ಕರ್ನಾಟಕ

karnataka

ಹಾಸನ ವಿಡಿಯೋ ಪ್ರಕರಣ: ಜೆಡಿಎಸ್​ನಿಂದ ಪ್ರಜ್ವಲ್ ರೇವಣ್ಣ ಅಮಾನತು - JDS Suspends Prajwal Revanna

By ETV Bharat Karnataka Team

Published : Apr 30, 2024, 12:49 PM IST

Updated : Apr 30, 2024, 2:02 PM IST

ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಬಳಿಕ ಪ್ರಕರಣವನ್ನು ಸರ್ಕಾರ ಎಸ್​​ಐಟಿಗೆ ವಹಿಸಿರುವ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಿ ಜೆಡಿಎಸ್ ಆದೇಶ ಹೊರಡಿಸಿದೆ.

Etv Bharat
Etv Bharat

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಹುಬ್ಬಳ್ಳಿಯಲ್ಲಿ ಇಂದು ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ನಡುವೆ ಅಧಿಕೃತ ಪ್ರಕಟಣೆ ಹೊರಡಿಸಿದ ಪಕ್ಷ, ಪ್ರಜ್ವಲ್ ರೇವಣ್ಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಘೋಷಿಸಲಾಗಿದೆ.

ಆದೇಶದಲ್ಲಿರುವುದೇನು?: ’’ಪ್ರಜ್ವಲ್ ರೇವಣ್ಣ ಅವರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಪಕ್ಷದ ಗೌರವಕ್ಕೆ ಧಕ್ಕೆ ಉಂಟಾಗಿದೆ. ಜೊತೆಗೆ ಪ್ರಕರಣ ಸಂಬಂಧ ಸರ್ಕಾರ ಈಗಾಗಲೇ ಎಸ್​ಐಟಿ ತನಿಖೆಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಅನುಮೋದನೆಯೊಂದಿಗೆ ಪ್ರಜ್ವಲ್ ರೇವಣ್ಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ‘‘ ಎಂದು ಜೆಡಿಎಸ್​ ಮಹಾಪ್ರಧಾನ ಕಾರ್ಯದರ್ಶಿ ಕೆ ಆರ್ ಶಿವಕುಮಾರ್ ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.

ಇದಕ್ಕೂ ಮೊದಲು ತುರ್ತು ಸುದ್ದಿಗೋಷ್ಠಿ ನಡೆಸಿದ್ದ ಜಿಟಿಡಿ, ಕುಮಾರಸ್ವಾಮಿ:ಹಾಸನ ವಿಡಿಯೋ ಪ್ರಕರಣ ಸಂಬಂಧ ಸರ್ಕಾರ ಈಗಾಗಲೇ ಎಸ್​ಐಟಿ ರಚಿಸಿ ತನಿಖೆಗೆ ಆದೇಶಿಸಿದೆ. ಜೊತೆಗೆ ಹೊಳೆನರಸೀಪುರದಲ್ಲಿ ಪ್ರಕರಣ ದಾಖಲಾಗಿದೆ. ಈ ಬೆನ್ನಲ್ಲೇ ಜೆಡಿಎಸ್ ತುರ್ತು ಕೋರ್ ಕಮಿಟಿ ಸಭೆ ಕರೆದು, ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ತುರ್ತು ಕೋರ್ ಕಮಿಟಿ ಸಭೆ ಬಳಿಕ ಪಕ್ಷದ ರಾಜ್ಯಾಧ್ಯಕ್ಷ ಹೆಚ್​.ಡಿ.ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸೇರಿದಂತೆ ಪಕ್ಷದ ನಾಯಕರು ಸುದ್ದಿಗೋಷ್ಠಿ ನಡೆಸಿ, ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡಿರುವ ಕುರಿತು ಪ್ರಕಟಿಸಿದರು.

ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಎಸ್​ಐಟಿ ತನಿಖೆಗೆ ಆದೇಶಿಸಿರುವುದನ್ನು ಸ್ವಾಗತಿಸಿದ್ದೇವೆ. ಜೊತೆಗೆ ತನಿಖೆಗೆ ಸಂಪೂರ್ಣ ಸಹಕಾರ ನೀಡಲು ನಿರ್ಧರಿಸಿದ್ದೇವೆ. ಮಹಿಳೆಯರಿಗೆ ಅವಮಾನ ಆಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಲು ಸರ್ವಾನುಮತದಿಂದ ನಿರ್ಧರಿಸಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​.ಡಿ.ದೇವೇಗೌಡರಿಗೆ ಶಿಫಾರಸು ಮಾಡಿದ್ದೇವೆ ಎಂದು ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು ತಿಳಿಸಿದ್ದಾರೆ.

ಇದನ್ನೂ ಓದಿ:ಹಾಸನ ಪೆನ್​ಡ್ರೈವ್ ವಿಡಿಯೋ ಪ್ರಕರಣ: ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿ ಮುತ್ತಿಗೆಗೆ ಯತ್ನ - CONGRESS PROTEST

ಪ್ರಕರಣ ಸಂಬಂಧ ಎಸ್​ಐಟಿ ತನಿಖೆಗೆ ಸರ್ಕಾರ ಆದೇಶಿಸಿದೆ. ಎಸ್​ಐಟಿ ತನಿಖೆಯ ವರದಿ ಮತ್ತು ಸರ್ಕಾರ ಕೈಗೊಳ್ಳುವ ಕ್ರಮದ ಮೇಲೆ ಎಷ್ಟು ವರ್ಷ ಪಕ್ಷದಿಂದ ಅಮಾನತು ಎಂಬುದು ನಿಂತಿದೆ. ಯಾವುದೇ ಮಹಿಳೆಗೆ ಅನ್ಯಾಯವಾಗಬಾರದು ಎಂಬುದು ಪಕ್ಷದ ನಿಲುವು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಕರಣದಿಂದ ನಾವು ಪಲಾಯನ ಮಾಡುವುದಿಲ್ಲ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ವಿಡಿಯೋಗಳಿರುವ ಪೆನ್​​ಡ್ರೈವ್ ಹಂಚಿದ ಮಹಾನ್ ನಾಯಕ ಯಾರು ಎಂಬುದರ ಬಗ್ಗೆಯೂ ತನಿಖೆ ಆಗಬೇಕು. ಪ್ರಕರಣದ ಸತ್ಯಾಸತ್ಯತೆ ಹೊರಬರುವುದು ಒಂದು ಭಾಗವಾದರೆ, ಯಾವ ಕಾರಣಕ್ಕಾಗಿ ಪೆನ್ ಡ್ರೈವ್ ಹಂಚಿಕೆಯಾದವು ಎಂಬುದು ರಾಜ್ಯದ ಜನತೆಗೆ ತಿಳಿಯಬೇಕಿದೆ ಎಂದು ಕುಮಾರಸ್ವಾಮಿ ಆಗ್ರಹಿಸಿದರು.

ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಇದರಲ್ಲಿ ಯಾವುರೇ ರಾಜೀ ಇಲ್ಲ. ತನಿಖೆಗೆ ಯಾವುದೇ ಅಡ್ಡಿಪಡಿಸುವುದಿಲ್ಲ. ಯಾವುದೇ ಮಹಿಳೆಗೆ ಅನ್ಯಾಯವಾಗಿದ್ದರೆ ಎಸ್​ಐಟಿ ಮುಂದೆ ಕೊಡಿ ನಾವು ಯಾವುದೇ ಅಡ್ಡಿ ಮಾಡುವುದಿಲ್ಲ. ಆದರೆ ಈ ವಿಷಯವನ್ನು ಯಾರೂ ಬಿಡುಗಡೆ ಮಾಡಿದ್ದಾರೆ ಎಂಬುದು ಗೊತ್ತಾಗಬೇಕಿದೆ ಎಂದು ಒತ್ತಾಯಿಸಿದರು.

ಇದನ್ನೂ ಓದಿ:ಹಾಸನ ವಿಡಿಯೋ ಪ್ರಕರಣ: ಎಸ್ಐಟಿ ತಂಡಕ್ಕೆ 18 ಮಂದಿ ಅಧಿಕಾರಿಗಳು, ಸಿಬ್ಬಂದಿ ನಿಯೋಜಿಸಿದ ಸರ್ಕಾರ - Hassan Video case

Last Updated :Apr 30, 2024, 2:02 PM IST

ABOUT THE AUTHOR

...view details