ಕರ್ನಾಟಕ

karnataka

ಪಿಎಸ್‌ಐ ನೇಮಕ ಕೇಸ್​: ಆರೋಪ ರಹಿತರ ನೇಮಕದ ಕುರಿತು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ವರದಿ ಸಲ್ಲಿಸಿದ ಸರ್ಕಾರ

By

Published : Jul 5, 2023, 5:32 PM IST

ಪಿಎಸ್‌ಐ ಅಕ್ರಮದ ಹಿನ್ನೆಲೆ ಆರೋಪರಹಿತರ ನೇಮಕಾತಿ ಕುರಿತು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸರ್ಕಾರವು ವರದಿ ಸಲ್ಲಿಸಿದೆ.

High Court
ಹೈಕೋರ್ಟ್‌

ಬೆಂಗಳೂರು:ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿಗಾಗಿ ನಡೆದ ಪರೀಕ್ಷೆಯಲ್ಲಿ ಆಯ್ಕೆಯಾದವರ ಪೈಕಿ ಆರೋಪ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದವರಿಗೆ ಒಂದು ಆಬ್ಜೆಕ್ವಿವ್​ ಪರೀಕ್ಷೆ ನಡೆಸಿ ಹುದ್ದೆಗೆ ಪರಿಗಣಿಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ.

ವಿಚಾರಣೆ ಜುಲೈ 10ಕ್ಕೆ ಮುಂದೂಡಿಕೆ:ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸಲು ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ 100ಕ್ಕೂ ಅಧಿಕ ಅಭ್ಯರ್ಥಿಗಳು ಸಲ್ಲಿಸಿದ್ದ 7 ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ನರೇಂದರ್ ಮತ್ತು ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ಪೀಠಕ್ಕೆ ಸರ್ಕಾರ ವರದಿಯನ್ನು ಸಲ್ಲಿಸಿದೆ. ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ಅರ್ಜಿಯಲ್ಲಿನ ಪ್ರಶ್ನಿಸಿರುವ ಅಂಶಗಳ ಆಧಾರದ ಮೇಲೆ ವಿಚಾರಣೆಗೊಳಪಡಿಸಲಾಗುವುದು ಎಂದು ತಿಳಿಸಿ ವಿಚಾರಣೆಯನ್ನು ಜುಲೈ 10ಕ್ಕೆ ಮುಂದೂಡಿದೆ.

ಈ ಹಿಂದೆ ನಡೆದ ವಿಚಾರಣೆ ವೇಳೆ ಅಡ್ವೋಕೇಟ್ ಜನರಲ್ ವಾದ ಮಂಡಿಸಿ, ಆರೋಪ ಪಟ್ಟಿಯಲ್ಲಿ ಹೆಸರಿರುವವರನ್ನು ಬಿಟ್ಟು ಉಳಿದ ಅಭ್ಯರ್ಥಿಗಳ ಬಗ್ಗೆ ಯಾವುದೇ ಆರೋಪಗಳು ಕಂಡುಬಂದಿಲ್ಲ. ಒಂದು ವೇಳೆ, ಮುಂದಿನ ದಿನಗಳಲ್ಲಿ ಆರೋಪ ಕೇಳಿ ಬಂದರೆ ಅವರನ್ನು ತನಿಖೆಗೆ ಒಳಪಡಿಸಲಾಗುವುದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಇದನ್ನು ಪರಿಗಣಿಸಿದ ನ್ಯಾಯಪೀಠ, ಆರೋಪ ಪಟ್ಟಿಯಲ್ಲಿ ಹೆಸರು ಉಲ್ಲೇಖವಾಗಿರದ ಅಭ್ಯರ್ಥಿಗಳಿಗೆ ಆಬ್ಜೆಕ್ಟೀವ್ ಪರೀಕ್ಷೆ ನಡೆಸಿ, ಅದರ ಆಧಾರದಲ್ಲಿ ಅವರನ್ನು ಹುದ್ದೆಗೆ ಪರಿಗಣಿಸಲು ಸಾಧ್ಯವೇ ಎಂದು ಪ್ರಶ್ನಿಸಿತ್ತು. ಈ ಬಗ್ಗೆ ಸರ್ಕಾರದಿಂದ ಮಾಹಿತಿ ಪಡೆದು ಕೋರ್ಟ್‌ಗೆ ತಿಳಿಸುವಂತೆ ಸೂಚಿಸಿತ್ತು.

ಪ್ರಕರಣದ ಹಿನ್ನೆಲೆ ಏನು?:545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ನಡೆದ ಲಿಖಿತ ಪರೀಕ್ಷೆಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸುವುದಾಗಿ 2022ರ ಏ.29ರಂದು ಅಂದಿನ ಬಿಜೆಪಿ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶ ರದ್ದುಪಡಿಸಬೇಕು. ಕಳಂಕರಹಿತ ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಹಿಂದಿನ ಅಧಿಸೂಚನೆ ಪ್ರಕಾರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಮೆಟ್ಟಿಲೇರಿದ್ದರು.

ಆ ಅರ್ಜಿಗಳನ್ನು ಕೆಎಟಿ 2022ರ ಜು.19ರಂದು ವಜಾಗೊಳಿಸಿತ್ತು. ಇದರಿಂದ, ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿಯನ್ನು 2022ರ ಸೆ.28ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, ಮರು ಪರೀಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ನಡುವೆ, ಕೆಲವರು ಮಾಡಿರುವ ತಪ್ಪಿಗೆ ಪರೀಕ್ಷೆ ಬರೆದಿರುವ ಎಲ್ಲರಿಗೂ ಶಿಕ್ಷೆ ಕೊಡುವುದು ಸರಿಯಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ 32 ಮಂದಿ ಕಳಂಕಿತರನ್ನು ಗುರುತಿಸಲಾಗಿದೆ. ಉಳಿದ ಅಭ್ಯರ್ಥಿಗಳ ವಿರುದ್ಧ ಯಾವುದೇ ಆರೋಪಗಳಿಲ್ಲ. ಕಳಂಕಿತರು ಹಾಗೂ ಕಳಂಕರಹಿತರನ್ನು ಪ್ರತ್ಯೇಕಿಸಲು ಅವಕಾಶವಿದ್ದರೂ, ಸರ್ಕಾರ ಆ ಪ್ರಯತ್ನವನ್ನೇ ಮಾಡದೆ, ಇಡೀ ಪ್ರಕ್ರಿಯೆ ರದ್ದುಪಡಿಸಿ, ಮರು ಪರೀಕ್ಷೆ ನಡೆಸಲು ಮುಂದಾಗಿದೆ, ಇದು ಈಗಾಗಲೇ ಆಯ್ಕೆಯಾಗಿರುವ ಹಲವು ಅಭ್ಯರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಲಿದೆ.

ಎಷ್ಟೋ ಅಭ್ಯರ್ಥಿಗಳಿಗೆ ವಯೋಮಿತಿ ಮೀರುತ್ತಿದ್ದು, ಅವರಿಗೆ ಉದ್ಯೋಗ ಲಭಿಸುವುದು ಕಷ್ಟಕರವಾಗಲಿದೆ. ಹೀಗಾಗಿ ಮರುಪರೀಕ್ಷೆ ನಡೆಸಲು ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತರನ್ನು ಪ್ರತ್ಯೇಕಿಸಿ ಉಳಿದವರಿಗೆ ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಕೋರಿದ್ದರು.

ಇದನ್ನೂ ಓದಿ:ಇತಿಹಾಸದಲ್ಲೇ ಮೊದಲ ಬಾರಿಗೆ 20 ಹೆಚ್ಚುವರಿ ಅಡ್ವೊಕೇಟ್ ಜನರಲ್​ಗಳ ನೇಮಕ! ಪರ - ವಿರೋಧ ಚರ್ಚೆಗೆ ಗ್ರಾಸ...!!

ABOUT THE AUTHOR

...view details