ETV Bharat / city

ಇನ್ನು ಮುಂದೆ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಆನ್‌ಲೈನ್‌ ಹೆಸರು ನೋಂದಣಿ ವ್ಯವಸ್ಥೆ : ಸಚಿವ ಡಾ ಕೆ ಸುಧಾಕರ್‌

author img

By

Published : Aug 22, 2022, 10:46 PM IST

ವೈದ್ಯರ ಆಪಾಯಿಂಟ್‌ಮೆಂಟ್‌ ಸಮಯ, ಯಾವ ವೈದ್ಯರು ಎಂಬಿತ್ಯಾದಿ ಮಾಹಿತಿಗಳನ್ನು ಮೊಬೈಲ್‌ಗೆ ಸಂದೇಶ ಕಳುಹಿಸುವ ವ್ಯವಸ್ಥೆ ತರಲಾಗುತ್ತಿದೆ ಎಂದು ಸಚಿವ ಡಾ ಕೆ ಸುಧಾಕರ್‌ ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಭೇಟಿಯ ವೇಳೆ ತಿಳಿಸಿದರು.

ಸಚಿವ ಡಾ ಕೆ ಸುಧಾಕರ್‌
Online Name Registration

ಬೆಂಗಳೂರು : ಜಯನಗರ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳು ಹಾಗೂ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಒಂದು ತಿಂಗಳೊಳಗೆ ಡಿಜಿಟಲ್‌ ಹೆಸರು ನೋಂದಣಿ ಹಾಗೂ ಡಿಜಿಟಲ್‌ ಪಾವತಿ ವ್ಯವಸ್ಥೆ ತರಲಾಗುವುದು. ಬಳಿಕ ತಾಲೂಕು ಆಸ್ಪತ್ರೆಗಳಲ್ಲೂ ಇದೇ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್‌ ತಿಳಿಸಿದ್ದಾರೆ.

ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಡಾ ಕೆ ಸುಧಾಕರ್‌, ರೋಗಿಗಳನ್ನು ಮಾತನಾಡಿಸಿ ಚಿಕಿತ್ಸೆಯ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಬಳಿಕ ಆಸ್ಪತ್ರೆ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಇದೇ ವೇಳೆ ಆಸ್ಪತ್ರೆ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ ಒದಗಿಸುವುದಾಗಿ ತಿಳಿಸಿದರು.

Online Name Registration System in District Hospitals
ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಡಾ ಕೆ ಸುಧಾಕರ್‌ ಭೇಟಿ

ನಂತರ ಮಾತನಾಡಿದ ಸಚಿವರು, ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಜನದಟ್ಟಣೆ ಕಡಿಮೆ ಮಾಡಲು, ವೈದ್ಯರ ಭೇಟಿಗೆ ಆನ್‌ಲೈನ್‌ನಲ್ಲಿ ಅಥವಾ ಮೊಬೈಲ್‌ ಸಂದೇಶ ಮೂಲಕ ಸಮಯ ನಿಗದಿ ಮಾಡಿಕೊಳ್ಳುವ ವ್ಯವಸ್ಥೆ ತರಲು ಸೂಚಿಸಲಾಗಿದೆ. ಆಸ್ಪತ್ರೆಯಲ್ಲಿ ಜನರ ಉದ್ದದ ಸಾಲು ಕಡಿಮೆ ಮಾಡಲು ಈ ಕ್ರಮ ವಹಿಸಲಾಗುತ್ತಿದೆ ಎಂದರು.

ವೈದ್ಯರ ಆಪಾಯಿಂಟ್‌ಮೆಂಟ್‌ ಸಮಯ, ಯಾವ ವೈದ್ಯರು ಎಂಬಿತ್ಯಾದಿ ಮಾಹಿತಿಗಳನ್ನು ಮೊಬೈಲ್‌ಗೆ ಸಂದೇಶ ಕಳುಹಿಸುವ ವ್ಯವಸ್ಥೆ ತರಲಾಗುತ್ತಿದೆ. ಆಸ್ಪತ್ರೆಗೆ ಯಾರೂ ಬಂದು ಕಾಯುವ ಅಗತ್ಯವಿಲ್ಲ. ಹಾಗೆಯೇ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಜನರು ಬರುವ ಮುನ್ನವೇ ಆನ್‌ಲೈನ್‌ ನಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಹಾಗೂ ಡಿಜಿಟಲ್‌ ಪಾವತಿ ಮಾಡುವ ವ್ಯವಸ್ಥೆ ತರಲಾಗುವುದು ಎಂದು ಹೇಳಿದರು.

ಜಯನಗರ ಸರ್ಕಾರಿ ಆಸ್ಪತ್ರೆ ಎನ್‌ಕ್ಯೂಎಸ್‌ ಗುಣಮಟ್ಟವನ್ನು ಹೊಂದುವಂತೆ ಕ್ರಮ ವಹಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಮೂಲಕ ಸರ್ಕಾರಿ ಸೇವೆಯ ಗುಣಮಟ್ಟವನ್ನು ಹೆಚ್ಚಿಸಬೇಕಿದೆ. ಈಗ ಪರಿಶೀಲನೆ ನಡೆಸಿದ ಬಳಿಕವೂ ಮತ್ತೊಮ್ಮೆ ಬಂದು ಪರಿಶೀಲನೆ ನಡೆಸಿ ಗುರಿ ತಲುಪಲಾಗಿದೆಯೇ ಎಂದು ಗಮನಿಸಲಾಗುವುದು ಎಂದರು.

51 ಹಾಸಿಗೆಗಳ ಐಸಿಯು ಇಲ್ಲಿದೆ. ಕೋವಿಡ್‌ ಬಳಿಕ ಇಲ್ಲಿ ಹಾಸಿಗೆಗಳ ಸಂಖ್ಯೆ ಹೆಚ್ಚಿಸಲಾಗಿದೆ. ಇದಕ್ಕೆ ಪೂರಕವಾಗಿ ಅಗತ್ಯ ಸಿಬ್ಬಂದಿಯನ್ನು ನೀಡಲಾಗುವುದು. ಕಾಯಂ ಸಿಬ್ಬಂದಿ ನೇಮಕಕ್ಕಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ನೀಡಲಾಗುವುದು. ನಾಲ್ಕು ಆರ್ಥೊಪೆಡಿಕ್‌ ತಜ್ಞರು ಈ ಆಸ್ಪತ್ರೆಯಲ್ಲಿದ್ದರೂ 40 ಪ್ರೊಸೀಜರ್‌ ಮಾತ್ರ ನಡೆಯುತ್ತಿದೆ. ಈ ಸಂಖ್ಯೆಯನ್ನು 100 ಕ್ಕೆ ಏರಿಸಿಕೊಳ್ಳಬೇಕು. ಹಾಗೆಯೇ ಸಭೆ ನಡೆಸಿ ವಿವಿಧ ವಿಭಾಗಗಳ ನಡುವೆ ಸಮನ್ವಯತೆ ತರಬೇಕು ಎಂದು ಸೂಚಿಸಲಾಗಿದೆ ಎಂದರು.

ಗುಣಮಟ್ಟದ ಚಿಕಿತ್ಸೆ, 5 ಕೋಟಿ ರೂ. ಅನುದಾನ : ಜಯನಗರ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಬಗ್ಗೆ ರೋಗಿಗಳನ್ನು ಮಾತನಾಡಿಸಿದ್ದು, ಒಬ್ಬರು ಕೂಡ ಗುಣಮಟ್ಟದಲ್ಲಿ ಲೋಪ ಆಗಿದೆ ಎಂದು ಹೇಳಿಲ್ಲ. ಐದು ವರ್ಷದಿಂದ ಡಯಾಲಿಸಿಸ್‌ ಮಾಡಿಸಿಕೊಳ್ಳುತ್ತಿರುವ ರೋಗಿಯೊಬ್ಬರು, ಯಾವುದೇ ಹಣ ನೀಡದೆ ಚಿಕಿತ್ಸೆ ಪಡೆಯುತ್ತಿದ್ದೇನೆ ಹಾಗೂ ಆರೋಗ್ಯವಾಗಿದ್ದೇನೆ ಎಂದು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಚಾವಣಿ ಸೇರಿದಂತೆ ಕೆಲವೆಡೆ ದುರಸ್ತಿ ಕಾರ್ಯಗಳು ನಡೆಯಬೇಕಿದೆ. ಸುಮಾರು 5 ಕೋಟಿ ರೂ.ನಷ್ಟು ಅನುದಾನ ಬೇಕಿದ್ದು, ಅದನ್ನು ನೀಡಲಾಗುವುದು ಎಂದರು.

ರೋಗಿಗಳಿಗೆ ಚಿಕಿತ್ಸೆ ವಿಚಾರದಲ್ಲಿ ಸಮಾಧಾನ ಇದೆ ಎಂದು ತಿಳಿದುಬಂದಿದೆ. ಪ್ರಸೂತಿ ವಿಭಾಗದಲ್ಲಿ ಕೆಲ ದೂರುಗಳಿದ್ದು, ಅದಕ್ಕಾಗಿ ಸ್ಪಷ್ಟ ಸೂಚನೆ ನೀಡಲಾಗಿದೆ. ಪ್ರತಿ ವಿಭಾಗಗಳ ಮುಖ್ಯಸ್ಥರಿಗೆ ನಿಗದಿತ ಗುರಿ ನೀಡಲಾಗಿದೆ. ಜನರು ಖಾಸಗಿ ಆಸ್ಪತ್ರೆಗೆ ಹೋಗದೆ ಇಲ್ಲಿಯೇ ಬರುವಂತೆ ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ ಎಂದು ಹೇಳಿದರು.

ಈ ಹಿಂದೆ ಲಂಚ ಪಡೆದ ಹೊರಗುತ್ತಿಗೆ ವೈದ್ಯರೊಬ್ಬರ ವಿರುದ್ಧ ತನಿಖೆ ನಡೆಯುತ್ತಿದೆ. ಈಗ ತಕ್ಷಣ ಕೆಲಸದಿಂದ ತೆಗೆದುಹಾಕಬೇಕು ಎಂದು ಸೂಚಿಸಲಾಗಿದೆ. ತನಿಖಾ ವರದಿ ಬರುವ ಮುನ್ನವೇ ಅವರನ್ನು ಕೆಲಸದಿಂದ ತೆಗೆದುಹಾಕಲು ತಿಳಿಸಲಾಗಿದೆ. ರಾಜ್ಯದ ಬೇರೆ ಬೇರೆ ಆಸ್ಪತ್ರೆಗಳಿಗೂ ಭೇಟಿ ನೀಡಲಾಗುವುದು. ನಮ್ಮ ಸರ್ಕಾರ ಮಾತೃ ಹೃದಯ ಹೊಂದಿದ್ದು, ಅದಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸಲಾಗುವುದು ಎಂದರು.

ಹಣ ವಾಪಸ್‌ ಕೊಡಿಸುವವರೆಗೂ ಬಿಡುವುದಿಲ್ಲ : ಕೋವಿಡ್‌ ರೋಗಿಗಳಿಂದ ಹಣ ಪಡೆದು ಬಳಿಕ ಸರ್ಕಾರದಿಂದ ಹಣ ಪಡೆದ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್‌ ನೀಡಿ, ಹಣವನ್ನು ರೋಗಿಗಳಿಗೆ ಹಿಂದಿರುಗಿಸಲಾಗಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ಸರ್ಕಾರ ಈ ರೀತಿಯ ಕ್ರಮ ವಹಿಸಿ, 1.58 ಕೋಟಿ ರೂ. ಹಣವನ್ನು ರೋಗಿಗಳ ಕುಟುಂಬಕ್ಕೆ ವಾಪಸ್‌ ಕೊಡಿಸಿದೆ. ಇನ್ನು ಉಳಿದ ಮೊತ್ತವನ್ನು ಕೂಡ ವಾಪಸ್‌ ಕೊಡಿಸಲಾಗುವುದು. ಮೊತ್ತವನ್ನು ವಾಪಸ್‌ ಕೊಡಿಸುವವರೆಗೂ ಸರ್ಕಾರ ಸುಮ್ಮನಿರಲ್ಲ ಎಂದು ಸ್ಪಷ್ಟಪಡಿಸಿದರು.

ಜಯನಗರ ಶಾಸಕಿ ಸೌಮ್ಯ ರೆಡ್ಡಿ, ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್‌ ಹಾಜರಿದ್ದರು.

ಇದನ್ನೂ ಓದಿ : ರಾಜ್ಯದಲ್ಲಿ ಇಂದು 1268 ಮಂದಿಗೆ ಕೋವಿಡ್ ದೃಢ.. ಸೋಂಕಿಗೆ ಆರು ಮಂದಿ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.