ETV Bharat / sitara

13ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಗ್ರೀನ್​ ಸಿಗ್ನಲ್​ ನೀಡಿದ ಸಿಎಂ

author img

By

Published : Dec 3, 2020, 12:36 PM IST

2021ರ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದೆ. ಈ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿಗಳು, ಚಿತ್ರೋತ್ಸವಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಹೇಳಿದ್ದಾರೆ.

13th Bangalore International Film Festival
13ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಗ್ರೀನ್​ ಸಿಗ್ನಲ್​ ನೀಡಿದ ಸಿಎಂ

ಕೊರೊನಾ ಭಯದಿಂದ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುವುದಕ್ಕೆ ಹೆದರುತ್ತಿದ್ದು, ಥಿಯೇಟರ್​ ಓನರ್​ಗಳು ಕಂಗಾಲಾಗಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಚಿತ್ರೋತ್ಸವಗಳು ಮೂಲೆಗುಂಪಾಗಿವೆ. ಗೋವಾದಲ್ಲಿ ಕಳೆದ ತಿಂಗಳು ನಡೆಯಬೇಕಿದ್ದ ಅಂತಾರಾಷ್ಟ್ರೀಯ ಚಿತ್ರೋತ್ಸವ ಸೇರಿದಂತೆ ಹಲವು ಚಿತ್ರೋತ್ಸವಗಳನ್ನು ಮುಂದೂಡಲಾಗಿದೆ. ಕೆಲವು ಚಿತ್ರೋತ್ಸವಗಳನ್ನು ಆನ್​ಲೈನ್​ ಮೂಲಕ ನಡೆಸಲಾಗುತ್ತಿದೆ.

ಹೀಗಿರುವಾಗ ಫೆಬ್ರವರಿಯಲ್ಲಿ ನಡೆಯಬೇಕಿದ್ದ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಗತಿ ಏನು ಎಂಬುದು ಹಲವರ ಪ್ರಶ್ನೆಯಾಗಿತ್ತು. ಈ ಸಂಬಂಧ 2021ರ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ ಚಿತ್ರೋತ್ಸವವನ್ನು ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವು ಕಳೆದ 12 ವರ್ಷಗಳಿಂದ ಸತತವಾಗಿ ನಡೆಯುತ್ತಿದೆ. ವಿಶ್ವದಲ್ಲಿ 5,000 ಸ್ಥಳಗಳಲ್ಲಿ ಚಲನಚಿತ್ರೋತ್ಸವಗಳು ನಡೆಯುತ್ತಿದ್ದು, ಅದರಲ್ಲಿ ಕೇವಲ 45 ಚಲನಚಿತ್ರೋತ್ಸವಗಳಿಗೆ ಅಂತಾರಾಷ್ಟ್ರೀಯ ಮಾನ್ಯತೆ ದೊರೆತಿದೆ. ಇದೀಗ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೂ ಅಂತಾರಾಷ್ಟ್ರೀಯ ಮಾನ್ಯತೆ ದೊರೆಯುವ ಲಕ್ಷಣಗಳು ಗೋಚರಿಸುತ್ತಿವೆ. ಒಂದು ವೇಳೆ ಮಾನ್ಯತೆ ದೊರೆತಲ್ಲಿ ಇದು ವಿಶ್ವದಲ್ಲಿ 46ನೇ ಮಾನ್ಯತೆ ಪಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಎಂಬ ಹೆಗ್ಗಳಿಕೆಗೆ ಪಾತ್ರವಾಗುತ್ತದೆ.

ಆದ್ದರಿಂದ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಆಯೋಜಿಸಲು ಸಮ್ಮತಿ ನೀಡುವಂತೆಯೂ ಹಾಗೂ ಅದಕ್ಕೆ ಅಗತ್ಯ ಅನುದಾನವನ್ನು ದೊರಕಿಸಿಕೊಡುವಂತೆಯೂ ನಿಯೋಗವು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು. ಈ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿಗಳು, ಚಿತ್ರೋತ್ಸವಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಹೇಳಿದ್ದಾರೆ. ಹೀಗಾಗಿ ಈ ಬಾರಿಯೂ ಯಾವುದೇ ಅಡೆ-ತಡೆಯಿಲ್ಲದೆ ಚಿತ್ರೋತ್ಸವ ನಡೆಯುತ್ತದೆ ಎಂಬ ವಿಶ್ವಾಸ ಸಿನಿಮಾಸಕ್ತರಲ್ಲಿ ಮೂಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.