ಕರ್ನಾಟಕ

karnataka

ಶಿವಮೊಗ್ಗ ಮಹಾನಗರ ಪಾಲಿಕೆ ವಿರುದ್ಧ ಸುಮೋಟೋ ಕೇಸ್ ದಾಖಲು: ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್

By

Published : Jan 7, 2023, 4:37 PM IST

ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್-ನಗರದಲ್ಲಿ ಸ್ಮಾರ್ಟ್ ಸಿಟಿ ಕೆಲಸಕ್ಕೆ ಮೆಚ್ಚುಗೆ-ರಾಜಕಾಲುವೆ ನಿರ್ವಹಣೆ ಕುರಿತು ಗರಂ - ಮಹಾನಗರ ಪಾಲಿಕೆ ವಿರುದ್ದ ಸ್ವಯಂ ಪ್ರೇರಿತ ದೂರು ದಾಖಲು.

Lokayukta Justice BS Patil inspection in shivamogga
ಶಿವಮೊಗ್ಗ ಮಹಾನಗರ ಪಾಲಿಕೆ ವಿರುದ್ಧ ಸುಮೋಟೋ ಕೇಸ್ ದಾಖಲು:ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್

ಶಿವಮೊಗ್ಗ: ಸ್ವಚ್ಚತೆ ಇಲ್ಲದ ಮಹಾನಗರ ಪಾಲಿಕೆ‌ ವಿರುದ್ದ ಸುಮೋಟೊ ಕೇಸು ದಾಖಲಿಸಿರುವುದಾಗಿ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ತಿಳಿಸಿದ್ದಾರೆ. ನಿನ್ನೆಯಿಂದ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ರವರು ಇಂದು ಬೆಳಗ್ಗೆ ಶಿವಮೊಗ್ಗ ನಗರವನ್ನು ರೌಂಡ್ಸ್ ಹಾಕಿದರು. ನಗರದಲ್ಲಿ ಸ್ಮಾರ್ಟ್ ಸಿಟಿ ಕೆಲಸಕ್ಕೆ ಮೆಚ್ಚಿಗೆ ವ್ಯಕ್ತಪಡಿಸಿದರು. ಈ ವೇಳೆ, ಸ್ವಚ್ಚತೆ ಇಲ್ಲದಿರುವ ಬಗ್ಗೆ ಅಸಮಾಧಾನ ಹೊರ ಹಾಕಿದರು. ಅಲ್ಲದೇ ರಾಜಕಾಲುವೆ ಸರಿಯಾದ ನಿರ್ವಹಣೆ ಇಲ್ಲದೆ ಇರುವುದರ ಬಗ್ಗೆ ಗರಂ ಆದ ಅವರು ಮಹಾನಗರ ಪಾಲಿಕೆ ವಿರುದ್ದ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡರು.

ವಾರ್ಡ್ ನಿರ್ವಹಣೆ ಕುರಿತು ಅಸಮಾಧಾನ:ಲೋಕಾಯುಕ್ತ ನ್ಯಾಯಮೂರ್ತಿ ಬಿಸ್ ಪಾಟೀಲ್ ಅವರು ಇಂದು ಮೆಗ್ಗಾನ್ ಆಸ್ಪತ್ರೆಯ ಶರಾವತಿ‌ ಮಹಿಳಾ ಹಾಗೂ ಮಕ್ಕಳ ವಾರ್ಡ್ ಗೆ ದಿಢೀರ್​ ಭೇಟಿ‌ ನೀಡಿ ಪರಿಶೀಲನೆ ನಡೆಸಿದರು. ಕಟ್ಟಡದ ನಿರ್ವಹಣೆಯ ವೈದ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಅಲ್ಲದೇ ಕಟ್ಟಡ ಮೇಲ್ಚಾವಣಿ ಬಿರುಕು ಬಿಟ್ಟಿದ್ದು ಹಾಗೂ ಅದನ್ನು ಮುಚ್ಚಿಸದೇ ಇರುವುದಕ್ಕೆ ಆಕ್ರೋಶಗೊಂಡರು. ಬಿರುಕು ಬಿಟ್ಟಿರುವುದರಿಂದ ಇಲ್ಲಿ ಫಂಗಸ್ ಬೆಳೆದು ಅದು‌ ಮಕ್ಕಳ ಅನಾರೋಗ್ಯಕ್ಕೆ ಕಾರಣವಾಗಬಹುದು ಎಂದು ತಿಳಿಸಿದರು.

ಮಕ್ಕಳ ವಾರ್ಡ್ ಗೆ ಲೋಕಾಯುಕ್ತ ನ್ಯಾಯಮೂರ್ತಿಗಳು ಭೇಟಿ ನೀಡಿದಾಗ ಮಕ್ಕಳ ಐಸಿಯು ವಾರ್ಡ್​​​ನಲ್ಲಿ ಜವಳಿ ಮಕ್ಕಳು ಇಟ್ಟಿರುವುದಾಗಿ ಹಾಗೂ ಅವರಿಗೆ ಹಾಲು ಕುಡಿಸಲು ಅವಕಾಶ ನೀಡಬೇಕೆಂದು ನ್ಯಾಯಮೂರ್ತಿ ರವರ ಕಾಲಿಗೆ ಬಿದ್ದರು. ನಂತರ ನ್ಯಾಯಮೂರ್ತಿಗಳು ಮಕ್ಕಳನ್ನು ನೋಡಿ‌ಕೊಳ್ಳುವ ವೈದ್ಯರನ್ನು ಕರೆಯಿಸಿ ಮಾತನಾಡಿಸಿ, ಮಕ್ಕಳ ಆರೋಗ್ಯದ ಬಗ್ಗೆ ಪೋಷಕರಿಗೆ ಮಾಹಿತಿಯನ್ನು ಸರಿಯಾಗಿ ನೀಡಬೇಕೆಂದು ಸೂಚನೆ ನೀಡಿದರು.

ನಂತರ ಸುದ್ದಿಗಾರೂಂದಿಗೆ ಮಾತನಾಡಿದ ಅವರು, ಆಸ್ಪತ್ರೆ ಕಟ್ಟಡ‌ ನಿರ್ವಹಣೆಯನ್ನು ಸರಿಯಾಗಿ ಮಾಡುತ್ತಿಲ್ಲ. ಇದರಿಂದ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಹಾಗೂ ಆಸ್ಪತ್ರೆ ವೈದ್ಯರಿಗೆ ಆಸ್ಪತ್ರೆ ಸರಿಪಡಿಸುವಂತೆ ಸೂಚನೆ ನೀಡಿದರು. ಈ ವೇಳೆ, ಆಸ್ಪತ್ರೆಯ ವೈದ್ಯಾಧಿಕಾರಿ ಡಾ ಶ್ರೀಧರ್ ಉಪಸ್ಥಿತರಿದ್ದರು.

ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ:ಕಡತ ವಿಲೇವಾರಿಯಲ್ಲಿ ವಿಳಂಬ, ಕರ್ತವ್ಯ ಲೋಪ, ಅಧಿಕಾರ ದುರುಪಯೋಗ, ಭ್ರಷ್ಟಾಚಾರದಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಬಿ.ಎಸ್. ಪಾಟೀಲ ಎಚ್ಚರಿಕೆ ನೀಡಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳ ಮುಖ್ಯಸ್ಥರ ಸಭೆಯನ್ನು ನಡೆಸಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಮತ್ತು ಪುನರುಜ್ಜೀವನ ಕುರಿತಾಗಿ ಲೋಕಾಯುಕ್ತ ಸಂಸ್ಥೆ ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡಿದೆ. ಕೆರೆಗಳ ಒತ್ತುವರಿ ತೆರವುಗೊಳಿಸಿ ಸಂರಕ್ಷಿಸಲು ಗುರಿಯನ್ನು ನಿಗದಿಪಡಿಸಲಾಗಿದ್ದು, ನಿಯಮಿತವಾಗಿ ಈ ಕುರಿತು ವಿಚಾರಣೆ ನಡೆಸಲಾಗುವುದು ಎಂದರು.

ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು 6 ಸಾವಿರಕ್ಕೂ ಅಧಿಕ ಕೆರೆಗಳಿದ್ದು, ಇವುಗಳ ಸರ್ವೇ ಕಾರ್ಯವನ್ನು ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಆದ್ಯತೆ ಮೇರೆಗೆ ಈ ಕಾರ್ಯವನ್ನು ಕೈಗೊಂಡು ವರದಿಯನ್ನು ಸಲ್ಲಿಸಬೇಕು. ಇದೇ ರೀತಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿರುವ ಕೆರೆಗಳ ಸ್ಥಿತಿಗತಿ ಕುರಿತು ವರದಿಯನ್ನು ಪ್ರತ್ಯೇಕವಾಗಿ ಸಲ್ಲಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ:ಅಂಕೋಲಾದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇ ಅಧಿಕಾರಿ

ABOUT THE AUTHOR

...view details