ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಚಿನ್ನ ಸಹಿತ ಬಂಧಿಸಿದ್ದಾರೆ.
ಏ.27 ರಂದು ಪ್ರಯಾಣಿಕರೊಬ್ಬರ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ತಡೆದು ವಿಚಾರಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಈತ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ IX 886 ಮೂಲಕ ದಮಾಮ್‌ನಿಂದ ಮಂಗಳೂರಿಗೆ ಆಗಮಿಸಿದ್ದ. ವಿಚಾರಣೆ ನಡೆಸಿದಾಗ ಈತನ ಗುದನಾಳದಲ್ಲಿ 825 ಗ್ರಾಂ ತೂಕದ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟಿರುವುದು ಕಂಡುಬಂದಿದೆ. ಹೊರತೆಗೆಯುವಾಗ 750.000 ಗ್ರಾಂ ತೂಕದ 24 ಕ್ಯಾರೆಟ್ ಶುದ್ಧತೆಯ ಚಿನ್ನವು ಪತ್ತೆಯಾಗಿದೆ. ಇದರ ಮೌಲ್ಯ ರೂ. 54,30,000/- ಎಂದು ಅಂದಾಜಿಸಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಅಧಿಕಾರಿಗಳು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ವಿಚಾರಣೆ ನಡೆಸುತ್ತಿದ್ದಾರೆ.