ETV Bharat / state

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ: ಕೇಂದ್ರಕ್ಕೆ ಕೃತಜ್ಞತೆ ಸಲ್ಲಿಸಿದ ಸಿಎಂ ಬೊಮ್ಮಾಯಿ, ಕಾರಜೋಳ

author img

By

Published : Feb 1, 2023, 1:57 PM IST

Updated : Feb 1, 2023, 2:33 PM IST

CM Bommai Karajola
ಕೇಂದ್ರಕ್ಕೆ ಕೃತಜ್ಞತೆ ಸಲ್ಲಿಸಿದ ಸಿಎಂ ಬೊಮ್ಮಾಯಿ, ಕಾರಜೋಳ

ಇಂದಿನ ಬಜೆಟ್​ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ಘೊಷಿಸಿರುವ ಹಿನ್ನೆಲೆ ಕೇಂದ್ರಕ್ಕೆ ಸಿಎಂ ಬೊಮ್ಮಾಯಿ ಹಾಗೂ ಸಚಿವ ಗೋವಿಂದ ಕಾರಜೋಳ ಕೃತಜ್ಞತೆ ಸಲ್ಲಿಸಿದ್ದಾರೆ.

ಕೇಂದ್ರಕ್ಕೆ ಕೃತಜ್ಞತೆ ಸಲ್ಲಿಸಿದ ಸಿಎಂ ಬೊಮ್ಮಾಯಿ, ಕಾರಜೋಳ

ಬೆಂಗಳೂರು: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಲ್ಲಿ ಒಂದಾಗಿರುವ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳ ಅನುದಾನವನ್ನು ಕೇಂದ್ರದ ಬಜೆಟ್ ನಲ್ಲಿ ಘೋಷಣೆ ಮಾಡಿರುವುದಕ್ಕೆ ಕೇಂದ್ರ ಸರ್ಕಾರಕ್ಕೆ ರಾಜ್ಯದ ಜನತೆಯ ಪರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೃತಜ್ಞತೆ ಸಲ್ಲಿಸಿದ್ದಾರೆ.

ಕೇಂದ್ರದ ಬಜೆಟ್ ನಲ್ಲಿ ಅನುದಾನ ಘೋಷಣೆಯಾಗುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಟ್ವೀಟ್ ಮಾಡಿದ್ದು, ಈ ಸಾಲಿನ ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ರೂ 5,300 ಕೋಟಿ ಅನುದಾನ ಘೋಷಿಸಿದ ಹಣಕಾಸು ಸಚಿವ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಮಸ್ತ ಕರ್ನಾಟಕದ ಪರವಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಜೊತೆಗೆ ಇಂದು ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಶಿಡೇನೂರಿನಲ್ಲಿ ಮಾತನಾಡಿದ ಅವರು ಭದ್ರಾ ಮೇಲ್ದಂಡೆ ಯೋಜನೆಗೆ ಈ ಬಾರಿ ಬಜೆಟ್ ನಲ್ಲಿ 5,300 ಕೋಟಿ ಘೋಷಣೆ ಮಾಡಿರುವದಕ್ಕೆ ಸಂತಸ ವ್ಯಕ್ತಪಡಿಸಿದರು. ಬರಗಾಲ ಪೀಡಿತ ಬಿಸಿಲು ಪ್ರದೇಶದ ನಾಡಿಗೆ ನೀರಾವರಿಗೆ ಹಾಗೂ ಕುಡಿಯುವ ನೀರಿಗಾಗಿ ಅನುಕೂಲವಾಗಲಿದೆ. ಈ ಕುರಿತು ಮೊದಲೆ ಪ್ತಸ್ತಾವನೆ ಕಳಿಸಿದ್ದೆವು. ಇಷ್ಟು ದೊಡ್ಡ ಪ್ರಮಾಣದ ಅನುದಾನ ಘೋಷಣೆ ಮಾಡಿದ್ದು ಸಂತಸದ ಸಂಗತಿ. ಇದೊಂದು ಸ್ವಾಗತಾರ್ಹ ಎಂದು ನಾನು ಭಾವಿಸುತ್ತೇನೆ ಎಂದು ಬೊಮ್ಮಾಯಿ ತಿಳಿಸಿದರು.

ಜಲಸಂಪನ್ಮೂಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೂಡ ಕೇಂದ್ರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಸ್ವಾತಂತ್ರ್ಯಾ ನಂತರ ಭದ್ರಾ ಮೇಲ್ದಂಡೆ ಯೋಜನೆಯನ್ನು ಮೊಟ್ಟ ಮೊದಲ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡಿ 5,300 ಕೋಟಿ ಅನುದಾನ ಕೊಟ್ಟಿದೆ. ಈ ಅನುದಾನವನ್ನು ನಾವು ಬರಪೀಡಿತ ಜಿಲ್ಲೆಗಳಿಗೆ, ಬರಪೀಡಿತ ಪ್ರದೇಶದ ಕೃಷಿಕರಿಗೆ ಮತ್ತು ಕುಡಿಯುವ ನೀರಿಗೆ ಪರದಾಡುತ್ತಿರುವ ಜಿಲ್ಲೆಗಳಿಗೆ ಯೋಜನೆಯನ್ನು ಸಕಾಲದಲ್ಲಿ ಪೂರ್ಣಗೊಳಿಸಲು ಇದೊಂದು ದೊಡ್ಡ ಆರ್ಥಿಕ ನೆರವಾಗಿದೆ ಎಂದು ತಿಳಿಸಿದ್ದಾರೆ.

ದೇಶದ ಇತಿಹಾಸದಲ್ಲಿಯೇ ಯಾವ ರಾಜಕ್ಕೂ ಕೂಡ ರಾಷ್ಟ್ರೀಯ ಯೋಜನೆ ಎಂದು ಕೇಂದ್ರ ಸರ್ಕಾರ ಇಷ್ಟೊಂದು ದೊಡ್ಡ ಮೊತ್ತದ ಅನುದಾನವನ್ನು ಕೊಟ್ಟಿರಲಿಲ್ಲ ಹಾಗಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೂ ರಾಜ್ಯದ ಜನತೆಯ ಪರವಾಗಿ ವಿಶೇಷವಾದ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಭದ್ರಾ ಯೋಜನೆ ರಾಷ್ಟ್ರೀಯ ಯೋಜನೆ: ಇಂದಿನ ಕೇಂದ್ರ ಬಜೆಟ್​ನಲ್ಲಿ ನಿರೀಕ್ಷೆಯಂತೆ ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗಾಗಿ 5300 ಕೋಟಿ ಅನುದಾನದ ಘೋಷಣೆಯಾಗಿದೆ. ಕೆಂದ್ರವು ರಾಜ್ಯದ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಪರಿಗಣಿಸಿ ಅನುದಾನ ನೀಡಿರುವುದು ಎಲ್ಲರಿಗೂ ಸಂತಸ ತಂದಿದೆ. ಇನ್ನು ಲೆಕ್ಕಾಚಾರದ ಪ್ರಕಾರ ಭದ್ರಾ ಮೇಲ್ದಂಡೆ ಯೋಜನೆಗೆ ಒಟ್ಟು 23 ಸಾವಿರ ಕೋಟಿ ವೆಚ್ಚವಾಗಲಿದ್ದು, ಇದರಲ್ಲಿ 16 ಸಾವಿರ ಕೋಟಿ ವೆಚ್ಚದ ಕೆಲಸ ಬಾಕಿ ಇದೆ. ಬಾಕಿ ಇರುವ ವೆಚ್ಚದಲ್ಲಿ ಶೇಕಡ 60 ರಷ್ಟನ್ನು ಕೇಂದ್ರ ಸರ್ಕಾರ ನೀಡಲಿದೆ ಎಂಬ ನಿರೀಕ್ಷೆ ಇತ್ತು. ಇಂದು ಅದರಂತೆ ಘೋಷಣೆಯಾಗಿದೆ.

ಇದನ್ನೂ ಓದಿ: ಕೇಂದ್ರ ಬಜೆಟ್​ 2023: ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ

Last Updated :Feb 1, 2023, 2:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.