ETV Bharat / state

ಅಂಜನಾದ್ರಿ ಬೆಟ್ಟದ ಮೇಲೆ ಹೆಲಿಪ್ಯಾಡ್ ಸೇರಿ ಅಭಿವೃದ್ಧಿ ಕಾಮಗಾರಿ ಪ್ರಾರಂಭಕ್ಕೆ ಸಿಎಂ ಸೂಚನೆ

author img

By

Published : Jun 25, 2022, 6:47 PM IST

cm-bommai-notice-to-start-development-works-and-helipad-on-anjanadri-hill
ಅಂಜನಾದ್ರಿ ಬೆಟ್ಟದ ಮೇಲೆ ಹೆಲಿಪ್ಯಾಡ್ ಸೇರಿ ಅಭಿವೃದ್ಧಿ ಕಾಮಗಾರಿ ಪ್ರಾರಂಭಕ್ಕೆ ಸಿಎಂ ಸೂಚನೆ

ಬೆಂಗಳೂರಿನಲ್ಲಿ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಯೋಜನೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದರು. ಈ ವೇಳೆ ಅಂಜನಾದ್ರಿ ಬೆಟ್ಟದ ಮೇಲೆ ಹೆಲಿಪ್ಯಾಡ್ ನಿರ್ಮಿಸಿ ಹೆಲಿ ಟೂರಿಸಂ ಮುಖಾಂತರ ಈ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.

ಬೆಂಗಳೂರು: ಅಂಜನಾದ್ರಿ ಬೆಟ್ಟದ ಮೇಲೆ ಹೆಲಿಪ್ಯಾಡ್ ನಿರ್ಮಿಸಿ ಹೆಲಿ ಟೂರಿಸಂ ಮೂಲಕ ಕ್ಷೇತ್ರ ಅಭಿವೃದ್ಧಿ‌ಪಡಿಸಲು ನಿರ್ಧರಿಸಲಾಗಿದೆ. ಕೊಪ್ಪಳ ಜಿಲ್ಲೆಯ ಕಿಷ್ಕಿಂದೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಿ, ಕೆಲಸ ಪ್ರಾರಂಭಿಸುವಂತೆ ಸಿಎಂ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಯೋಜನೆ ಕುರಿತು ಕರೆಯಲಾಗಿದ್ದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು. ಅಂಜನಾದ್ರಿ ಬೆಟ್ಟದ ಮೇಲೆ ಹೆಲಿಪ್ಯಾಡ್ ನಿರ್ಮಿಸಿ ಹೆಲಿ ಟೂರಿಸಂ ಮುಖಾಂತರ ಈ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಾಗುತ್ತದೆ. ಮೂಲಸೌಕರ್ಯ ಕಲ್ಪಿಸಲು ನೀಲ ನಕ್ಷೆಯಂತೆ ರೈಲು ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತದೆ. ಈ ಯೋಜನೆಗಾಗಿ ಸುಮಾರು 60 ಎಕರೆ ಭೂಮಿ ಅಗತ್ಯವಿದ್ದು, ಇದರಲ್ಲಿ 58 ಎಕರೆ ಖಾಸಗಿ ಜಮೀನಾಗಿದೆ. ಇದನ್ನು ರೈತರ ಒಪ್ಪಿಗೆಯ ಮೇರೆಗೆ ಭೂಸ್ವಾಧೀನ ಪಡಿಸುವಂತೆ ಅಥವಾ ಕೆಐಎಡಿಬಿ ಮೂಲಕ ಖರೀದಿಸುವ ಮೂಲಕ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

cm-bommai-notice-to-start-development-works-and-helipad-on-anjanadri-hill
ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಯೋಜನೆ ಕುರಿತು ಕರೆಯಲಾಗಿದ್ದ ಸಭೆ

ಯೋಜನೆಯ ಮೊದಲ ಹಂತದಲ್ಲಿ ಅಂಜನಾದ್ರಿಯ ಸಂಪರ್ಕ ರಸ್ತೆ ಅಭಿವೃದ್ಧಿ, ಪರ್ಯಾಯ ರಸ್ತೆಗಳನ್ನು ಗುರುತಿಸಿ ಅಭಿವೃದ್ಧಿ ಪಡಿಸಬೇಕು. ರಾಷ್ಟ್ರೀಯ ಹೆದ್ದಾರಿಯಿಂದ ಗಂಗಾವತಿ ವರೆಗಿನ ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಲೋಕೋಪಯೋಗಿ ಇಲಾಖೆಯ ಮೂಲಕ ಕ್ರಮ ವಹಿಸುವುದಾಗಿ ತಿಳಿಸಿದರು. ಇದಕ್ಕೆ ವಿಸ್ತೃತ ಯೋಜನಾ ವರದಿಯನ್ನು ಕೂಡಲೇ ಸಿದ್ಧಪಡಿಸುವಂತೆ ಸೂಚಿಸಿದರು.

ಇದರೊಂದಿಗೆ ಬೆಟ್ಟದ ಬುಡದಲ್ಲಿ ಯಾತ್ರಿಕರಿಗೆ ಪಾರ್ಕಿಂಗ್ ಮತ್ತಿತರ ಮೂಲಸೌಕರ್ಯ ಒದಗಿಸುವ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಂತೆ ಸೂಚಿಸಿದರು.ಯೋಜನೆಯ ಆರ್ಥಿಕ ಅನುಮೋದನೆಗಾಗಿ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಬೊಮ್ಮಾಯಿ ಸೂಚಿಸಿದರು.

ರೋಪ್‍ ವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ: ಅಂಜನಾದ್ರಿ ಬೆಟ್ಟಕ್ಕೆ 430 ಮೀಟರ್ ರೋಪ್ ವೇ ನಿರ್ಮಿಸಲು ಪ್ರಸ್ತಾಪಿಸಲಾಗಿದ್ದು, ಈ ಯೋಜನೆಯ ಟೆಂಡರ್ ಪ್ರಕ್ರಿಯೆಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸುವಂತೆ ಪ್ರವಾಸೋದ್ಯಮ ಇಲಾಖೆಗೆ ಸೂಚಿಸಿದರು.

ಈ ಯೋಜನೆಯಡಿ ರೋಪ್‍ ವೇ ಬೇಸ್‍ನಲ್ಲಿ ಪ್ರವಾಸಿಗರಿಗೆ ಅಗತ್ಯ ಸೌಕರ್ಯ, ಸರದಿಯಲ್ಲಿ ಕಾಯುವ ಸಂದರ್ಭ ಬಂದಾಗ ಅಗತ್ಯ ಮೂಲಸೌಕರ್ಯಗಳು, ಪಾರ್ಕಿಂಗ್ ಸೌಲಭ್ಯಗಳನ್ನು ಕಲ್ಪಿಸಲು ಸೂಚಿಸಿದರು. ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಬೊಮ್ಮಾಯಿ ಸೂಚಿಸಿದರು.

ಇದನ್ನೂ ಓದಿ: ಪುಸ್ತಕ ಹರಿದು ಹಾಕುವ ಸಂಸ್ಕೃತಿಯನ್ನು ಡಿ.ಕೆ. ಶಿವಕುಮಾರ್ ಹುಟ್ಟುಹಾಕಿದ್ದಾರೆ : ಸಚಿವ ನಾಗೇಶ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.