ETV Bharat / state

ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

author img

By ETV Bharat Karnataka Team

Published : Nov 26, 2023, 12:40 PM IST

CM Siddaramaiha statement on female feticide case: ಹೆಣ್ಣು ಭ್ರೂಣ ಪತ್ತೆ ಮತ್ತು ಗರ್ಭಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಇಂಥ ದುಷ್ಕೃತ್ಯಗಳಲ್ಲಿ ಭಾಗಿಯಾಗುವ ಜನರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು.

CM siddaramaiha
ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು: ಭ್ರೂಣ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಭಾರತದ ಸಂವಿಧಾನ ದಿನ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್​​ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಬಳಿಕ ಅವರು ಮಾತನಾಡಿದರು.

ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿರುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಯಾರೇ ತಪ್ಪು ಮಾಡಿದರೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಅದರ ಬಗ್ಗೆ ಒಂದು ಸಭೆ ಮಾಡಿ ಸೂಕ್ತ ಕ್ರಮದ ನಿರ್ಣಯ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಮುಂದುವರೆದು ಮಾತನಾಡಿ, ತೆಲಂಗಾಣದಲ್ಲಿ ಇಂದು ನಮ್ಮ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ. ನಮಗೆ ಮಾಹಿತಿ ಇರುವ ಪ್ರಕಾರ ಅಲ್ಲಿ ಶೇ 100ಕ್ಕೆ 100 ರಷ್ಟು ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಒಂದು ತಂಡ ಸಿಎಂ ಸ್ಥಾನದಿಂದ ಇಳಿಸಲು ಹೊರಟಿದೆ ಎಂಬ ಬಿಜೆಪಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಪಾಪ ಅವರು ಈಗ ವಿಪಕ್ಷ ನಾಯಕರು. ಏನೇನೋ ಮಾತನಾಡ್ತಾರೆ, ಮಾತನಾಡಲಿ ಎಂದರು.

ಜಾತಿ ಗಣತಿ ಕುರಿತು ಶಾಮನೂರು ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿಎಂ, ಅದರ ಬಗ್ಗೆ ಆಮೇಲೆ ಮಾತನಾಡುತ್ತೇನೆ ಎಂದಷ್ಟೇ ತಿಳಿಸಿದರು.

ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು, ದೇಶದ ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ. ಇಂದು ಸಂವಿಧಾನ ಅಂಗೀಕಾರವಾದ ದಿನ. 1949ರ ನವೆಂಬರ್ 26ರಂದು ಭಾರತದ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದ ಡಾ.ಬಾಬುರಾಜೇಂದ್ರ ಪ್ರಸಾದ್ ಅವರಿಗೆ ಭಾರತದ ಸಂವಿಧಾನವನ್ನು ಸಲ್ಲಿಸಿದ ನಂತರ ಸಂವಿಧಾನ ಅಂಗೀಕಾರವಾಯಿತು. ಆದ್ದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ ಎಂದು ಸಿಎಂ ಹೇಳಿದರು.

ಇಂದು ಡಾ.ಬಾಬು ರಾಜೇಂದ್ರ ಪ್ರಸಾದ್, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯ ಎಲ್ಲ ಸದಸ್ಯರನ್ನು ನೆನಪಿಸಿಕೊಳ್ಳಬೇಕು. ಅಂಬೇಡ್ಕರ್ ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಸಂವಿಧಾನ ಶ್ರೇಷ್ಠವಾದುದು. ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ, ಸರಿಯಾದ ಕೈಗಳಲ್ಲಿ ಸಂವಿಧಾನವಿರದಿದ್ದರೆ ಸಾರ್ಥಕವಾಗುವುದಿಲ್ಲ ಎಂದು ಅಂಬೇಡ್ಕರ್ ಎಚ್ಚರಿಕೆಯ ಮಾತುಗಳನ್ನು ಹೇಳಿದ್ದರು. ಸಂವಿಧಾನದ ಪರವಾಗಿರುವ ಕೈಗಳಲ್ಲಿದ್ದಾಗ ಮಾತ್ರ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಸಾಧಿಸಿದಂತಾಗುತ್ತದೆ ಎಂದರು.

ರಾಷ್ಟ್ರಕವಿ ಕುವೆಂಪು ಹೇಳಿದಂತೆ 'ಸರ್ವ ಜನಾಂಗದ ಶಾಂತಿಯ ತೋಟ' ಎನ್ನುವಂತಹ ಸಮಾಜ ನಿರ್ಮಾಣವಾಗಬೇಕೆಂದು ಮಹಾತ್ಮಾ ಗಾಂಧಿ, ಜವಾಹರ್ ಲಾಲ್ ನೆಹರೂ ಕನಸು ಕಂಡಿದ್ದರು. ನಮ್ಮ ಸರ್ಕಾರ ಸಂವಿಧಾನದ ಆಶಯಗಳಂತೆ ನಡೆಯಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿದೆ. ಸಂವಿಧಾನದ ಪೀಠಿಕೆಯಲ್ಲಿ ಇದರ ಸಾರವಿದೆ. ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಸರ್ಕಾರದ ಈ ಕ್ರಮದಿಂದ ಇಂದಿನ ಮಕ್ಕಳು ಮುಂದಿನ ಪ್ರಜೆಗಳಾಗಿ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ನಡೆಯಲು ಸಾಧ್ಯವಾಗುತ್ತದೆ ಎಂದು ಸಿಎಂ ತಿಳಿಸಿದರು.

ಇದೇ ವೇಳೆ ಸಿದ್ದರಾಮಯ್ಯ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಭಾರತದ ಸಂವಿಧಾನ ಪ್ರಸ್ತಾವನೆ ಭಾಗವನ್ನು ಬೋಧಿಸಿದರು.

ಇದನ್ನೂ ಓದಿ: ಹೆಣ್ಣು ಭ್ರೂಣ ಪತ್ತೆ-ಗರ್ಭಪಾತ: ವೈದ್ಯ ಸೇರಿ ಮತ್ತೆ ಐವರ ಬಂಧನ; ಆರೋಪಿಗಳ ಸಂಖ್ಯೆ 9ಕ್ಕೇರಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.