ಕರ್ನಾಟಕ

karnataka

ಎರಡನೇ ಹಂತದ ಮತದಾನ: ಬಾಗಲಕೋಟೆಯಲ್ಲಿ ಸಕಲ ಸಿದ್ಧತೆ - ಜಿಲ್ಲೆಯಾದ್ಯಂತ 1946 ಮತಗಟ್ಟೆ ಸ್ಥಾಪನೆ - second phase polling

By ETV Bharat Karnataka Team

Published : May 5, 2024, 9:32 PM IST

Updated : May 5, 2024, 11:03 PM IST

ಮೇ 7 ರಂದು ಬಾಗಲಕೋಟೆಯಲ್ಲಿ ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ತಿಳಿಸಿದರು.

all-preparations-have-been-made-in-bagalkot-for-second-phase-of-polling
ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ (ETV Bharat)

ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ (ETV Bharat)

ಬಾಗಲಕೋಟೆ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಾತನಾಡಿದ ಅವರು, 8,95,432 ಪುರುಷ, 9,10,751 ಮಹಿಳಾ ಹಾಗೂ 94 ಇತರೆ ಮತದಾರರು ಸೇರಿ ಒಟ್ಟು 18,06,183 ಮತದಾರರು ಮತ ಚಲಾಯಿಸಲಿದ್ದಾರೆ. ಇದಕ್ಕಾಗಿ 1946 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮುಧೋಳ ಮೀಸಲು ಕ್ಷೇತ್ರದಲ್ಲಿ 212, ತೇರದಾಳದಲ್ಲಿ 236, ಜಮಖಂಡಿ 232, ಬೀಳಗಿ 260, ಬಾದಾಮಿ 260, ಬಾಗಲಕೋಟೆ 267 ಹಾಗೂ ಹುನಗುಂದ ಕ್ಷೇತ್ರದಲ್ಲಿ 255, ನರಗುಂದದಲ್ಲಿ 220 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಸ್ಥಾಪಿಸಲಾದ 1946 ಮತಗಟ್ಟೆಗಳ ಪೈಕಿ 1683 ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. 70 ಮತಗಟ್ಟೆಗಳಲ್ಲಿ ವಿಡಿಯೋ ಗ್ರಾಫರ್, 250 ಮತಗಟ್ಟೆಗಳಲ್ಲಿ ಮೈಕ್ರೋ ಅಬ್ಸರವರ್ ನೇಮಕ ಮಾಡಲಾಗಿದೆ. ಪ್ರತಿ ಮತಗಟ್ಟೆಗೆ ಒಬ್ಬ ಪ್ರೆಸಿಡಿಂಗ್ ಆಫೀಸರ್ ಹಾಗೂ 3 ಜನ ಪೋಲಿಂಗ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಶೇ.120 ರಷ್ಟು ಹೆಚ್ಚುವರಿ ಸಿಬ್ಬಂದಿಗಳು ಸೇರಿ ಒಟ್ಟು 9,274 ಸಿಬ್ಬಂದಿಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಶಿಧರ ಕುರೇರ ಮಾತನಾಡಿ, ನೀತಿ ಸಂಹಿತೆ ಉಲ್ಲಂಘನೆಯಡಿ ಜಿಲ್ಲೆಯಲ್ಲಿ ಒಟ್ಟು 3 ಪ್ರಕರಣಗಳ ಮೇಲೆ ಎಫ್‌ಐಆರ್ ದಾಖಲು ಮಾಡಲಾಗಿದೆ. ಹುನಗುಂದ ಮತಕ್ಷೇತ್ರದಲ್ಲಿ 2 ಹಾಗೂ ಬಾಗಲಕೋಟೆ ಕ್ಷೇತ್ರದಲ್ಲಿ ಒಂದು ಪ್ರಕರಣ ದಾಖಲಾಗಿವೆ. ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಿ ವಿವರಣೆ ಪಡೆದುಕೊಳ್ಳಲಾಗಿದೆ. ಇಲ್ಲಿಯವರೆಗೆ 2.44 ಕೋಟಿ ರೂಪಾಯಿ ಜಪ್ತಿ ಮಾಡಲಾಗಿದ್ದು, ಹಣವನ್ನು ದಾಖಲಾತಿ ಒದಗಿಸಿದ ಹಿನ್ನೆಲೆಯಲ್ಲಿ ವಾಪಸ್​ ಕೊಡಲಾಗಿದೆ. 1.07 ಕೋಟಿ ಮೊತ್ತದ ಮದ್ಯ ವಶಕ್ಕೆ ಪಡೆಯಲಾಗಿದೆ ಎಂದರು.

ಮತದಾರರು ಮತ ಚಲಾಯಿಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ ಕ್ಷೇತ್ರದಲ್ಲಿ 40 ಮಹಿಳಾ ಸಖಿ ಮತಗಟ್ಟೆ, ತಲಾ 5 ರಂತೆ ವಿಶೇಷ ಚೇತನರ, ಯುವಜನ ನಿರ್ವಹಣೆಯ ಥೀಮ್ ಆಧಾರಿತ ಹಾಗೂ ಸಾಂಪ್ರದಾಯಿಕ ಆಧಾರಿತ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ ಮತಗಟ್ಟೆಗೆ ತೆರಳಲು ಗ್ರಾಮ ಪಂಚಾಯಿತಿ ವತಿಯಿಂದ ವಾಹನದ ವ್ಯವಸ್ಥೆ ಮಾಡಲಾಗಿದೆ. ಮತದಾರರಿಗೆ ಮತಗಟ್ಟೆಯಲ್ಲಿ ಮಾಹಿತಿ ನೀಡಲು 1,726 ಎನ್​ಎಸ್ಎಸ್ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಎಲ್ಲಾ ಮತಗಟ್ಟೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಪೊಲೀಸ್ ಸಿಬ್ಬಂದಿಗಳ ನಿಯೋಜನೆ:ಮತದಾನ ಸುಸೂತ್ರವಾಗಿ ನಡೆಯಲು ಪೊಲೀಸ್ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದೆ. 21 ಜನ ಪೊಲೀಸ್ ಇನ್ಸ್​ಪೆಕ್ಟರ್​ಗಳು, 1519 ಪೊಲೀಸ್, 485 ಹೋಮಗಾರ್ಡ್​ಗಳು, 5 ಕೆಎಸ್​ಆರ್​ಪಿ, 3 ಸಶಸ್ತ್ರ ಮೀಸಲು ಪಡೆಯ 85 ಸಿಬ್ಬಂದಿ ಸೇರಿದಂತೆ ಒಟ್ಟು 3500 ಭದ್ರತಾ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಮತಗಟ್ಟೆ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಸಾರ್ವಜನಿಕ ಅಥವಾ ಖಾಸಗಿ ಸ್ಥಳಗಳಲ್ಲಿ ಜನತಾ ಪ್ರಾತಿನಿಧ್ಯ ಅಧಿನಿಯಮದಡಿ ಪ್ರಚಾರ ನಿಷೇಧವಿರುತ್ತದೆ. ಧ್ವನಿವರ್ಧಕ ಮತ್ತು ಅನುಚಿತ ವರ್ತನೆ ನಿಷೇಧವಿರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ತಿಳಿಸಿದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಸಹಾಯಕ ಚುನಾವಣಾಧಿಕಾರಿ ಪರಶುರಾಮ ಶಿನ್ನಾಳಕರ, ತಹಶೀಲ್ದಾರ್​ ಪಂಪಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ:ಶಿವಮೊಗ್ಗ ಜಿಲ್ಲೆಯಲ್ಲಿ 87 ಅತಿಸೂಕ್ಷ್ಮ ಮತಗಟ್ಟೆಗಳು; ಡಿಸಿ ಗುರುದತ್ತ ಹೆಗಡೆ - SHIVAMOGGA LOK SABHA CONSTIUENCY

Last Updated : May 5, 2024, 11:03 PM IST

ABOUT THE AUTHOR

...view details