ಕರ್ನಾಟಕ

karnataka

ಐಎಂಎ ವಂಚನೆ ಹಗರಣ: ಐಪಿಎಸ್ ಅಧಿಕಾರಿ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

By

Published : Mar 6, 2021, 1:42 PM IST

ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

High Court reserved judgment of IPS officer
ಐಎಂಎ ಬಹುಕೋಟಿ ವಂಚನೆ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಈ ಸಂಬಂಧ ಹೇಮಂತ್ ನಿಂಬಾಳ್ಕರ್ ಸಲ್ಲಿಸಿರುವ ಅರ್ಜಿಯನ್ನು ನ್ಯಾ. ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲರು ಹಾಗೂ ಸಿಬಿಐ ಪರ ವಕೀಲರ ವಾದ ಆಲಿಸಿದ ಪೀಠ ತೀರ್ಪು ಕಾಯ್ದಿರಿಸಿರುವುದಾಗಿ ತಿಳಿಸಿತು. ಇದೇ ವೇಳೆ, ಈ ಹಿಂದೆ ಸಿಬಿಐಗೆ ನಿರ್ದೇಶಿಸಿ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿತು. ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸಬಾರದು. ಪ್ರಕರಣ ಸಂಬಂಧ ಸಿಬಿಐ ತನಿಖೆ ಮಂದುವರಿಸಬಹುದಾದರೂ ಅಂತಿಮ ವರದಿಯನ್ನು ಸಲ್ಲಿಸಬಾರದು ಎಂದು ಸ್ಪಷ್ಟಪಡಿಸಿತು.


ಪ್ರಕರಣದ ಹಿನ್ನೆಲೆ:ಐಎಂಎ ಹಗರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಪಾತ್ರವಿದ್ದು, ತನಿಖೆ ನಡೆಸಲು ಅನುಮತಿ ಕೋರಿ ಸಿಬಿಐ ಸರ್ಕಾರಕ್ಕೆ ಮನವಿ ಮಾಡಿತ್ತು. ಅದರಂತೆ ಸರ್ಕಾರ 2020ರ ಸೆಪ್ಟೆಂಬರ್ 9ರಂದು ತನಿಖೆಗೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಬಳಿಕ ಸಿಬಿಐ ಅಧಿಕಾರಿಗಳು ಪ್ರಕರಣ ದಾಖಲಿಸಿ ವಿಶೇಷ ನ್ಯಾಯಾಲಯಕ್ಕೆ ಎಫ್‌ಐಆರ್ ಸಲ್ಲಿಸಿದ್ದರು.

ಐಎಂಎ ವಂಚನೆ ಹಗರಣದ ಸಂಬಂಧ ದೂರುಗಳು ದಾಖಲಾಗುವ ಸಂದರ್ಭದಲ್ಲಿ ಸಿಐಡಿಯ ಆರ್ಥಿಕ ಅಪರಾಧ ತನಿಖಾ ವಿಭಾಗದ ಮುಖ್ಯಸ್ಥರಾಗಿ (ಐಜಿಪಿ) ಹೇಮಂತ್ ನಿಂಬಾಳ್ಕರ್ ಕಾರ್ಯ ನಿರ್ವಹಿಸುತ್ತಿದ್ದರು. ಈ ವೇಳೆ, ನಿಂಬಾಳ್ಕರ್ ಸರಿಯಾಗಿ ಕಾರ್ಯ ನಿರ್ವಹಿಸಿಲ್ಲ. ಜತೆಗೆ , ಆರೋಪಿಗಳಿಗೆ ಪೂರಕವಾಗಿ ಕೆಲಸ ಮಾಡಿದ್ದಾರೆ ಎಂದು ಸಿಬಿಐ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಮೆಟ್ಟಿಲೇರಿರುವ ನಿಂಬಾಳ್ಕರ್, ಸಿಬಿಐ ದಾಖಲಿಸಿರುವ ಎಫ್‌ಐಆರ್ ಮತ್ತು ವಿಶೇಷ ನ್ಯಾಯಾಲಯದ ವಿಚಾರಣೆಯನ್ನು ರದ್ದುಪಡಿಸುವಂತೆ ಕೋರಿದ್ದಾರೆ.

ABOUT THE AUTHOR

...view details