ಕರ್ನಾಟಕ

karnataka

ಮಹಿಳಾ ಕುಸ್ತಿಪಟುಗಳ ಮೇಲಿನ ಪೊಲೀಸ್ ಹಲ್ಲೆ ಖಂಡನೀಯ: ಸಿದ್ದರಾಮಯ್ಯ

By

Published : May 28, 2023, 11:03 PM IST

ಮಹಿಳಾ ಕುಸ್ತಿಪಟುಗಳ ಮೇಲಿನ ಪೊಲೀಸರ ದಾಳಿ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹೋರಾಟ ನಿರತ ಮಹಿಳಾ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ದಾಳಿ ನಡೆಸಿರುವುದು ಖಂಡನಿಯ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಲೈಂಗಿಕ ದೌರ್ಜನ್ಯ ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ. ತಕ್ಷಣ ಬಂಧಿತ ಮಹಿಳಾ ಕುಸ್ತಿಪಟುಗಳನ್ನು ಬಿಡುಗಡೆಗೊಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದಾರೆ.

ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪ್ರಜಾಪ್ರಭುತ್ವದ ಹಬ್ಬ ಎಂಬಂತೆ ಸಂಭ್ರಮಿಸುತ್ತಿರುವ ನರೇಂದ್ರ ಮೋದಿ ಸರ್ಕಾರ, ಅಲ್ಲಿಂದ ಕೂಗಳತೆಯ ದೂರದಲ್ಲಿ ಧರಣಿ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಜಾಸತ್ತಾತ್ಮಕ ಹಕ್ಕನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ ಎಂದಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರ ತಕ್ಷಣ ಲೈಂಗಿಕ ದೌರ್ಜನ್ಯದ ಆರೋಪಕ್ಕೊಳಗಾಗಿರುವ ಭಾರತೀಯ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬೃಜಭೂಷಣ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿ, ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು ಎಂದು ಹೇಳಿದ್ದಾರೆ.

ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ: ಇನ್ನೊಂದೆಡೆ ಭಾರತೀಯ ಕುಸ್ತಿಪಟುಗಳ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿಯಲ್ಲಿ ಮಹಿಳಾ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟ ಬೆಂಬಲಿಸಿ ರಾಜ್ಯದ ವಿವಿಧ ದಲಿತಪರ, ಮಹಿಳಾ, ಮುಸ್ಲಿಂ ಸಂಘಟನೆಗಳು ಸೇರಿದಂತೆ ಹಲವರು ಬೆಂಗಳೂರು ನಗರದ ಫ್ರೀಡಂ ಪಾರ್ಕ್​ನಲ್ಲಿ ಇಂದು ಪ್ರತಿಭಟನೆಯನ್ನು ನಡೆಸಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ಲೈಂಗಿಕ ದೌರ್ಜನ್ಯವನ್ನು ನಡೆಸಿದ್ದಾರೆ ಎಂದು ಆರೋಪಿಸಿ ನಾಲ್ಕು ತಿಂಗಳಿನಿಂದ ಮಹಿಳಾ ಕುಸ್ತಿಪಟುಗಳ ನಿರಂತರವಾಗಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಮಾತ್ರ ಇದನ್ನು ಗಂಭೀರವಾಗಿ ಪರಿಗಣಿಸದೆ ಆರೋಪಿಯನ್ನು ರಕ್ಷಣೆ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಲೈಂಗಿಕ ಕಿರುಕುಳಕ್ಕೆ ಒಳಗಾದ ಸಂತ್ರಸ್ಥರು ದೆಹಲಿ ಪೊಲೀಸರಿಗೆ ದೂರು ನೀಡಿದರೂ ಪೊಲೀಸರು ಮಾತ್ರ ಯಾವುದೇ ಕ್ರಮವನ್ನು ಜರುಗಿಸಿಲ್ಲ. ಹಾಗಾಗಿ ಸಂತ್ರಸ್ಥರು ಕೋರ್ಟ್​ ಮೊರೆ ಹೋಗಿ ಆರೋಪಿ ಮೇಲೆ ಎರಡು ಎಫ್‌ಐಆರ್‌ಗಳ ದಾಖಲಾಗುವಂತೆ ಮಾಡಿದ್ದಾರೆ. ಆದರೆ ಇದುವರೆಗೂ ಆರೋಪಿಗಳನ್ನು ಸರ್ಕಾರ ಬಂಧಿಸಿಲ್ಲ. ಈ ಮೂಲಕ ಬಿಜೆಪಿ ಸರ್ಕಾರವು ಆರೋಪಿಗಳ ರಕ್ಷಣೆಗೆ ನಿಂತಿದೆ ಎಂದು ದೂರಿದರು.

ಇದನ್ನೂ ಓದಿ:ಗ್ಯಾರಂಟಿಗಳ ಜಾರಿ, ಲೋಕಸಭೆ ಎಲೆಕ್ಷನ್‌ ಮೇಲೆ ಕಣ್ಣು: ಹೊಸ ಸಚಿವರಿಗೆ ಸಿದ್ದರಾಮಯ್ಯ ಟಾರ್ಗೆಟ್‌

ABOUT THE AUTHOR

...view details