ETV Bharat / city

ಕೆಎಸ್​​ಪಿಸಿಬಿ ಅಧ್ಯಕ್ಷರ ನೇಮಕಾತಿ ಮೂಲ ಕಡತ ಸಲ್ಲಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

author img

By

Published : Mar 6, 2021, 2:33 AM IST

ಕೆಎಸ್‌ಪಿಸಿಬಿ ಅಧ್ಯಕ್ಷರ ನೇಮಕ ಸಂಬಂಧ ಮಾರ್ಗಸೂಚಿ ರಚನೆ ಮಾಡಿ 2020ರ ಜೂನ್ 19ರಂದು ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಆದರೆ, ಈ ಮಾರ್ಗಸೂಚಿಗಳು ಸುಪ್ರೀಂ ಕೋರ್ಟ್ ನಿರ್ದೇಶನಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದರು.

kspcb
ಕೆಎಸ್​​ಪಿಸಿಬಿ

ಬೆಂಗಳೂರು : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಮೂಲ ಕಡತವನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಕೆಎಸ್‌ಪಿಸಿಬಿ ಅಧ್ಯಕ್ಷರು ಮತ್ತು ಸದಸ್ಯ ಕಾರ್ಯದರ್ಶಿಯ ನೇಮಕಾತಿಗೆ ರೂಪಿಸಿರುವ ಮಾರ್ಗಸೂಚಿಗಳನ್ನು ಪ್ರಶ್ನಿಸಿ ಚಿಕ್ಕಬಳ್ಳಾಪುರದ ಆಂಜನೇಯ ರೆಡ್ಡಿ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ರಾಜ್ಯ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ಕಳೆದ ಬಾರಿ ಮಂಡಳಿಯ ಅಧ್ಯಕ್ಷರ ನೇಮಕಾತಿಗೆ ಅರ್ಜಿ ಆಹ್ವಾನಿಸಿದಾಗ 105 ಅರ್ಜಿಗಳು ಬಂದಿವೆ. ಅವುಗಳನ್ನು ಈಗಾಗಲೇ ಸಿಎಂ ನೇತೃತ್ವದ ಸಮಿತಿ ಪರಿಶೀಲಿಸಿದೆ. ಕೆಲ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ಹೀಗಾಗಿ, ಹೊಸದಾಗಿ ಪ್ರಕ್ರಿಯೆ ನಡೆಸುವ ಅಗತ್ಯವಿಲ್ಲ ಎಂದು ತಿಳಿಸಿದರು.

ಇದನ್ನು ಓದಿ: ಫಾಸ್ಟ್ ಟ್ಯಾಗ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಅಧ್ಯಕ್ಷರ ನೇಮಕಾತಿ ನಡೆಸಿದ ನಂತರ ಮತ್ತೆ ವಿವಾದಕ್ಕೆ ಕಾರಣಬಹುದು. ನೇಮಕಾತಿ ಪ್ರಶ್ನಿಸಿ ಜನ ಮತ್ತೆ ಹೈಕೋರ್ಟ್‌ಗೆ ಬರುವಂತಾಗಬಾರದು. ಆದ್ದರಿಂದ ಹೈಕೋರ್ಟ್ ಆದೇಶದಂತೆ ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಸಲಾಗಿದೆಯೇ ಅಥವಾ ಇಲ್ಲವೇ ಎಂಬುದು ಪರಿಶೀಲಿಸಬೇಕಿದೆ. ಆದ್ದರಿಂದ ನೇಮಕಾತಿಗೆ ಸಂಬಂಧಿಸಿದ ದಾಖಲೆಗಳನ್ನು ಕೋರ್ಟ್‌ಗೆ ಸಲ್ಲಿಸಿ ಎಂದು ಸೂಚಿಸಿ ವಿಚಾರಣೆಯನ್ನು ಮಾ.16ಕ್ಕೆ ಮುಂದೂಡಿತು.

ಕೆಎಸ್‌ಪಿಸಿಬಿ ಅಧ್ಯಕ್ಷರ ನೇಮಕ ಸಂಬಂಧ ಮಾರ್ಗಸೂಚಿ ರಚನೆ ಮಾಡಿ 2020ರ ಜೂನ್ 19ರಂದು ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಆದರೆ, ಈ ಮಾರ್ಗಸೂಚಿಗಳು ಜಲ (ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ) ಕಾಯ್ದೆ ಸೆಕ್ಷನ್ 4(2) ಮತ್ತು ಸುಪ್ರೀಂ ಕೋರ್ಟ್ ನಿರ್ದೇಶನಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದರು.

ಅಲ್ಲದೇ, ಕೆಎಸ್‌ಪಿಸಿಬಿ ಅಧ್ಯಕ್ಷರನ್ನಾಗಿ ಎಂ. ಸುಧೀಂದ್ರರಾವ್ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ 2019ರ ಡಿ.30ರಂದು ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ವಕೀಲ ಎಸ್.ಉಮಾಪತಿ ಮತ್ತೊಂದು ಪಿಐಎಲ್ ಅರ್ಜಿ ಸಲ್ಲಿಸಿದ್ದರು. ತದನಂತರ ಸುಧೀಂದ್ರ ರಾವ್ ರಾಜೀನಾಮೆ ನೀಡಿದ್ದರು. ಸದ್ಯ ಅಧ್ಯಕ್ಷರ ಹುದ್ದೆ ತೆರವಾಗಿದ್ದು, ಪ್ರಭಾರಿಯಾಗಿ ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆ ನಿರ್ವಹಿಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.