ಕರ್ನಾಟಕ

karnataka

ಬಿಜೆಪಿಯದ್ದು 40% ಸರ್ಕಾರ, ನಮ್ಮ ಆರೋಪಕ್ಕೆ ಯತ್ನಾಳ್ ಸಾಕ್ಷ್ಯ ಒದಗಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

By ETV Bharat Karnataka Team

Published : Dec 26, 2023, 9:27 PM IST

Updated : Dec 26, 2023, 10:00 PM IST

ಕೊರೊನಾ ಚಿಕಿತ್ಸೆ ಹಾಗು ನಿಯಂತ್ರಣ ಹೆಸರಲ್ಲಿ ಯಡಿಯೂರಪ್ಪ ಅವರ ಸರ್ಕಾರ 4,000 ಕೋಟಿ ರೂಪಾಯಿ ಭ್ರಷ್ಟಾಚಾರ ಮಾಡಿದೆ ಎಂದು ದಾಖಲೆಸಮೇತ ಆರೋಪ ಮಾಡಿದ್ದೆವು. ಯತ್ನಾಳ್ ಆರೋಪ ಗಮನಿಸಿದರೆ ಭ್ರಷ್ಟಾಚಾರ ಇನ್ನೂ ಹೆಚ್ಚು ನಡೆದಿರುವಂತೆ ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

CM Siddaramaiah
ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಕೊರೊನಾ ಕಾಲದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಂದಾಜು 40 ಸಾವಿರ ಕೋಟಿ ರೂಪಾಯಿಗಳಷ್ಟು ಭ್ರಷ್ಟಾಚಾರ ಎಸಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇರವಾಗಿ ಆರೋಪಿಸಿದ್ದಾರೆ. ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರ ಎನ್ನುವ ನಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣ ಹೆಸರಲ್ಲಿ ಯಡಿಯೂರಪ್ಪರ ಸರ್ಕಾರ ಸುಮಾರು 4,000 ಕೋಟಿ ರೂಪಾಯಿಗಳ ಭ್ರಷ್ಟಾಚಾರ ಮಾಡಿದೆ ಎಂದು ಸುದ್ದಿಗೋಷ್ಠಿ ಕರೆದು ದಾಖಲೆಸಮೇತ ನಾವು ಆರೋಪ ಮಾಡಿದ್ದೆವು. ಯತ್ನಾಳ್ ಅವರ ಆರೋಪವನ್ನು ಗಮನಿಸಿದರೆ ನಮ್ಮ ಅಂದಾಜಿಗಿಂತ ಹತ್ತು ಪಟ್ಟು ಹೆಚ್ಚಿನ ಭ್ರಷ್ಟಾಚಾರ ನಡೆದಿರುವಂತೆ ಕಾಣುತ್ತಿದೆ. ನಮ್ಮ ಆರೋಪ ಕೇಳಿ ಹೌಹಾರಿ ಬಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಆಗಿನ ಸಚಿವರ ದಂಡು ಈಗ ಎಲ್ಲಿ ಅಡಗಿ ಕೂತಿದೆ? ಎಂದು ಪತ್ರಿಕಾ ಹೇಳಿಕೆ ಮೂಲಕ ಸಿಎಂ ಪ್ರಶ್ನಿಸಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಅವರು ಹಿಟ್ ಆ್ಯಂಡ್ ರನ್ ಮಾಡಬಾರದು. ಭ್ರಷ್ಟಾಚಾರ ನಿರ್ಮೂಲನೆ ಮಾಡಬೇಕೆಂಬ ಬದ್ಧತೆಯನ್ನು ಅವರು ಹೊಂದಿದ್ದರೆ, ತಮ್ಮ ಆರೋಪವನ್ನು ತಾರ್ಕಿಕ ಅಂತ್ಯದೆಡೆಗೆ ಒಯ್ಯಬೇಕು. ಇದಕ್ಕಾಗಿ ಕೊರೊನಾ ವೇಳೆ ಭ್ರಷ್ಟಾಚಾರದ ನಡೆದಿರುವ ಬಗ್ಗೆ ತಮ್ಮ ಬಳಿ ಇರುವ ಎಲ್ಲ ಮಾಹಿತಿಯನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ರಚಿಸಲಾಗಿರುವ ತನಿಖಾ ಆಯೋಗಕ್ಕೆ ಒಪ್ಪಿಸಬೇಕು ಎಂದು ಸಿಎಂ ಒತ್ತಾಯಿಸಿದ್ದಾರೆ.

ಬಿಜೆಪಿ ಶಾಸಕ ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ.ವಿಜಯೇಂದ್ರ ಸೇರಿದಂತೆ ಹಿಂದಿನ ಸರ್ಕಾರದ ಸಂಪುಟದಲ್ಲಿದ್ದ ಕೆಲವು ಸಚಿವರ ವಿರುದ್ಧ ನಿರಂತರ ಭ್ರಷ್ಟಾಚಾರದ ಆರೋಪ ಮಾಡುತ್ತಾ ಬಂದಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ರಾಜ್ಯದ ಬಿಜೆಪಿ ನಾಯಕರು ಈ ಬಗ್ಗೆ ಮೌನವಾಗಿರುವುದರಲ್ಲಿ ಆಶ್ಚರ್ಯವೇನಿಲ್ಲ ಎಂದು ಹೇಳಿದರು.

ತನ್ನನ್ನು ದೇಶದ ಚೌಕಿದಾರ ಎಂದು ಬಣ್ಣಿಸಿಕೊಳ್ಳುತ್ತಿರುವ ಮತ್ತು ನ ಖಾವೂಂಗಾ ನಾ ಖಾನೆ ದೂಂಗಾ ಎಂದು ಆಗಾಗ ಗುಟುರು ಹಾಕುವ ದೇಶದ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರೂ ತಮ್ಮದೇ ಪಕ್ಷದ ನಾಯಕ ಮಾಡುತ್ತಿರುವ ಇಂತಹ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಮೌನವಾಗಿರುವುದು ನಿಗೂಢವಾಗಿದೆ. ಇದು ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಲ್ಲಿ ಕೇಂದ್ರದ ನಾಯಕರಿಗೂ ಪಾಲು ಹೋಗಿದೆ ಎನ್ನುವ ಆರೋಪಕ್ಕೆ ಎಡೆ ಮಾಡಿಕೊಡುವುದಿಲ್ಲವೇ ಪ್ರಧಾನಿಗಳೇ ಎಂದು ಸಿಎಂ ಪ್ರಶ್ನಿಸಿದ್ದಾರೆ.

ಇದನ್ನೂಓದಿ:ಸಿದ್ದರಾಮಯ್ಯನವರ ಯೋಜನೆಯನ್ನು ಯಾರೂ ಒಪ್ಪುವುದಿಲ್ಲ: ಸಂಸದ ಅನಂತಕುಮಾರ ಹೆಗಡೆ

Last Updated :Dec 26, 2023, 10:00 PM IST

ABOUT THE AUTHOR

...view details