಂಕಷ್ಟದ ದಿನಗಳಲ್ಲಿ ನಾವು ಜನರ ಜತೆ ಬದ್ಧತೆಯಿಂದ ನಿಲ್ಲಬೇಕು. ಜನಪರ ನಿಲುವು, ಹೋರಾಟ ನಮ್ಮೆಲ್ಲರ ಹೊಣೆ, ನೈತಿಕ ಜವಾಬ್ದಾರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸೋತಿದ್ದೇವೆ, ನಿಜ.ಸೋಲೇ ಕೊನೆಯಲ್ಲ. ಹೋರಾಟದ ಹಾದಿಯಲ್ಲಿ ನಾವೆಲ್ಲರೂ ಸ್ಥೈರ್ಯ, ಅರ್ಪಣಾಭಾವದಿಂದ ಹೆಜ್ಜೆ ಹಾಕಲೇಬೇಕು. ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರ ಸಾನ್ನಿಧ್ಯದಲ್ಲಿ ಬೆಂಗಳೂರು ಅರಮನೆ ಮೈದಾನದಲ್ಲಿ ಸೆ.10 ರ ಭಾನುವಾರ ಬೆಳಗ್ಗೆ 10.30 ಗಂಟೆಗೆ ಮಹತ್ವದ ಸಭೆ ಕರೆದಿದ್ದೇವೆ ಎಂದು ಹೇಳಿದ್ದಾರೆ. ನಾನೂ ಸೇರಿ ಪ್ರತಿಯೊಬ್ಬರೂ ಪಕ್ಷದ ಕಟ್ಟಾಳುಗಳೇ ಎನ್ನವುದನ್ನು ಯಾರೂ ಮರೆಯುವಂತಿಲ್ಲ. ಪಕ್ಷದ ಉಳಿವು, ಗೆಲುವಿಗಾಗಿ ಅವಿರತವಾಗಿ ಶ್ರಮಿಸೋಣ. ತಪ್ಪದೇ ಸಭೆಗೆ ಬನ್ನಿ, ಮುಕ್ತವಾಗಿ ಮಾತನಾಡೋಣ. ಮುಂದಿನ ಹೆಜ್ಜೆಗಳನ್ನು ದೃಢವಾಗಿ ಇಡೋಣ ಎಂದು ನುಡಿದಿದ್ದಾರೆ.

"ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ.." ಈ ವಿವೇಕವಾಣಿಯೇ ನಮ್ಮ ಪಾಲಿನ ಮೂಲಮಂತ್ರ. ದಯಮಾಡಿ ಎಲ್ಲರೂ ಬನ್ನಿ.. ದೃಢ ಸಂಕಲ್ಪ ಮಾಡೋಣ, ದೃಢ ಹೆಜ್ಜೆಗಳನ್ನು ಇಡೋಣ ಎಂದು ಹೆಚ್ ಡಿಕೆ ಕರೆ ನೀಡಿದ್ದಾರೆ.

ಆಗಸ್ಟ್​​ 30 ರಂದು ತೀವ್ರ ಜ್ವರದಿಂದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಜಯನಗರದಲ್ಲಿರುವ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದರು. ತಕ್ಷಣ ಅವರನ್ನು ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗಿತ್ತು. ಇದರ ನಡುವೆಯೇ ತಮಿಳುನಾಡಿಗೆ ಕಾವೇರಿ ನೀರು ಹರಿಬಿಡುವ ಸರ್ಕಾರದ ಕ್ರಮವನ್ನು ವಿರೋಧಿಸಿ ಆಸ್ಪತ್ರೆಯಲ್ಲಿದ್ದುಕೊಂಡೇ ಕಾವರಿ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕರೆ ನೀಡಿದ್ದರು. ಮುಂಬರುವ ಲೋಕಸಭಾ ಚುನಾವಣೆ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಮತ್ತು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಭಾನುವಾರ ಜೆಡಿಎಸ್ ಸಭೆ ನಡೆಸಲಿದೆ.

ಇದನ್ನೂ ಓದಿ:'ಲೋಕ' ಸಮರಕ್ಕೆ ಬಿಜೆಪಿ-ಜೆಡಿಎಸ್ ದೋಸ್ತಿ... 'ದಳ'ಕ್ಕೆ ಸಿಗಲಿರುವ 4 ಕ್ಷೇತ್ರಗಳು ಯಾವುವು?

ABOUT THE AUTHOR

...view details