ETV Bharat / bharat

NCP ನಾಯಕ ಶರದ್ ಪವಾರ್​ಗೆ ಜೀವ ಬೆದರಿಕೆ: ಐಟಿ ಉದ್ಯೋಗಿಯ ಬಂಧನ

author img

By

Published : Jun 12, 2023, 9:02 AM IST

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ(NCP) ನಾಯಕ ಶರದ್ ಪವಾರ್​ಗೆ ಜೀವ ಬೆದರಿಕೆ ಹಾಕಿದ್ದ ಐಟಿ ಉದ್ಯೋಗಿಯನ್ನು ಪುಣೆಯಲ್ಲಿ ಬಂಧಿಸಲಾಗಿದೆ.

Sharad Pawar
ಎನ್‌ಸಿಪಿ ನಾಯಕ ಶರದ್ ಪವಾರ್‌

ಮುಂಬೈ (ಮಹಾರಾಷ್ಟ್ರ): ಎನ್‌ಸಿಪಿ ನಾಯಕ ಶರದ್ ಪವಾರ್‌ಗೆ ಸಾಮಾಜಿಕ ಮಾಧ್ಯಮದಲ್ಲಿ ಜೀವ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಮುಂಬೈ ಕ್ರೈಂ ಬ್ರಾಂಚ್ ಪುಣೆಯ ವ್ಯಕ್ತಿಯನ್ನು ಬಂಧಿಸಿದೆ. ಆರೋಪಿಯನ್ನು ಸಾಗರ್ ಬರ್ವೆ(34 ) ಎಂದು ಗುರುತಿಸಲಾಗಿದೆ.

ಆತ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಜೂ 13ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಗಳು ಎನ್‌ಸಿಪಿ ಮುಖ್ಯಸ್ಥರಿಗೆ ಕೊಲೆ ಬೆದರಿಕೆ ಕಳುಹಿಸಲು ಎರಡು ನಕಲಿ ಸಾಮಾಜಿಕ ಮಾಧ್ಯಮ ಖಾತೆಗಳನ್ನು ರಚಿಸಿದ್ದ ಎಂದು ತಿಳಿದು ಬಂದಿದೆ. ಮೇ 9 ರಂದು ತನ್ನ ತಂದೆಗೆ ವಾಟ್ಸ್​ಆ್ಯಪ್​​ನಲ್ಲಿ ಜೀವ ಬೆದರಿಕೆ ಸಂದೇಶ ಬಂದಿರುವುದಾಗಿ ಸುಪ್ರಿಯಾ ಸುಳೆ ಹೇಳಿದ್ದಾರೆ. ಬೆದರಿಕೆಯನ್ನು 'ಕೆಳಮಟ್ಟದ ರಾಜಕೀಯ' ಎಂದು ಲೇವಡಿ ಮಾಡಿದ ಅವರು ಇದು ನಿಲ್ಲಬೇಕು ಎಂದು ಆಗ್ರಹಿಸಿದ್ದರು.

"ಪವಾರ್ ಅವರಿಗೆ ವಾಟ್ಸ್​ಆ್ಯಪ್‌ನಲ್ಲಿ ಸಂದೇಶ ಬಂದಿದೆ. ವೆಬ್‌ಸೈಟ್ ಮೂಲಕ ಅವರಿಗೆ ಬೆದರಿಕೆ ಹಾಕಲಾಗಿದೆ. ಹಾಗಾಗಿ ನ್ಯಾಯಕ್ಕಾಗಿ ನಾನು ಪೊಲೀಸ್​ ಠಾಣೆಗೆ ಬಂದಿದ್ದೇನೆ. ಮಹಾರಾಷ್ಟ್ರ ಗೃಹ ಸಚಿವರು ಮತ್ತು ಕೇಂದ್ರ ಗೃಹ ಸಚಿವರಿಗೆ ಕ್ರಮ ಕೈಗೊಳ್ಳುವಂತೆ ನಾನು ಒತ್ತಾಯಿಸುತ್ತೇನೆ. ಇಂತಹ ಕ್ರಮಗಳು ಕೀಳು ಮಟ್ಟದ ರಾಜಕೀಯವನ್ನು ಪ್ರತಿನಿಧಿಸುತ್ತವೆ. ಇದನ್ನು ನಿಲ್ಲಿಸಿ" ಎಂದು ಅವರು ಒತ್ತಾಯಿಸಿದ್ದರು. ಅಂತಹ ಪ್ರಕರಣಗಳಲ್ಲಿ ನ್ಯಾಯ ಸಿಗದಿದ್ದರೆ ಕೇಂದ್ರ ಮತ್ತು ರಾಜ್ಯ ಗೃಹ ಇಲಾಖೆಗಳನ್ನು ಹೊಣೆ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದರು.

ಕಳೆದ ವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು "ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಗೃಹ ಇಲಾಖೆ ಕೂಡ ಈ ವಿಷಯದಲ್ಲಿ ಮಧ್ಯ ಪ್ರವೇಶಿಸಬೇಕು. ಇಂತಹ ಪ್ರಕರಣಗಳಲ್ಲಿ ರಾಜಕೀಯವನ್ನು ಬದಿಗಿಡಬೇಕು" ಎಂದು ಸುಳೆ ಹೇಳಿದ್ದರು. "ನರೇಂದ್ರ ದಾಭೋಲ್ಕರ್ (2013 ರಲ್ಲಿ ಗುಂಡಿಕ್ಕಿ ಕೊಲ್ಲಲ್ಪಟ್ಟ ವಿಚಾರವಾದಿ) ಅವರಂತೆಯೇ ಪವಾರ್ ಅವರು ಫೇಸ್‌ಬುಕ್‌ನಲ್ಲಿ ಸಂದೇಶವನ್ನು ಸ್ವೀಕರಿಸಿದ್ದಾರೆ ಎಂದು ಸುಪ್ರಿಯಾ ಸುಳೆ ಪೊಲೀಸರಿಗೆ ತಿಳಿಸಿದ್ದರು.

ಮುಂಬೈ ಪೊಲೀಸರು ಪವಾರ್‌ಗೆ ಅನಾಮಧೇಯ ಜೀವ ಬೆದರಿಕೆಗೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 153 (ಎ), 504 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆಪಾದಿತ ಬೆದರಿಕೆಗಳ ಕುರಿತು ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಮಾಜಿ ಸಿಎಂ ಶರದ್ ಪವಾರ್‌ಗೆ ಭದ್ರತೆ ಹೆಚ್ಚಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.

ಎನ್‌ಸಿಪಿಯೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿದ್ದರೂ, ಪ್ರಮುಖ ವಿರೋಧ ಪಕ್ಷದ ನಾಯಕನಿಗೆ ಬೆದರಿಕೆ ಹಾಕುವುದನ್ನು ಸಹಿಸಲಾಗುವುದಿಲ್ಲ ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ಹೇಳಿದ್ದಾರೆ.

ಮುಂಬೈ ಪೊಲೀಸ್ ಆಯುಕ್ತರಿಗೆ ದೂರು: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರಿಗೆ ವೆಬ್‌ಸೈಟ್​ವೊಂದರ ಮೂಲಕ ಬೆದರಿಕೆ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಪುತ್ರಿ ಹಾಗೂ ಸಂಸದೆ ಸುಪ್ರಿಯಾ ಸುಳೆ ಮುಂಬೈ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ನನ್ನ ತಂದೆಗೆ ಏನಾದರೂ ಹೆಚ್ಚುಕಡಿಮೆ ಆದರೆ ಅದಕ್ಕೆ ಸರ್ಕಾರವೇ ಹೊಣೆ. ವೆಬ್‌ಸೈಟ್‌ನಿಂದ ಬೆದರಿಕೆ ಹಾಕಲಾಗಿದೆ. ಶರದ್ ಪವಾರ್‌ ಅವರ ವಾಟ್ಸ್​ಆ್ಯಪ್​​ಗೂ ಬೆದರಿಕೆ ಮೆಸೇಜ್​ಗಳು ಬಂದಿವೆ. ಈ ಕುರಿತು ಗೃಹ ಸಚಿವರು ಗಮನಹರಿಸಿ ಕ್ರಮ ಕೈಗೊಳ್ಳಬೇಕು" ಎಂದು ಹೇಳಿದ್ದರು.

ಇದನ್ನೂ ಓದಿ: ಶರದ್ ಪವಾರ್​ಗೆ ಬೆದರಿಕೆ ಸಂದೇಶ: ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಸುಪ್ರಿಯಾ ಸುಳೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.