ಕರ್ನಾಟಕ

karnataka

ಇಂದು ಸಂಜೆ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ: ಉಡುಪಿ-ಚಿಕ್ಕಮಗಳೂರು ಕೈ ಟಿಕೆಟ್ ಬಹುತೇಕ ಫಿಕ್ಸ್

By ETV Bharat Karnataka Team

Published : Mar 12, 2024, 12:19 PM IST

Updated : Mar 12, 2024, 1:16 PM IST

ಇಂದು ಸಂಜೆ ಡಿ ಕೆ ಶಿವಕುಮಾರ್​ ನೇತೃತ್ವದಲ್ಲಿ ಕಾಂಗ್ರೆಸ್​ ಸೇರ್ಪಡೆಯಾಗಲಿರುವ ಕೆ.ಜಯಪ್ರಕಾಶ್​ ಹೆಗ್ಡೆ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

K Jayaprakash Hegde
ಕೆ.ಜಯಪ್ರಕಾಶ್ ಹೆಗ್ಡೆ

ಬೆಂಗಳೂರು: ಬಿಜೆಪಿ ಮುಖಂಡ ಕೆ.ಜಯಪ್ರಕಾಶ್ ಹೆಗ್ಡೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಆ ಮೂಲಕ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಹುತೇಕ ಜಯಪ್ರಕಾಶ್ ಹೆಗ್ಡೆ ಕಣಕ್ಕಿಳಿಯಲಿದ್ದಾರೆ.

ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗ್ಡೆ ಬಿಜೆಪಿ ತೊರೆದು ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ. ಅವರ ಜೊತೆ ಕೆಲ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿದೆ. ಸದ್ಯದಲ್ಲೇ ಬಿಡುಗಡೆಯಾಗಲಿರುವ ಎರಡನೇ ಪಟ್ಟಿಯಲ್ಲಿ ಜಯಪ್ರಕಾಶ್ ಹೆಗ್ಡೆ ಹೆಸರು ಪ್ರಕಟವಾಗಲಿದೆ. ಕಳೆದ ವಾರ ನಡೆದ ಕಾಂಗ್ರೆಸ್ ಸಿಇಸಿ ಸಭೆಯಲ್ಲಿ ಜಯಪ್ರಕಾಶ್ ಹೆಗ್ಡೆ ಹೆಸರನ್ನು ಅಂತಿಮಗೊಳಿಸಲಾಗಿತ್ತು. ಆದರೆ ಅವರು ಕಾಂಗ್ರೆಸ್ ಸೇರ್ಪಡೆಯಾಗದ ಕಾರಣ ಹೆಸರು ಘೋಷಣೆಯನ್ನು ತಡೆಹಿಡಿಯಲಾಗಿತ್ತು.

1972ರಲ್ಲಿ ಮೊದಲ ಬಾರಿಗೆ ಬ್ರಹ್ಮಾವರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಸಜ್ಜನ ರಾಜಕಾರಣಿ ಜಯಪ್ರಕಾಶ್ ಹೆಗ್ಡೆ ಬಳಿಕ ಜನತಾ ದಳ ಸೇರಿದ್ದರು. 1994ರಿಂದ 1996ರವರೆಗೆ ಅಂದಿನ ಮುಖ್ಯಮಂತ್ರಿ ಎಚ್.ಡಿ ದೇವೇಗೌಡ ಅವರ ಸಂಪುಟದಲ್ಲಿ ಬಂದರು ಮತ್ತು ಮೀನುಗಾರಿಕೆ ಸಚಿವರಾಗಿ ಕಾರ್ಯ ನಿರ್ವಹಸಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಳಿಕ ಕಾಂಗ್ರೆಸ್​ಗೆ ಸೇರ್ಪಡೆಗೊಂಡಿದ್ದರು.

2012ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ ಅವರು ಸಿಎಂ ಹುದ್ದೆ ತ್ಯಜಿಸಬೇಕಾದಾಗ ಉಡುಪಿ- ಚಿಕ್ಕಮಗಳೂರು ಸಂಸದರಾಗಿದ್ದ ಡಿ.ವಿ.ಸದಾನಂದ ಗೌಡರಿಗೆ ಸಿಎಂ ಸ್ಥಾನ ನೀಡಲಾಗಿತ್ತು. ಈ ಹಿನ್ನೆಲೆ ಸದಾನಂದ ಗೌಡರ ರಾಜೀನಾಮೆಯಿಂದಾಗಿ ತೆರವಾಗಿದ್ದ ಉಡುಪಿ-ಚಿಕ್ಕಮಗಳೂರು ಲೋಕಸಭೆ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್​ನಿಂದ ಸಂಸದರಾಗಿ ಚುನಾಯಿತರಾಗಿದ್ದರು.

2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿ, ಸೋಲು ಅನುಭವಿಸಿದ್ದರು. ಬಳಿಕ ಬದಲಾದ ಸನ್ನಿವೇಶದಲ್ಲಿ ಅವರು ಕಾಂಗ್ರೆಸ್ ಪಕ್ಷ ತ್ಯಜಿಸಿ ಬಿಜೆಪಿಗೆ ಸೇರಿಕೊಂಡಿದ್ದರು. ಬಿಜೆಪಿ ಸರ್ಕಾರ ಇದ್ದಾಗ ಹೆಗ್ಡೆ ಅವರನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಿಸಿತ್ತು. ರಾಜ್ಯದಲ್ಲಿ ಬಹು ಚರ್ಚೆಗೆ ಗ್ರಾಸವಾಗಿರುವ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ವರದಿಯನ್ನು ಇತ್ತೀಚಿಗಷ್ಟೇ ಸರ್ಕಾರಕ್ಕೆ ಸಲ್ಲಿಸಿದರು.

ಇತ್ತೀಚಿಗೆ ಕೆಲ ತಿಂಗಳಿಂದ ಅವರು ಕಾಂಗ್ರೆಸ್ ಸೇರ್ಪಡೆಯಾಗುವ ಸುದ್ದಿ ಬಲವಾಗಿ ಕೇಳಿಬಂದಿತ್ತು. ಆಯೋಗದ ಅಧ್ಯಕ್ಷ ಅವಧಿ‌ ಮುಗಿದ ಬಳಿಕ ಕಾಂಗ್ರೆಸ್ ಸೇರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಚರ್ಚೆ ನಡೆಸಿದ್ದರು. ಇದೀಗ ಅವರು ಇಂದು ಸಂಜೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.

ಇದನ್ನೂ ಓದಿ:ಸರ್ಕಾರ ಬೀಳಿಸಲು ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ: ಶಾಮನೂರು ಶಿವಶಂಕರಪ್ಪ ಸ್ಪಷ್ಟನೆ

Last Updated :Mar 12, 2024, 1:16 PM IST

ABOUT THE AUTHOR

...view details