ETV Bharat / state

ಸರ್ಕಾರ ತಮಿಳುನಾಡಿಗೆ ನೀರು ಬಿಡುವ ನಿರ್ಧಾರ ಮಾಡಿ ರಾಜ್ಯದ ಜನತೆಗೆ ದೋಖಾ ಮಾಡಿದೆ: ಬಸವರಾಜ ಬೊಮ್ಮಾಯಿ

author img

By ETV Bharat Karnataka Team

Published : Sep 16, 2023, 6:14 PM IST

basavaraja-bommai-reaction-on-congress-government
ಸರ್ಕಾರ ತಮಿಳುನಾಡಿಗೆ ನೀರು ಬಿಡುವ ನಿರ್ಧಾರ ಮಾಡಿ ರಾಜ್ಯದ ಜನತೆಗೆ ದೋಖಾ ಮಾಡಿದೆ: ಬಸವರಾಜ ಬೊಮ್ಮಾಯಿ

ಸರ್ಕಾರ ರಾಜ್ಯದ ಜನತೆಗೆ ದ್ರೋಹ ಬಗೆದು ತಮಿಳುನಾಡಿಗೆ ನೀರು ಬಿಡುತ್ತಿರುವುದು ಕರಾಳ ನಿರ್ಣಯ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಬೆಂಗಳೂರು: ತಮಿಳುನಾಡಿನ ಪ್ರಭಾವ ರಾಜ್ಯ ಸರ್ಕಾರದ ಮೇಲೆ ವಿಪರೀತ ಇದ್ದ ಹಾಗೆ ಇದೆ. ಸುಪ್ರೀಂ ಕೊರ್ಟ್ ಆದೇಶ ಆಗಿಲ್ಲ. ಸಿಡಬ್ಲ್ಯೂಎಂಎ ಸಭೆ ಆಗಿಲ್ಲ. ಆದರೂ ಕಾಂಗ್ರೆಸ್ ಸರ್ಕಾರ ನೀರು ಬಿಡುವ ನಿರ್ಧಾರ ಮಾಡಿ ರಾಜ್ಯದ ಜನತೆಗೆ ದೋಖಾ ಮಾಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದರ ವಿರುದ್ಧ ನಮ್ಮ ಪಕ್ಷ ತೀವ್ರ ವಾದ ಪ್ರತಿಭಟನೆ ಹಮ್ಮಿಕೊಳ್ಳುತ್ತದೆ ಎಂದು ಹೇಳಿದರು.

ಮೊದಲು ನೀರು ಬಿಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಆದರೂ ನೀರು ಬಿಡುತ್ತಾರೆ. ನೀರು ಬಿಡಲು ತೀರ್ಮಾನ ಮಾಡುವುದಾದರೆ ಸರ್ವ ಪಕ್ಷದ ಸಭೆ ಕರೆಯುವ ಅಗತ್ಯ ಏನಿತ್ತು? ಎಂದು ಪ್ರಶ್ನಿಸಿದರು. ಸಿಎಂ ಸರ್ವ ಪಕ್ಷದ ಸಭೆ ಕರೆದು ನೀರು ಬಿಡುವುದಿಲ್ಲ ಅಂತ ಹೇಳುತ್ತಾರೆ. ಡಿಸಿಎಂ ನೀರು ಬಿಡುತ್ತಾರೆ. ಇದು ಊಸರವಳ್ಳಿ ಸರ್ಕಾರ. ಈ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಬಗೆದು ತಮಿಳುನಾಡಿಗೆ ನೀರು ಬಿಡುತ್ತಿರುವುದು ಕರಾಳ ನಿರ್ಣಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯವರಿಗೆ ಪ್ರಧಾನಿ ಭೇಟಿ ಮಾಡಿ ಮಾತನಾಡುವ ಧಮ್ ಇಲ್ಲ ಎಂಬ ಡಿಸಿಎಂ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಿಜವಾದ ತಾಕತ್ತು ಧಮ್ಮು ಇದ್ದಿದ್ದರೆ ನೀರು ಬಿಡುತ್ತಿರಲಿಲ್ಲ. ನೀರು ಬಿಟ್ಟು ತಾಕತ್ತು ಧಮ್ಮಿನ ಬಗ್ಗೆ ಮಾತನಾಡುತ್ತಾರೆ‌. ನಿಮಗೆ ತಾಕತ್ತು, ಧಮ್ ಇದ್ದರೆ ಸುಪ್ರೀಂಕೋರ್ಟ್ ನಲ್ಲಿ ವಾದ ಮಾಡಿ ರಾಜ್ಯದ ಹಿತ ಕಾಪಾಡಿ ಎಂದು ತಿರುಗೇಟು ನೀಡಿದರು. ಯಾವುದೇ ರಾಜ್ಯದ ಎಂಪಿಗಳು ಪ್ರಧಾನಿಯನ್ನು ಭೇಟಿ ಮಾಡಿದರೂ ಏನೂ ಪ್ರಯೋಜನ ಇಲ್ಲ. ಇವರಿಗೆ ಓಟ್ ಹಾಕಿದ ಕಾವೇರಿ ಕೊಳ್ಳದ ಮಕ್ಕಳು ಪಶ್ಚಾತಾಪ ಪಡುತ್ತಿದ್ದಾರೆ‌. ಇದಕ್ಕೆ ಸುಪ್ರೀಂ ಮತ್ತು ತಮಿಳುನಾಡಿನ ಸಿಎಂ ಜೊತೆ ಮಾತುಕತೆ ಮಾಡುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.

ದೇವಸ್ಥಾನದಲ್ಲಿ ವಿಶೇಷ ಪೂಜೆ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಂಗಳೂರಿನ ಬಾಲಬ್ರೂಯಿ ಅತಿಥಿ ಗೃಹದ ಬಳಿ ಇರುವ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಜನರ ಹಿತಕ್ಕಿಂತ ರಾಜಕೀಯ ಮೈತ್ರಿ ಮುಖ್ಯವಾಗಿದೆ: ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಕಾವೇರಿ ಭಾಗದ ರೈತರಿಗೆ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ಕೊಡಿ - ಬೊಮ್ಮಾಯಿ: ರಾಜ್ಯ ಬಿಜೆಪಿ ಕಚೇರಿಯಲ್ಲಿ ನೆನ್ನೆ(ಶುಕ್ರವಾರ) ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಕಾವೇರಿ ಜಲಾನಯನ ಪ್ರದೇಶದ ಬೆಳೆ ಹಾನಿಗೆ ಪ್ರತಿ ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ಕೊಡಬೇಕು. ಬಿ. ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಕಾವೇರಿ ಕೊಳ್ಳದ ಎಲ್ಲ ಜಿಲ್ಲೆಯ ಪ್ರಮುಖರ ಸಭೆ ನಡೆಸಿದ್ದೇವೆ. ಕಾವೇರಿ ವಿಚಾರದಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ನೀರಿನ ನಿರ್ವಹಣೆ ಸಮರ್ಪಕವಾಗಿ ಮಾಡಿಲ್ಲ. ತಮಿಳುನಾಡಿನವರು ಅಕ್ರಮವಾಗಿ ಕುರುವೈ ಬೆಳೆ ಬೆಳೆದಿದ್ದಾರೆ ಎಂದು ಹೇಳಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.