ETV Bharat / bharat

ಮುಸ್ಲಿಮರಿಗೆ ಮೀಸಲಾತಿ ರದ್ದು: ಸುಪ್ರೀಂನಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಕೇಳಿದ ಕರ್ನಾಟಕ ಸರ್ಕಾರ

author img

By

Published : Apr 18, 2023, 12:13 PM IST

SC defers for April 25 hearing on pleas challenging scrapping of four per cent Muslim quota in Karnataka
ಮುಸ್ಲಿಮರಿಗೆ ಮೀಸಲಾತಿ ರದ್ದು: ಸುಪ್ರೀಂನಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಕೇಳಿದ ಕರ್ನಾಟಕ ಸರ್ಕಾರ

ಕರ್ನಾಟಕದಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ರದ್ದು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಇಂದು ಸುಪ್ರೀಂಕೋರ್ಟ್​ ನಡೆಸಿದೆ. ಈ ವೇಳೆ ರಾಜ್ಯ ಸರ್ಕಾರ ತನ್ನ ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಕೇಳಿದೆ.

ನವದೆಹಲಿ: ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ರದ್ದು ವಿಚಾರವಾಗಿ ಸುಪ್ರೀಂಕೋರ್ಟ್​ನಲ್ಲಿ ಕರ್ನಾಟಕ ಸರ್ಕಾರವು ತನ್ನ ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಕೇಳಿದೆ. ಆದ್ದರಿಂದ ಮೀಸಲಾತಿ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಏಪ್ರಿಲ್ 25ಕ್ಕೆ ಸರ್ವೋಚ್ಚ ನ್ಯಾಯಾಲಯ ಮುಂದೂಡಿದೆ.

ಒಕ್ಕಲಿಗರು ಮತ್ತು ಲಿಂಗಾಯತರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ಕೋಟಾ ತಲಾ ಶೇ.2ರಷ್ಟು ಹೆಚ್ಚಿಸಲು ಮುಸ್ಲಿಮರ ಶೇ.4ರಷ್ಟು ಮೀಸಲಾತಿ ರದ್ದು ಮಾಡಿರುವ ಕರ್ನಾಟಕ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಮುಸ್ಲಿಂ ಸಮುದಾಯದ ಸದಸ್ಯರು ಅರ್ಜಿಗಳು ಸಲ್ಲಿಸಿದ್ದಾರೆ. ಈ ಹಿಂದೆ ಏಪ್ರಿಲ್​ 13ರಂದು ಅರ್ಜಿ ವಿಚಾರಣೆಗಳ ನಡೆಸಿದ್ದ ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರ ನೇತೃತ್ವದ ನ್ಯಾಯ ಪೀಠವು ಏಪ್ರಿಲ್​ 18ರೊಳಗೆ ತನ್ನ ಪ್ರತಿಕ್ರಿಯೆ ಸಲ್ಲಿಸಲು ಕರ್ನಾಟಕ ಸರ್ಕಾರಕ್ಕೆ ಸೂಚಿಸಿತ್ತು.

ಇಂದು ಮತ್ತೆ ವಿಚಾರಣೆ ಆರಂಭದಲ್ಲಿ ರಾಜ್ಯ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಲಿಂಗ ವಿವಾಹದ ಬಗ್ಗೆ ಸಂವಿಧಾನ ಪೀಠದ ಮುಂದೆ ವಾದಿಸಬೇಕಾಗಿದೆ. ಆದ್ದರಿಂದ ವಾರಾಂತ್ಯದಲ್ಲಿ ಮೀಸಲಾತಿ ಕೋಟಾ ವಿಷಯದ ಬಗ್ಗೆ ಉತ್ತರವನ್ನು ಸಲ್ಲಿಸಲಾಗುವುದು ಎಂದು ನ್ಯಾಯ ಪೀಠಕ್ಕೆ ತಿಳಿಸಿದರು. ಇದಕ್ಕೆ ಮೀಸಲಾತಿ ರದ್ಧತಿಯನ್ನು ಪ್ರಶ್ನಿಸಿ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್​ ವಿರೋಧ ವ್ಯಕ್ತಪಡಿಸಲಿಲ್ಲ. ಆದರೆ, ಏಪ್ರಿಲ್ 25ಕ್ಕಿಂತ ಮೊದಲು ವಿಚಾರಣೆ ನಡೆಸಬಹುದು ಎಂದು ಹೇಳಿದರು.

ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ರದ್ದತಿಗೆ ಸುಪ್ರೀಂ ಕೋರ್ಟ್ ತಪರಾಕಿ ನಿರೀಕ್ಷಿತ: ಸಿದ್ದರಾಮಯ್ಯ

ಎರಡು ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು ಏಪ್ರಿಲ್ 25ಕ್ಕೆ ಮುಂದಿನ ವಿಚಾರಣೆ ಮುಂದೂಡುವುದಾಗಿ ತಿಳಿಸಿತು. ಇದೇ ವೇಳೆ ಒಕ್ಕಲಿಗರು ಮತ್ತು ಲಿಂಗಾಯತರಿಗೆ ಶಿಕ್ಷಣ ಸಂಸ್ಥೆಗಳ ಪ್ರವೇಶ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಯಾವುದೇ ಕೋಟಾ ಪ್ರಯೋಜನಗಳನ್ನು ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ಏಪ್ರಿಲ್ 13ರಂದು ನೀಡಿದ್ದ ಭರವಸೆಯನ್ನು ಏಪ್ರಿಲ್ 25ರವರೆಗೆ ಮುಂದುವರಿಸಲಾಗುವುದು ಎಂದೂ ಹೇಳಿತು. ಏಪ್ರಿಲ್ 13ರಂದು ನಡೆದ ವಿಚಾರಣೆ ಸಂದರ್ಭದಲ್ಲಿ ನ್ಯಾಯಪೀಠವು ಮುಸ್ಲಿಮರ ಮೀಸಲಾತಿ ರದ್ದು ಮಾಡಿರುವುದು ಮೇಲ್ನೋಟಕ್ಕೆ "ದೋಷಪೂರಿತ ಎಂಬಂತೆ ಕಂಡು ಬರುತ್ತಿದೆ ಎಂದು ಹೇಳಿತ್ತು.

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಕೆಲ ವಾರಗಳ ಮುನ್ನ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗಿದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ನಿರ್ಧರಿಸಿತ್ತು. ಇದೇ ವೇಳೆ ರಾಜ್ಯ ಸರ್ಕಾರವು ಮೀಸಲಾತಿಗಾಗಿ ಎರಡು ಹೊಸ ವರ್ಗಗಳನ್ನು ಘೋಷಿಸಿತ್ತು. ಮುಸ್ಲಿಮರ ಶೇ.4ರಷ್ಟು ಮೀಸಲಾತಿ ಕೋಟಾವನ್ನು ಪ್ರಬಲ ಜನಸಂಖ್ಯೆ ಹಾಗೂ ರಾಜಕೀಯವಾಗಿ ಪ್ರಭಾವಿ ಸಮುದಾಯಗಳಾದ ಒಕ್ಕಲಿಗರು ಮತ್ತು ಲಿಂಗಾಯತರು ನಡುವೆ ತಲಾ ಶೇ.2ರಷ್ಟು ವಿಂಗಡಿಸಿ ಹಂಚಿಕೆ ಮಾಡಿತ್ತು. ಮುಸ್ಲಿಮರನ್ನು ಆರ್ಥಿಕವಾಗಿ ದುರ್ಬಲ ವರ್ಗಗಳ ಅಡಿಗೆ ಸೇರಿಸಿ ಆದೇಶಿಸಲಾಗಿತ್ತು.

ಇದನ್ನೂ ಓದಿ: ಕರ್ನಾಟಕದಲ್ಲಿ ಮುಸ್ಲಿಮರ 4% ಮೀಸಲಾತಿ ರದ್ದು ದೋಷಪೂರಿತ ಎಂದ ಸುಪ್ರೀಂ ಕೋರ್ಟ್​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.