ETV Bharat / city

ವಿಧಾನಪರಿಷತ್, ರಾಜ್ಯಸಭೆ ಚುನಾವಣೆ : ಅಭ್ಯರ್ಥಿಗಳ ಆಯ್ಕೆಯಲ್ಲಿ ಮೂರು ಪಕ್ಷಗಳಿಂದ ಹಗ್ಗಜಗ್ಗಾಟ!

author img

By

Published : May 23, 2022, 2:15 PM IST

ಮೇ 17ರಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದರೂ ಇದುವರೆಗೂ ಯಾವೊಬ್ಬ ಅಭ್ಯರ್ಥಿಯೂ ನಾಮಪತ್ರ ಸಲ್ಲಿಸಿಲ್ಲ. ಇಂದು ಸಂಜೆ ವೇಳೆಗೆ ಮೂರು ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಕೊನೆಯ ಗಳಿಗೆಯಲ್ಲಿ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ..

assembly-rajya-sabha-election
ವಿಧಾನಪರಿಷತ್, ರಾಜ್ಯಸಭೆ ಚುನಾವಣೆ

ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‍ನ ಏಳು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕಡೆಯ ದಿನವಾಗಿದೆ. ಇನ್ನು ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ನಾಳೆ ಅಧಿಸೂಚನೆ ಹೊರ ಬೀಳಲಿದ್ದು, ನಾಳೆಯಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದರೂ ಎರಡೂ ರಾಷ್ಟ್ರೀಯ ಪಕ್ಷಗಳು ಹಾಗೂ ಜೆಡಿಎಸ್‍ ಕಣಕ್ಕಿಳಿಸಲಿರುವ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ ಅಂತಿಮಗೊಳಿಸಿಲ್ಲ.

ಇಂದು ಸಂಜೆ ವೇಳೆಗೆ ಮೂರು ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಕೊನೆ ಗಳಿಗೆಯಲ್ಲಿ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ. ಮೇ 17ರಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದರೂ ಇದುವರೆಗೂ ಯಾವೊಬ್ಬ ಅಭ್ಯರ್ಥಿಯೂ ನಾಮಪತ್ರ ಸಲ್ಲಿಸಿಲ್ಲ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಹೈಕಮಾಂಡ್ ವಿಧಾನಪರಿಷತ್ ಚುನಾವಣೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಪ್ರಕಟಿಸಬೇಕಾಗಿದೆ.

ಜೆಡಿಎಸ್‍ನಲ್ಲಿ ಅಭ್ಯರ್ಥಿಗಳ ಆಯ್ಕೆ ಅಧಿಕಾರವನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ನೀಡಲಾಗಿದೆ. ಇಂದು ಅಭ್ಯರ್ಥಿ ಆಯ್ಕೆ ಅಂತಿಮಗೊಳಿಸಿ ಪ್ರಕಟಿಸುವ ಸಾಧ್ಯತೆ ಇದೆ. ಜೆಡಿಎಸ್‍ನಿಂದ ಕಣಕ್ಕಿಳಿಯಲು ವಿಧಾನಪರಿಷತ್ ಮಾಜಿ ಸದಸ್ಯ ಟಿ ಎ ಶರವಣ ಹಾಗೂ ವೀರೇಂದ್ರ ಅವರು ಪ್ರಬಲ ಸ್ಪರ್ಧಿಗಳಾಗಿದ್ದಾರೆ. ಈ ಬಾರಿ ಮಧ್ಯ ಕರ್ನಾಟಕ ಭಾಗಕ್ಕೆ ಅವಕಾಶ ಮಾಡಿಕೊಡಬೇಕು ಎಂಬ ಲೆಕ್ಕಾಚಾರ ಮಾಡಲಾಗಿದೆ. ಇದಕ್ಕೆ ಒತ್ತು ನೀಡಿದರೆ ವೀರೇಂದ್ರ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ.

ಇನ್ನು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅಂತಿಮಗೊಳಿಸಿ ಸ್ಪರ್ಧಾಕಾಂಕ್ಷಿಗಳ ಪಟ್ಟಿಯನ್ನು ಹೈಕಮಾಂಡ್ ಅಂಗಳಕ್ಕೆ ರವಾನಿಸಲಾಗಿದ್ದು, ಇಂದು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ. ವಿಧಾನಸಭೆಯಲ್ಲಿ ಹೊಂದಿರುವ ಶಾಸಕರ ಸಂಖ್ಯೆಯ ಆಧಾರದ ಮೇಲೆ ಬಿಜೆಪಿ ನಾಲ್ಕು, ಕಾಂಗ್ರೆಸ್ ಎರಡು ಹಾಗೂ ಜೆಡಿಎಸ್ ಒಂದು ಸ್ಥಾನವನ್ನು ಸುಲಭವಾಗಿ ಗೆಲ್ಲಬಹುದಾಗಿದೆ. ರಾಷ್ಟ್ರೀಯ ಪಕ್ಷಗಳು ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಮತದಾನ ನಡೆಯುವುದು ಅನಿವಾರ್ಯವಾಗಲಿದೆ. ಇಲ್ಲದಿದ್ದರೆ ಅವಿರೋಧ ಆಯ್ಕೆಯಾಗುವ ಸಾಧ್ಯತೆಗಳಿವೆ.

ವಿಧಾನಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ಲೇಹರ್‌ಸಿಂಗ್, ಆರ್.ಬಿ.ತಿಮ್ಮಾಪುರ, ಅಲ್ಲಂವೀರಭದ್ರಪ್ಪ, ಹೆಚ್ ಎಂ ರಮೇಶ್‍ಗೌಡ, ವೀಣಾ ಅಚ್ಚಯ್ಯ, ಕೆ.ವಿ.ನಾರಾಯಣಸ್ವಾಮಿ ಅವರು ಸೇರಿ ಜೂನ್ 14ರಂದು ನಿವೃತ್ತಿಯಾಗುವ 7 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇನ್ನು ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ 2, ಕಾಂಗ್ರೆಸ್ 1 ಸ್ಥಾನವನ್ನು ಸುಲಭವಾಗಿ ಗೆಲ್ಲಬಹುದಾಗಿದೆ. ಜೆಡಿಎಸ್ ಒಂದು ಸ್ಥಾನ ಗೆಲ್ಲಬೇಕಾದರೆ ರಾಷ್ಟ್ರೀಯ ಪಕ್ಷಗಳ ಬೆಂಬಲ ಪಡೆಯುವುದು ಅನಿವಾರ್ಯವಾಗಲಿದೆ.

ನಿರ್ಮಲಾ ಸೀತರಾಮನ್​ ಸ್ಪರ್ಧೆ ಸಾಧ್ಯತೆ : ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ನಾಳೆಯಿಂದ ಮೇ 31ರವರೆಗೂ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಬಿಜೆಪಿಯಿಂದ ರಾಜ್ಯಸಭೆ ಸದಸ್ಯರಾದ ಕೆ.ಸಿ.ರಾಮಮೂರ್ತಿ, ನಿರ್ಮಲಾ ಸೀತಾರಮನ್ ಅವರನ್ನು ಮತ್ತೆ ಈ ಬಾರಿ ಸ್ಪರ್ಧೆಗಿಳಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಆದರೆ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಬಾರಿ ಕರ್ನಾಟಕ ಬದಲಿಗೆ ಉತ್ತರ ಪ್ರದೇಶದಿಂದ ಸ್ಪರ್ಧೆಗಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹಾಗೇನಾದರೂ ಒಂದು ವೇಳೆ ಉತ್ತರ ಪ್ರದೇಶದಿಂದ ನಿರ್ಮಲಾ ಸೀತಾರಾಮನ್ ಸ್ಪರ್ಧಿಸಿದರೆ ರಾಜ್ಯದಿಂದ ಹೊಸಬರಿಗೆ ಅವಕಾಶ ಮಾಡಿಕೊಡಲು ಬಿಜೆಪಿ ಉದ್ದೇಶಿಸಿದೆ. ನಿರ್ಮಲ್‍ ಕುಮಾರ್ ಸುರಾನಾ ಅವರಿಗೆ ಅವಕಾಶ ದೊರೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದ್ದರೂ ಅಧಿಕೃತವಾಗಿ ಇನ್ನೂ ಯಾರ ಹೆಸರನ್ನು ಪಕ್ಷ ಪ್ರಕಟಿಸಿಲ್ಲ.

ಪ್ರತಿ ಪಕ್ಷ ಕಾಂಗ್ರೆಸ್‍ನಿಂದ ಹಾಲಿ ರಾಜ್ಯಸಭೆ ಸದಸ್ಯರಾಗಿರುವ ಜಯರಾಮ್ ರಮೇಶ್ ಅವರನ್ನೇ ಮತ್ತೆ ರಾಜ್ಯದಿಂದ ಸ್ಪರ್ಧೆಗಿಳಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಇನ್ನು ಜೆಡಿಎಸ್‍ನಿಂದ ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರರೆಡ್ಡಿ ಹೆಸರು ಪ್ರಸ್ತಾಪವಾಗುತ್ತಿದ್ದು, ಇನ್ನೂ ಅಂತಿಮವಾಗಿಲ್ಲ.

ಕಾಂಗ್ರೆನ್​ನಲ್ಲಿ ಜಂಘೀಕುಸ್ತಿ : ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ನಡುವೆ ಜಂಘೀಕುಸ್ತಿ ನಡೆಯುತ್ತಿದೆ. ಚುನಾವಣೆ ನಡೆಯುತ್ತಿರುವ ಏಳು ಸ್ಥಾನಗಳ ಪೈಕಿ ಎರಡು ಸ್ಥಾನಗಳನ್ನು ಗೆಲ್ಲುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕಿದೆ.

ಈ ಎರಡು ಸೀಟುಗಳ ಪೈಕಿ ಒಂದು ಸೀಟನ್ನು ವಿಧಾನಪರಿಷತ್ತಿನ ಮಾಜಿ ಅಧ್ಯಕ್ಷ ಎಸ್.ಆರ್.ಪಾಟೀಲ್ ಅವರಿಗೆ ನೀಡಲು ಡಿಕೆಶಿ ಪಟ್ಟು ಹಿಡಿದಿದ್ದರೆ, ಎಸ್.ಆರ್.ಪಾಟೀಲ್ ಬೇಡ ಎಂದು ಸಿದ್ಧರಾಮಯ್ಯ ಪಟ್ಟು ಹಿಡಿದಿದ್ದಾರೆ. ವಿಧಾನಪರಿಷತ್ತಿನ ಪ್ರತಿಪಕ್ಷ ನಾಯಕರಾಗಿದ್ದ ಎಸ್.ಆರ್.ಪಾಟೀಲ್ ಅವರಿಗೆ ಈ ಹಿಂದೆ ಟಿಕೆಟ್ ನೀಡಿರಲಿಲ್ಲ.

ಹೀಗಾಗಿ, ಈ ಬಾರಿ ಟಿಕೆಟ್ ನೀಡುವ ಮೂಲಕ ಆಗಿರುವ ಲೋಪವನ್ನು ಸರಿಪಡಿಸಿಕೊಳ್ಳಬೇಕು ಎಂಬುದು ಶಿವಕುಮಾರ್ ವಾದವಾಗಿದೆ. ಆದರೆ, ಈ ಹಿಂದೆ ತಮಗೆ ಟಿಕೆಟ್ ತಪ್ಪಿದೆ ಎಂಬ ಕಾರಣಕ್ಕಾಗಿ ಬೇರೆ ಪಕ್ಷಗಳ ಕಡೆ ಹೋಗಲು ಎಸ್.ಆರ್.ಪಾಟೀಲ್ ತಯಾರಿ ನಡೆಸಿದ್ದರು. ಮತ್ತು ಪಕ್ಷದ ಕಾರ್ಯಕ್ರಮಗಳನ್ನು ನಿರ್ಲಕ್ಷಿಸಿ ತಮ್ಮದೇ ದಾರಿ ಹಿಡಿದಿದ್ದರು. ಆದ್ದರಿಂದ ಅವರಿಗೆ ಟಿಕೆಟ್ ನೀಡುವುದು ಬೇಡ ಎಂಬುದು ಸಿದ್ಧರಾಮಯ್ಯ ಪಟ್ಟು ಎನ್ನಲಾಗಿದೆ.

ಕ್ರಿಶ್ಚಿಯನ್‌ ಸಮುದಾಯಕ್ಕೆ ಅವಕಾಶ : ಈ ಮಧ್ಯೆ ವಿಧಾನಪರಿಷತ್ತಿಗೆ ಪದೇಪದೆ ಮುಸ್ಲಿಂ ಅಭ್ಯರ್ಥಿಗೆ ಅವಕಾಶ ನೀಡುವ ಬದಲು ಈ ಬಾರಿ ಕ್ರಿಶ್ಚಿಯನ್ ಸಮುದಾಯಕ್ಕೆ ನೀಡಬೇಕು ಎಂಬ ವಾದ ಶುರುವಾಗಿದೆ. ಏಕಕಾಲಕ್ಕೆ ಆಸ್ಕರ್ ಫರ್ನಾಂಡೀಸ್ ಅವರ ಪುತ್ರಿ ಮತ್ತು ಮಾರ್ಗರೇಟ್ ಆಳ್ವ ಅವರ ಪುತ್ರ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇದರಲ್ಲೇ ಯಾರಿಗೆ ಟಿಕೆಟ್ ನೀಡಬೇಕು ಎಂಬ ವಿಷಯದಲ್ಲಿ ಡಿಕೆಶಿ ಮತ್ತು ಸಿದ್ಧರಾಮಯ್ಯ ಅವರಿಗೆ ಭಿನ್ನಾಭಿಪ್ರಾಯ ಇದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಈ ಮಧ್ಯೆ ಮುಸ್ಲಿಂ ನಾಯಕ ಅಬ್ದುಲ್ ಜಬ್ಬಾರ್ ಅವರಿಗೆ ಟಿಕೆಟ್ ಕೊಡಿಸುವ ವಾದವೂ ಮುಂದೆ ಬಂದಿದೆ.

ಇದೇ ರೀತಿ ಬಿ.ಎಲ್.ಶಂಕರ್ ಅವರಿಗೆ ಟಿಕಟ್ ಕೊಡಿಸುವ ವಿಷಯವೂ ಉಭಯ ನಾಯಕರ ಮಧ್ಯೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ. ಪರಿಷತ್ ಕಣದಲ್ಲಿ ತಮ್ಮ ಕ್ಯಾಂಡಿಡೇಟುಗಳೇ ಸ್ಪರ್ಧಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ, ಕಾಂಗ್ರೆಸ್ ಅಭ್ಯರ್ಥಿಗಳು ಯಾರಾಗಬೇಕು ಎಂಬ ವಿಷಯದಲ್ಲಿ ಇದುವರೆಗೆ ಒಮ್ಮತಕ್ಕೆ ಬರಲು ಕೈ ಪಾಳೆಯಕ್ಕೆ ಸಾಧ್ಯವಾಗುತ್ತಿಲ್ಲ ಎಂದಿರುವ ಉನ್ನತ ಮೂಲಗಳು, ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವಣ ಜಂಘೀಕುಸ್ತಿಯ ಪರಿಣಾಮವಾಗಿ ಅಭ್ಯರ್ಥಿಗಳ ಆಯ್ಕೆಗೆ ಹೈಕಮಾಂಡ್ ಕಡೆ ನೋಡುವ ಸ್ಥಿತಿ ಬಂದಿದೆ ಎಂದಿವೆ.

ಈ ಜಂಘೀ ಕುಸ್ತಿ ಇದೀಗ ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ಅಳೆದುತೂಗಿ ಅಭ್ಯರ್ಥಿಗಳ ಆಯ್ಕೆ ನಡೆಯುತ್ತಿದೆ. ಇಂದು ಸಂಜೆಯ ಒಳಗೆ ಆಯ್ಕೆ ಅಂತಿಮಗೊಳ್ಳಲಿದ್ದು, ತಕ್ಷಣವೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ರಾಜ್ಯಸಭೆ, ಪರಿಷತ್ ಅಭ್ಯರ್ಥಿಗಳ ಪಟ್ಟಿ ವಿಳಂಬ: ಕಾಂಗ್ರೆಸ್ ಹೈಕಮಾಂಡ್ ಗರಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.