ETV Bharat / city

ಸರ್ಕಾರಿ ಆಸ್ಪತ್ರೆಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಹೈಕೋರ್ಟ್ ನಿರ್ದೇಶನ

author img

By

Published : Dec 9, 2021, 8:04 AM IST

ರಾಜ್ಯದ ಪ್ರತಿ ಗ್ರಾಮ ಪಂಚಾಯತಿಯಲ್ಲೂ ಸರ್ಕಾರಿ ಆಸ್ಪತ್ರೆ ಆರಂಭಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬೀದರ್​ನ ಗುರುನಾಥ ವದ್ದೆ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ನಿನ್ನೆ ವಿಚಾರಣೆ ನಡೆಸಿತು.

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ರಾಜ್ಯದ ಪ್ರತಿ ಗ್ರಾಮ ಪಂಚಾಯತಿಯಲ್ಲೂ ಸರ್ಕಾರಿ ಆಸ್ಪತ್ರೆ ಆರಂಭಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬೀದರ್​ನ ಗುರುನಾಥ ವದ್ದೆ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ, ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.

ಹಿಂದಿನ ವಿಚಾರಣೆ ವೇಳೆ ಸರ್ಕಾರ, ರಾಜ್ಯದಲ್ಲಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಒಟ್ಟು 2,537 ಸರ್ಕಾರಿ ಆಸ್ಪತ್ರೆಗಳಿವೆ ಎಂದು ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್, ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ದಿಢೀರ್ ಭೇಟಿ ನೀಡಿ, ಅಲ್ಲಿರುವ ಸೌಕರ್ಯ ಪರಿಶೀಲಿಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿತ್ತು.

ಅದರಂತೆ ರಾಜ್ಯದ ವಿವಿಧ ಪ್ರಾಥಮಿಕ ಮತ್ತು ಜಿಲ್ಲಾ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ್ದ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರು, ಅಲ್ಲಿನ ಸೌಕರ್ಯ ಪರಿಶೀಲಿಸಿ ವರದಿ ಸಲ್ಲಿಸಿದ್ದಾರೆ. ರಾಜ್ಯದ ಅನೇಕ ಆರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯಗಳು ಇಲ್ಲ. ಕೆಲ ಕೇಂದ್ರಗಳಲ್ಲಿ ಪರಿಸ್ಥಿತಿ ತೀರಾ ಕೆಟ್ಟದಾಗಿದೆ ಎಂದು ಕಾನೂನು ಸೇವೆಗಳ ಪ್ರಾಧಿಕಾರ ವರದಿಯಲ್ಲಿ ತಿಳಿಸಿದೆ. ಅಲ್ಲದೇ, ಆರೋಗ್ಯ ಕೇಂದ್ರಗಳ ಸ್ಥಿತಿ ಸುಧಾರಣೆಗೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಶಿಫಾರಸು ಮಾಡಿದೆ. ಅದರಂತೆ ಕ್ರಮ ಕೈಗೊಳ್ಳಿ ಎಂದು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.