ETV Bharat / state

ರಾಜ್ಯದಲ್ಲಿ ಸ್ಪೋರ್ಟ್ಸ್ ಸಿಟಿ ನಿರ್ಮಾಣಕ್ಕೆ ಆದ್ಯತೆ; ಗೃಹ ಸಚಿವ ಪರಮೇಶ್ವರ್

author img

By ETV Bharat Karnataka Team

Published : Dec 27, 2023, 7:44 AM IST

ರಾಜಭವನದ ಗಾಜಿನಮನೆಯಲ್ಲಿ ಒಲಿಂಪಿಕ್ಸ್ ಅಸೋಸಿಯೇಷನ್ ಹಾಗೂ ಏಷ್ಯನ್ ಗೇಮ್ಸ್ ವಿಜೇತ ಕ್ರೀಡಾಪಟುಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

construction-of-sports-city-in-karnataka-home-minister-g-parameshwar
ರಾಜ್ಯದಲ್ಲಿ ಸ್ಪೋರ್ಟ್ಸ್ ಸಿಟಿ ನಿರ್ಮಾಣಕ್ಕೆ ಆದ್ಯತೆ ; ಗೃಹ ಸಚಿವ ಪರಮೇಶ್ವರ್

ಬೆಂಗಳೂರು : ರಾಜ್ಯದಲ್ಲಿ ಕ್ರೀಡೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ 70 ಎಕರೆ ವ್ಯಾಪ್ತಿಯಲ್ಲಿ ಸ್ಪೋರ್ಟ್ಸ್ ಸಿಟಿ ನಿರ್ಮಿಸುವ ಪ್ರಸ್ತಾವನೆಯು ಸರ್ಕಾರದ ಮುಂದಿದೆ. ಮುಂಬರುವ ದಿನಗಳಲ್ಲಿ ಅದನ್ನು ಕಾರ್ಯಗತಗೊಳಿಸಲಾಗುವುದು ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು.

ರಾಜಭವನದ ಗಾಜಿನಮನೆಯಲ್ಲಿ ಕರ್ನಾಟಕ ಒಲಿಂಪಿಕ್ಸ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಒಲಿಂಪಿಕ್ಸ್ ಅಸೋಸಿಯೇಷನ್ ಹಾಗೂ ಏಷ್ಯನ್ ಗೇಮ್ಸ್ ವಿಜೇತ ಕ್ರೀಡಾಪಟುಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದ ಯುವಕರು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಬೇಕು. ಈ ನಿಟ್ಟಿನಲ್ಲಿ ಯುವಕರಿಗೆ ಕ್ರೀಡೆಯನ್ನು ಉತ್ತೇಜಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಂಕಲ್ಪ ತೊಟ್ಟು ಶ್ರಮದಿಂದ ಕ್ರೀಡಾಭ್ಯಾಸ ನಡೆಸಿ, ರಾಜ್ಯ ಮತ್ತು ದೇಶಕ್ಕೆ ಕೀರ್ತಿ ತರಬೇಕು. ಅದಕ್ಕೆ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದರು.

ಆಸ್ಟ್ರೇಲಿಯಾ, ಅಮೆರಿಕ ಹಾಗೂ ಚೀನಾ ದೇಶಗಳಲ್ಲಿ ಕ್ರೀಡಾ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲಿಯೂ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಿದರೆ, ಯುವಕರಿಗೆ ಅನುಕೂಲವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು. ಸುಸಜ್ಜಿತವಾದ ಬಾಸ್ಕೆಟ್ ಬಾಲ್ ಕ್ರೀಡಾಂಗಣ ನಿರ್ಮಾಣಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 5 ಎಕರೆ ಭೂಮಿಯನ್ನು ಮೀಸಲಿಡಲಾಗಿದೆ. ಅಲ್ಲದೇ, ರಾಜ್ಯದಲ್ಲಿ 15ಕ್ಕೂ ಹೆಚ್ಚು ಸಿಂಥೆಟಿಕ್ ಟ್ರ್ಯಾಕ್‌ಗಳನ್ನು ನಿರ್ಮಿಸಲಾಗಿದೆ. ತುಮಕೂರಿನಲ್ಲಿ 58 ಕೋಟಿ ರೂ. ಅನುದಾನದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲಾಗಿದ್ದು, ಕಂಠೀರವ ಸ್ಟೇಡಿಯಂಗಿಂತ ಸುಸಜ್ಜಿತವಾಗಿದೆ. ಇದೇ ಮಾದರಿಯಲ್ಲಿ ಬೇರೆ ಜಿಲ್ಲೆಗಳಲ್ಲಿಯೂ ಕ್ರೀಡಾಂಗಣ ನಿರ್ಮಿಸಲಾಗುವುದು ಎಂದು ಪರಮೇಶ್ವರ್​ ಹೇಳಿದರು.

ಇದೇ ವೇಳೆ, ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮಾತನಾಡಿ, ವಿಶ್ವಮಟ್ಟದಲ್ಲಿ ದೇಶದ ಕೀರ್ತಿ ಹೆಚ್ಚಿಸುವ ಕ್ರೀಡಾ ತಾರೆಗಳೇ ಯುವ ಪೀಳಿಗೆಗೆ ಪ್ರೇರಣೆ ಮತ್ತು ಸ್ಫೂರ್ತಿ. ತ್ರಿವರ್ಣ ಧ್ವಜದ ವೈಭವ ಹೆಚ್ಚಿಸುವ ಜವಾಬ್ದಾರಿ ಯುವಪೀಳಿಗೆಯ ಮೇಲಿದೆ. ಕ್ರೀಡಾಪಟುಗಳ ಶ್ರಮವು ಮುಂದಿನ ದಿನಗಳಲ್ಲಿ ಇನ್ನಷ್ಟು ಫಲ ನೀಡಲಿದೆ ಎಂಬ ವಿಶ್ವಾಸವಿದೆ. ಆಟಗಾರರು, ಪೋಷಕರು ಮತ್ತು ನಾಗರಿಕರು ಕ್ರೀಡೆಯಲ್ಲಿ ಆಸಕ್ತಿ ವಹಿಸುವಂತೆ ಇತರರಿಗೂ ಪ್ರೇರಣೆ ನೀಡಲು ಮುಂದಾಗಬೇಕು ಎಂದು ಮನವಿ ಮಾಡಿದರು.

ಭಾರತದಲ್ಲಿ ಕ್ರೀಡೆಗಳನ್ನು ಉತ್ತೇಜಿಸಲು, ಕೇಂದ್ರ ಯುವ ಮತ್ತು ಕ್ರೀಡಾ ಸಚಿವಾಲಯದ ಅಡಿ ಭಾರತೀಯ ಕ್ರೀಡಾ ಪ್ರಾಧಿಕಾರ ಮತ್ತು ಕರ್ನಾಟಕ ಸರ್ಕಾರವು ಕ್ರೀಡಾ ಚಟುವಟಿಕೆಗಳಿಗೆ ಪರಿಣಾಮಕಾರಿ ಯೋಜನೆಗಳನ್ನು ಸಿದ್ಧಪಡಿಸಿ ಅನುಷ್ಠಾನಗೊಳಿಸುತ್ತಿದೆ. ರಾಜ್ಯದಲ್ಲಿ ಆಧುನಿಕ ಸೌಲಭ್ಯಗಳು ಮತ್ತು ವಸತಿ ಸೌಕರ್ಯಗಳೊಂದಿಗೆ ಕ್ರೀಡಾ ಕೇಂದ್ರ ಸ್ಥಾಪಿಸುವ ಅಗತ್ಯವಿದೆ. ಒಲಿಂಪಿಕ್ಸ್ ಮತ್ತು ಏಷ್ಯನ್ ಕ್ರೀಡಾಕೂಟಕ್ಕೆ 75 ಅತ್ಯುತ್ತಮ ಆಟಗಾರರನ್ನು ಸಿದ್ಧಪಡಿಸುವ ಕರ್ನಾಟಕ ರಾಜ್ಯ ಸರ್ಕಾರದ ಯೋಜನೆಗೆ ಹೆಚ್ಚಿನ ವೇಗ ನೀಡಬೇಕಾಗಿದೆ. ಖೇಲೋ ಇಂಡಿಯಾವು ಭಾರತದ ಸಾಂಪ್ರದಾಯಿಕ ಕ್ರೀಡೆಗಳ ಪ್ರತಿಷ್ಠೆಯನ್ನು ಮರುಸ್ಥಾಪಿಸಿದ್ದು, ಅದರ ಫಲಿತಾಂಶಗಳು ಇಂದು ನಮ್ಮೆಲ್ಲರ ಮುಂದಿವೆ ಎಂದರು.

ಇದನ್ನು ಓದಿ: ಭಾರತೀಯ ಸಿನಿಮಾಗಳು ಕೇವಲ ವ್ಯಾಪಾರ, ಮನರಂಜನೆಗೆ ಸೀಮಿತವಾಗಿಲ್ಲ: ರಾಷ್ಟ್ರಪತಿ ದ್ರೌಪದಿ ಮುರ್ಮು

ಯುವಜನೋತ್ಸವ: 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು..' ಹಾಡಿದ ಸಚಿವ ಪ್ರಹ್ಲಾದ್​ ಜೋಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.