ಕರ್ನಾಟಕ

karnataka

ರಾಜ್ಯದ 18 ಜಿಲ್ಲೆಗಳಿಗೆ ಬಿಸಿ ಗಾಳಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ - Heatwave Alert

By ETV Bharat Karnataka Team

Published : Apr 29, 2024, 6:19 PM IST

ರಾಜ್ಯದ 18 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಬಿಸಿಲ ಬೇಗೆ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹೀಟ್ ವೇವ್ ಅಲರ್ಟ್
ಹೀಟ್ ವೇವ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ದಿನ ದಿನಕ್ಕೆ ಬಿಸಿಲಿನ ತೀವ್ರತೆ ಹೆಚ್ಚುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ 38 ಡಿಗ್ರಿ ಸೆಲ್ಸಿಯಸ್ ಗರಿಷ್ಟ ತಾಪಮಾನವಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಈ ಬೆನ್ನಲ್ಲೇ 18 ಜಿಲ್ಲೆಗಳಿಗೆ ಮುಂದಿನ 4 ದಿನಗಳ ಕಾಲ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ ನೀಡಿದೆ.

ಮೇ 3 ರವರೆಗೆ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.

ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ. ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಡಿಗ್ರಿ ಮತ್ತು 23 ಡಿಗ್ರಿ ಇರಲಿದೆ ಎಂದು ತಿಳಿಸಿದೆ.

ಹೀಟ್‌ ಸ್ಟ್ರೋಕ್​ಗೆ ಒಳಗಾದರೆ ಏನು ಮಾಡಬೇಕು?: ಸ್ಟ್ರೋಕ್​ಗೆ ಒಳಗಾದ ವ್ಯಕ್ತಿಯನ್ನು ತಂಪಾದ ಸ್ಥಳದಲ್ಲಿ, ನೆರಳಿನ ಕೆಳಗೆ ಕೂರಿಸಿ. ಒದ್ದೆ ಬಟ್ಟೆಯಿಂದ ಒರೆಸಿ. ಆಗಾಗ ದೇಹವನ್ನು ತೊಳೆಯಿರಿ. ತಲೆಯ ಮೇಲೆ ಸಾಮಾನ್ಯ ತಾಪಮಾನದ ನೀರು ಸುರಿಯಿರಿ. ದೇಹದ ಉಷ್ಣತೆಯನ್ನು ಕಡಿಮೆ ಮಾಡುವುದು ಇಲ್ಲಿ ಮುಖ್ಯ ವಿಚಾರ.

ಕುಡಿಯಲು ಓ.ಆರ್.ಎಸ್ ಅಥವಾ ನಿಂಬೆ ಶರಬತ್ ಅಥವಾ ದೇಹವನ್ನು ಪುನರ್ಜಲೀಕರಣಗೊಳಿಸಲು ಉಪಯುಕ್ತವಾದ ಯಾವುದನ್ನಾದರೂ ನೀಡಬೇಕು. ಸ್ಟ್ರೋಕ್ ಆಗಿ ಮೂರ್ಛೆ ಹೊಂದಿದರೆ ತಕ್ಷಣ ವ್ಯಕ್ತಿಯನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಬೇಕು. ಇಲ್ಲದಿದ್ದರೆ ಶಾಖದ ಹೊಡೆತಗಳು ಮಾರಣಾಂತಿಕವಾಗಬಹುದು.

ರೈತರು/ಕೃಷಿ ಕಾರ್ಮಿಕರು ಹೊಲದಲ್ಲಿ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಬೇಕು. ಜನರು ಪ್ರಯಾಣಿಸುವಾಗ ಕಡ್ಡಾಯವಾಗಿ ನೀರನ್ನು ತೆಗೆದುಕೊಂಡು ಹೋಗಬೇಕು. ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಬೇಕು ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ:ರಾಜ್ಯದ ಬಹುತೇಕ ಭಾಗಗಳಲ್ಲಿ 5 ದಿನ ಬಿಸಿ ಗಾಳಿ: ಹವಾಮಾನ ಇಲಾಖೆ ಎಚ್ಚರಿಕೆ - Heatwave Alert

ABOUT THE AUTHOR

...view details