ETV Bharat / state

"ಕ್ಯಾ. ಅರ್ಜುನನ ಸ್ಮಾರಕ ನಿರ್ಮಾಣ"; ಸಾವಿನ ಬಗ್ಗೆ ತನಿಖೆಗೆ ಸೂಚನೆ : ಸಿಎಂ ಸಿದ್ದರಾಮಯ್ಯ

author img

By ETV Bharat Karnataka Team

Published : Dec 6, 2023, 1:11 PM IST

ಕಾಡಾನೆ ಹಿಡಿಯುವ ಕಾರ್ಯಚರಣೆ ವೇಳೆ ಒಂಟಿ ಸಲಗದ ದಾಳಿಗೆ ಸಾವನ್ನಪ್ಪಿದ ಕ್ಯಾಪ್ಟನ್​ ಅರ್ಜುನನ ಸ್ಮಾರಕವನ್ನು ಪ್ರಾಣ ಕಳೆದುಕೊಂಡ ಸ್ಥಳದಲ್ಲಿಯೇ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

cmcmc
ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಸಿಎಂ ಸೂಚನೆ

ಬೆಂಗಳೂರು: 8 ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಾವಿಗೀಡಾಗಿರುವುದು ದುರದೃಷ್ಟಕರ. ಘಟನೆ ಬಗ್ಗೆ ಸಂಪೂರ್ಣ ತನಿಖೆ ಮಾಡುವಂತೆ ಸೂಚಿಸಲಾಗಿದೆ. ಅರ್ಜುನ ಆನೆ ಪ್ರಾಣ ಕಳೆದುಕೊಂಡ ಸ್ಥಳದಲ್ಲಿಯೇ ಸ್ಮಾರಕ ನಿರ್ಮಾಣ ಮಾಡಲಾಗುವುದು ಹಾಗೂ ಹೆಗ್ಗಡದೇವನಕೋಟೆಯಲ್ಲಿಯೂ ಸ್ಮಾರಕವಾಗಬೇಕೆಂದು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಡಾ. ಬಿ.ಆರ್. ಅಂಬೇಡ್ಕರ್ ಅವರ 67 ನೇ ಮಹಾಪರಿನಿರ್ವಾಣದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲರೂ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದರು.

cmc
ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಪ್ರತಿಯೊಬ್ಬರೂ ಸಂವಿಧಾನವನ್ನು ಅರ್ಥ ಮಾಡಿಕೊಂಡರೆ, ಅದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವ. ಅಂಬೇಡ್ಕರ್ ಅವರು ಇನ್ನೂ ಬದುಕಿರಬೇಕಿತ್ತು. ಅವರು ಇದ್ದಿದ್ದರೆ ಸಮಾನತೆಯ ಪರವಾಗಿ ಇನ್ನಷ್ಟು ಹೋರಾಟಗಳಾಗುತ್ತಿತ್ತು. ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತಿತ್ತು. ಸಂವಿಧಾನದ ಕರ್ತೃ ಅಂಬೇಡ್ಕರ್ ಅವರು ದೇಶದ ಸಂವಿಧಾನವನ್ನು ಬಹಳ ಶ್ರಮ ವಹಿಸಿ ವಿವಿಧ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತದ ವ್ಯವಸ್ಥೆಗೆ ಎಂಥ ಸಂವಿಧಾನ ಬೇಕು ಎಂದು ಚಿಂತಿಸಿ ಸಂವಿಧಾನ ನೀಡಿದ್ದಾರೆ ಎಂದು ಹೇಳಿದರು.

ಸಾಮಾಜಿಕ ನ್ಯಾಯದ ಹಕ್ಕು, ಅಸಮಾನತೆಯನ್ನು ತೊಡೆದುಹಾಕುವ ಅಂಶ ಜಗತ್ತಿನ ಯಾವ ಸಂವಿಧಾನದಲ್ಲಿಯೂ ನೋಡಲು ಸಾಧ್ಯವಿಲ್ಲ. ಎಲ್ಲಾ ಜಾತಿ, ವರ್ಗ ಮತ್ತು ಬಡವರಿಗೆ ನ್ಯಾಯ ದೊರೆತಿದ್ದರೆ, ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರಾಗಿದ್ದರೆ ಅದಕ್ಕೆ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸೇರಿಸಿದ ಅಂಶಗಳೇ ಕಾರಣ. ಸಮಾಜದ ಕಟ್ಟ ಕಡೆಯ ಮನುಷ್ಯನಿಗೂ ಶ್ರೀಮಂತರಿಗೂ ಒಂದೇ ಕಾನೂನು. ಅದಕ್ಕೆ 14 ನೇ ಪರಿಚ್ಛೇದದಲ್ಲಿ ಕಾನೂನಿನ ಮುಂದೆ ಎಲ್ಲರೂ ಸಮಾನರು, ಎಲ್ಲರಿಗೂ ಕಾನೂನಿನ ರಕ್ಷಣೆಯಿದೆ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಸ್ಮರಿಸಿದರು.

cmcm
ಡಾ. ಬಿ.ಆರ್.ಅಂಬೇಡ್ಕರ್ ಅವರ 67 ನೇ ಮಹಾಪರಿನಿರ್ವಾಣ

ಒಂದು ದೇಶದ ಆಸ್ತಿ ಸಮಾನವಾಗಿ ಹಂಚಿಕೆಯಾಗಬೇಕು. ಬಲಾಢ್ಯರ ಕೈಯಲ್ಲಿ ಅಧಿಕಾರವಿದ್ದರೆ ಪ್ರಜಾಪ್ರಭುತ್ವ ಉಳಿಯುವುದು ಕಷ್ಟ ಎಂದು ಅಧಿಕಾರ ಮತ್ತು ಆಸ್ತಿ ಹಂಚಿಕೆಯಾಗಬೇಕು ಎಂದು ಹೇಳಿದ್ದರು. ದೇಶಕ್ಕೆ ದೊರೆತ ಸ್ವಾತಂತ್ರ್ಯ ಯಶಸ್ವಿಯಾಗಲು ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲಿರಬೇಕು. ಇಲ್ಲವಾದರೆ ಅಸಮಾನತೆಯಿಂದ ನೊಂದ ಜನ ರಾಜಕೀಯ ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂದೂ ಹೇಳಿದ್ದರು. ಅದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಅಂಬೇಡ್ಕರ್ ಅವರನ್ನು ಎಷ್ಟು ನೆನೆದರೂ, ಎಷ್ಟು ಗೌರವ ಸಲ್ಲಿಸಿದರೂ ಕಡಿಮೆಯೇ ಎಂದರು.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ತೆಲಂಗಾಣದಲ್ಲಿ ಕಾಂಗ್ರೆಸ್‌ ಮೇಲೆ ಜನರ ವಿಶ್ವಾಸ : ತೆಲಂಗಾಣ ರಾಜ್ಯದಲ್ಲಿ ಹೈ ಕಮಾಂಡ್ ಅವರು ಅಭಿಪ್ರಾಯ ಸಂಗ್ರಹಿಸಿ ಬಹುಮತವಿದೆ ಎಂದು ರೇವಂತ್ ರೆಡ್ಡಿ ಅವರನ್ನು ಆಯ್ಕೆ ಮಾಡಿದ್ದಾರೆ. ಅಲ್ಲಿ 6 ಗ್ಯಾರಂಟಿ ನೀಡಿದ್ದು ಜನ ಕಾಂಗ್ರೆಸ್ ವರಿಷ್ಠರ ಮೇಲೆ ನಂಬಿಕೆ ವಿಶ್ವಾಸವಿಟ್ಟು ಜನ ಮತ ಹಾಕಿದ್ದಾರೆ. ಜನರಿಗೆ ಕೊಟ್ಟ ಮಾತನ್ನು ಈಡೇರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು. ಈ ವೇಳೆ ಸಮಾಜಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಕ್ಯಾಪ್ಟನ್​ ಅರ್ಜುನ ಆನೆ ಅಂತ್ಯಕ್ರಿಯೆ; ಎದ್ದೇಳೋ ಕಂದ ಎನ್ನುತ್ತಾ ಆತ್ಮೀಯ ಗೆಳೆಯನಿಗೆ ಮಾವುತ ವಿನು ಕಣ್ಣೀರ ವಿದಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.