ಕರ್ನಾಟಕ

karnataka

ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿದ್ದ ಮೇಲ್ಮನವಿ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

By ETV Bharat Karnataka Team

Published : Aug 24, 2023, 6:59 AM IST

Updated : Aug 24, 2023, 8:13 AM IST

Murugha mutt case in high court: ಮುರುಘಾ ಮಠಕ್ಕೆ ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕ ಸಂಬಂಧ ಸಲ್ಲಿಕೆಯಾದ ಮೇಲ್ಮನವಿ ಅರ್ಜಿ ವಿಚಾರಣೆ ಮುಗಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ.

high-court-reserved-judgment-on-petition-challenging-appointment-of-administrative-officer-for-muruga-math
ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿದ್ದ ಮೇಲ್ಮನವಿ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು:ಚಿತ್ರದುರ್ಗದ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠಕ್ಕೆ (ಎಸ್‌ಜೆಎಂ) ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿದ ಆದೇಶವನ್ನು ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಲಾದ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ.

ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಏಳು ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್. ಕಮಲ್ ಅವರಿದ್ದ ನ್ಯಾಯಪೀಠ ಸುಧೀರ್ಘ ವಿಚಾರಣೆ ನಡೆಸಿ ಅಂತಿಮ ತೀರ್ಪನ್ನು ಕಾಯ್ದಿರಿಸಿದೆ.

ಪ್ರಕರಣದ ಹಿನ್ನೆಲೆ:ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಪ್ರಕರಣದಲ್ಲಿ ಆರೋಪಿಯಾಗಿದ್ದು, ಚಿತ್ರದುರ್ಗದ ಪೊಲೀಸರು 2022ರ ಸೆಪ್ಟಂಬರ್ 1ರಂದು ಬಂಧಿಸಿದ್ದರು. ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್. ವಸ್ತ್ರದ ಅವರನ್ನು 2022ರ ಡಿಸೆಂಬರ್ 13ರಂದು ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. ಅವರು 2022ರ ಡಿಸೆಂಬರ್ 15ರಂದು ಅಧಿಕಾರ ಸ್ವೀಕರಿಸಿದ್ದರು.

ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಮಠದ ತಾತ್ಕಾಲಿಕ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು, ಹೈಕೋರ್ಟ್ ಮೆಟ್ಟಿಲೇರಿದ್ದರು. ರಿಟ್ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಆಡಳಿತಾಧಿಕಾರಿ ನೇಮಕವನ್ನು ರದ್ದುಪಡಿಸಿ, 'ಮಠಗಳಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು' ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಸರ್ಕಾರದ ಆದೇಶವನ್ನು ರದ್ದುಪಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಒಟ್ಟು 7 ಅರ್ಜಿಗಳು ಸಲ್ಲಿಕೆಯಾಗಿದ್ದವು.

ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ್ದ ದ್ವಿಸದಸ್ಯ ಪೀಠ, ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ಮಠದ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. 'ಮೇಲ್ಮನವಿ ಮೇಲಿನ ಅಂತಿಮ ತೀರ್ಪು ಬರುವ ತನಕ ಈ ಆದೇಶ ಜಾರಿಯಲ್ಲಿರುತ್ತದೆ ಎಂದು 2023ರ ಜುಲೈ 03 ರಂದು ಆದೇಶಿಸಿತ್ತು. ಇದೀಗ ಅಂತಿಮ ಆದೇಶ ಕಾಯ್ದಿರಿಸಿದ್ದು, ತೀರ್ಪು ಹೊರಬರಬೇಕಾಗಿದೆ.

ಇದನ್ನೂ ಓದಿ:ಮುರುಘಾ ಮಠದ ಉಸ್ತುವಾರಿಯಾಗಿ ಬಸವಪ್ರಭು ಸ್ವಾಮೀಜಿ ಆಯ್ಕೆ

ಹೈಕೋರ್ಟ್​ನಲ್ಲಿ ಪ್ರತ್ಯೇಕ ಅರ್ಜಿ ವಿಚಾರಣೆ:ಬಿಬಿಎಂಪಿ ಸಂಗ್ರಹ ಮಾಡಿರುವ ಭಿಕ್ಷುಕರ ನಿಧಿ (ಸೆಸ್) ಹಣವನ್ನು ಎರಡು ವಾರಗಳಲ್ಲಿ ಕೇಂದ್ರ ಪರಿಹಾರ ಸಮಿತಿಗೆ ಜಮೆ ಮಾಡುವಂತೆ ಬಿಬಿಎಂಪಿಗೆ ಹೈಕೋರ್ಟ್ ಅಂತಿಮ ಗಡುವು ನೀಡಿದೆ. ಬೆಂಗಳೂರಿನ ರಸ್ತೆಗಳಲ್ಲಿ ಮಕ್ಕಳನ್ನು ಆಟಿಕೆ ಸಾಮಾನು ಮಾರಾಟ ಹಾಗೂ ಭಿಕ್ಷಾಟನೆಗೆ ಬಳಸಿಕೊಳ್ಳುತ್ತಿರುವ ವಿಚಾರವಾಗಿ ಲೆಟ್ಜ್ಕಿಟ್ ಫೌಂಡೇಷನ್ 2020ರಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜಿ.ಎಸ್. ಕಮಾಲ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಈ ಹಿಂದೆ ಹೈಕೋರ್ಟ್ ನೀಡಿರುವ ಆದೇಶದಂತೆ ಭಿಕ್ಷುಕರ ಸೆಸ್ ಹಣವನ್ನು ಮೂರು ವಾರಗಳಲ್ಲಿ ಕೇಂದ್ರ ಪರಿಹಾರ ಸಮಿತಿಗೆ ಜಮೆ ಮಾಡುವಂತೆ 2023ರ ಫೆಬ್ರುವರಿ 15ರಂದು ನೀಡಿದ್ದ ಆದೇಶವನ್ನು ಬಿಬಿಎಂಪಿ ಈವರೆಗೆ ಪಾಲಿಸಿರಲಿಲ್ಲ. ಈ ಅಂಶವನ್ನು ಗಮನಿಸಿದ ನ್ಯಾಯಪೀಠ, ಪಾಲಿಕೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತು.

ಈ ವೇಳೆ ಬಿಬಿಎಂಪಿ ಪರ ವಕೀಲ ಎನ್.ಕೆ. ರಮೇಶ್, ಇತ್ತಿಚಿಗಷ್ಟೇ ನನ್ನನ್ನು ಬಿಬಿಎಂಪಿ ಪರ ವಾದ ಮಂಡಿಸುವುದಕ್ಕೆ ನಿಯೋಜನೆ ಮಾಡಲಾಗಿದೆ. ಭಿಕ್ಷುಕರ ಸೆಸ್ ಹಣವನ್ನು ಕೇಂದ್ರ ಪರಿಹಾರ ಸಮಿತಿಗೆ ಜಮೆ ಮಾಡಬೇಕು ಎಂದು 2023ರ ಫೆ. 15ರಂದು ನ್ಯಾಯಾಲಯ ನೀಡಿರುವ ಆದೇಶ ಪಾಲನೆ ಮಾಡಲು ಮತ್ತಷ್ಟು ಕಾಲಾವಕಾಶ ಬೇಕು ಎಂದು ಕೋರಿದರು. ಬಿಬಿಎಂಪಿ ಪರ ವಕೀಲರ ಮನವಿ ಒಪ್ಪಿದ ನ್ಯಾಯಪೀಠ, ಭಿಕ್ಷಕರ ಸೆಸ್ ಬಾಕಿ ಮೊತ್ತವನ್ನು ಕೇಂದ್ರ ಪರಿಹಾರ ಸಮಿತಿಗೆ ಜಮೆ ಮಾಡಲು ನ್ಯಾಯಾಲಯ ನೀಡಿರುವ ಆದೇಶವನ್ನು ಪಾಲನೆ ಮಾಡಿದ ವರದಿಯನ್ನು ಎರಡು ವಾರಗಳಲ್ಲಿ ಸಲ್ಲಿಸಬೇಕು. ಇದು ಕೊನೆಯ ಅವಕಾಶವಾಗಿದೆ ಎಂದು ತಾಕೀತು ಮಾಡಿ ವಿಚಾರಣೆ ಮುಂದೂಡಿದೆ.

Last Updated : Aug 24, 2023, 8:13 AM IST

ABOUT THE AUTHOR

...view details