ಕರ್ನಾಟಕ

karnataka

ಆದಿಯೋಗಿ ಪ್ರತಿಮೆ ನಿರ್ಮಾಣ ಪ್ರಶ್ನಿಸಿದ್ದ ಪಿಐಎಲ್ ವಜಾ

By

Published : Feb 9, 2023, 5:52 PM IST

ಆದಿಯೋಗಿ ಪ್ರತಿಮೆ ನಿರ್ಮಾಣ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದ್ದು, ಕಾನೂನು ತೊಡಕು ನಿವಾರಣೆಯಾಗಿದೆ.

high-court-dismissed-pil-challenging-construction-of-adiyogi-statue
ವಿಡಿಯೋ ಬೇಡ

ಬೆಂಗಳೂರು: ಚಿಕ್ಕಬಳ್ಳಾಪುರದ ಆವಲಗುರ್ಕಿ ಗ್ರಾಮದ ನಂದಿ ಬೆಟ್ಟದ ಸಮೀಪ ಆದಿಯೋಗಿ ಪ್ರತಿಮೆ ನಿರ್ಮಾಣ ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ಹೈಕೋರ್ಟ್ ವಜಾಗೊಳಿಸಿತು. ಇದರಿಂದಾಗಿ ಆದಿಯೋಗಿ ಪ್ರತಿಮೆ ನಿರ್ಮಾಣಕ್ಕೆ ಮಂಜೂರಾಗಿರುವ ಜಮೀನಿನಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಇದ್ದ ಕಾನೂನು ಅಡ್ಡಿ ನಿವಾರಣೆಯಾಗಿದೆ.

ಚಿಕ್ಕಬಳಾಪುರ ಕಸಬಾ ಹೋಬಳಿಯ ಚಂಬಳ್ಳಿಯ ನಿವಾಸಿ ಎಸ್.ಕ್ಯಾತಪ್ಪ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಆಶೋಕ್ ಎಸ್.ಕಿಣಗಿ ಅವರಿದ್ದ ವಿಭಾಗೀಯ ಪೀಠದಲ್ಲಿ ನಡೆಸಲಾಯಿತು. ಇಶಾ ಫೌಂಡೇಶನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಉದಯ್ ಹೊಳ್ಳ ಅವರು, ಅರ್ಜಿದಾರರ ಕ್ರಿಮಿನಲ್ ಹಿನ್ನೆಲೆಯನ್ನು ಬಹಿರಂಗಪಡಿಸಿಲ್ಲ, ವಾಸ್ತವಾಂಶವನ್ನು ಮುಚ್ಚಿಟ್ಟು ಪಿಐಎಲ್ ಸಲ್ಲಿಸಿದ್ದಾರೆ. ಪಿಐಎಲ್ ನಿಯಮಗಳನ್ನು ಪಾಲಿಸಿಲ್ಲವೆಂದು ನ್ಯಾಯಪೀಠದ ಗಮನ ಸೆಳೆದರು.

ಚಳವಳಿಗಳ ಹಿನ್ನೆಲೆಯಲ್ಲಿ ಕೇಸ್ ಹಾಕಿದ್ದಾರೆ, ಮೂರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ತಪ್ಪು ಮಾಹಿತಿ ನೀಡಿ ಪಿಐಎಲ್ ಹಾಕುವ ಹಕ್ಕು ಎಲ್ಲಿದೆ ಎಂದು ಪ್ರಶ್ನಿಸಿದರು. ದುರುದ್ದೇಶಪೂರ್ವಕ ಪಿಐಎಲ್ ಅನ್ನು ವಜಾಗೊಳಿಸಬೇಕು ಎಂದು ಆಶೋಕ್ ಎಸ್.ಕಿಣಗಿ ಅವರು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇಶಾ ಫೌಂಡೇಶನ್ ಪರ ವಕೀಲರ ವಾದವನ್ನು ಪುರಸ್ಕರಿಸಿದ ನ್ಯಾಯಪೀಠ, ಕೋರ್ಟ್​​ನಲ್ಲಿ ಪಿಐಎಲ್ ಸಲ್ಲಿಸುವಾಗ ಶುದ್ದಹಸ್ತರಾಗಿರಬೇಕು. ಬೇರೆಯವರ ಮೇಲೆ ಬೆರಳು ತೋರಿಸುವ ಮುನ್ನ ನೀವು ಸರಿಯಾಗಿರಬೇಕು. ಉದ್ದೇಶ ಮಾತ್ರವಲ್ಲ, ಮಾರ್ಗವೂ ಶುದ್ಧವಿರಬೇಕು ಎಂದು ಮಹಾತ್ಮ ಗಾಂಧಿ ಹೇಳಿಕೆ ಉಲ್ಲೇಖಿಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರಿದ್ದ ಪೀಠ, ಉತ್ತಮ ಹಿನ್ನೆಲೆಯುಳ್ಳವರು ಅರ್ಜಿ ಸಲ್ಲಿಸಬಹುದು ಎಂದು ಸ್ಪಷ್ಟಪಡಿಸಿ ಎಸ್. ಕ್ಯಾತಪ್ಪ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿತು.

ಪ್ರಕರಣದ ಹಿನ್ನೆಲೆ: ಆದಿಯೋಗಿ ಪ್ರತಿಮೆ ನಿರ್ಮಾಣ ಪ್ರಶ್ನಿಸಿ ಚಿಕ್ಕಬಳ್ಳಾಪುರ ಕಸಬಾ ಹೋಬಳಿಯ ಚಂಬಳ್ಳಿಯ ನಿವಾಸಿ ಎಸ್.ಕ್ಯಾತಪ್ಪ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಆದಿಯೋಗಿ ಪ್ರತಿಮೆ ಅನಾವರಣಕ್ಕೆ ಅವಕಾಶ ಮಾಡಿಕೊಟ್ಟಿತ್ತು. ಈ ಪ್ರದೇಶದಲ್ಲಿ ಪರಿಸರಕ್ಕೆ ಹಾನಿ ಆಗುವಂತಹ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಾರದು. ಪ್ರತಿಮೆ ಕಾಮಗಾರಿ ನಡೆಸದಂತೆ, ಹಬ್ಬದ ಸಂದರ್ಭದಲ್ಲಿ ಲಕ್ಷಗಟ್ಟಲೆ ಜನ ಜಮಾಯಿಸುವುದನ್ನು ನಿರ್ಬಂಧಿಸಬೇಕು ಎಂಬುದಾಗಿ ನಿರ್ದೇಶನ ನೀಡಿತ್ತು.

ನಂತರದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಹಾಜರಾಗಿ, ಪ್ರತಿಮೆ ಅನಾವರಣಗೊಳಿಸಿದ ದಿನದಂದು ಇಲ್ಲಿ ಬೆಂಕಿ ಹಾಕಲಾಗಿದೆ, ಪಟಾಕಿ ಸಿಡಿಸಲಾಗಿದೆ. ಇದರಿಂದ ಪರಿಸರಕ್ಕೆ ತೀವ್ರ ಹಾನಿಯಾಗಿದೆ ಎಂದು ವಿವರಿಸಿ ಅಭಿವೃದ್ಧಿ ಕಾರ್ಯಗಳಿಗೆ ತಡೆ ನೀಡುವಂತೆ ಮನವಿ ಮಾಡಿದ್ದರು. ಇದನ್ನು ಪರಿಗಣಿಸಿದ್ದ ನ್ಯಾಯಪೀಠ ಅಭಿವೃದ್ದಿ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಿತ್ತು. ನಂತರ ಮುಂದಿನ ವಿಚಾರಣೆಯಲ್ಲಿಯೂ ಚಿಕ್ಕಬಳ್ಳಾಪುರದ ಆವಲಗುರ್ಕಿ ಗ್ರಾಮದ ನಂದಿ ಬೆಟ್ಟದ ಸಮೀಪ ಆದಿಯೋಗಿ ಪ್ರತಿಮೆ ನಿರ್ಮಾಣಕ್ಕೆ ಮಂಜೂರಾಗಿರುವ ಜಮೀನಿನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳದೇ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎನ್ನುವ ಆದೇಶವನ್ನು ಹೈಕೋರ್ಟ್ ಮುಂದುವರೆಸಿತ್ತು. ಈ ಕುರಿತು ಇಂದು ವಿಚಾರಣೆ ನಡೆಸಿದ ನ್ಯಾಯಪೀಠ ಪಿಐಎಲ್ ವಜಾಗೊಳಿಸಿದ್ದು, ಇಶಾ ಫೌಂಡೇಶನ್ ಪರ ತೀರ್ಪು ನೀಡಿದೆ.

ಇದನ್ನೂ ಓದಿ:ಆದಿಯೋಗಿ ಪ್ರತಿಮೆ ಸ್ಥಾಪನೆ ಕಾಮಗಾರಿ: ಯಥಾಸ್ಥಿತಿಗೆ ಕಾಯ್ದುಕೊಳ್ಳಲು ಹೈಕೋರ್ಟ್​ ಸೂಚನೆ

ABOUT THE AUTHOR

...view details