ETV Bharat / state

ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ: ಡಿಸಿಎಂ ಡಿಕೆಶಿ

author img

By ETV Bharat Karnataka Team

Published : Jan 3, 2024, 1:36 PM IST

ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪುಜಾರಿ ಬಂಧನಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಕುರಿತು ಉಪಮುಖ್ಯಮಂತ್ರಿ ಪ್ರತಿಕ್ರಿಯೆ ನೀಡಿ, ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ ಎಂದಿದ್ದಾರೆ.

dcm
ಡಿಸಿಎಂ ಡಿಕೆಶಿ

ಡಿಸಿಎಂ ಡಿಕೆಶಿ ಹೇಳಿಕೆ

ಬೆಂಗಳೂರು: ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿದ್ದೇವೆ. ನಮ್ಮದು ಶಾಂತಿಪ್ರಿಯ ರಾಜ್ಯ. ಇಲ್ಲಿ ದುಷ್ಕೃತ್ಯಕ್ಕೆ ಅವಕಾಶವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಸ್ಟಂಟ್ ಮಾಡುತ್ತಿದೆ. ಬಾಕಿ ಪ್ರಕರಣಗಳ ವಿಲೇವಾರಿಗೆ ಸರ್ಕಾರ ಮುಂದಾಗಿರುವುದಾಗಿ ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಯಾರು ರಾಜ್ಯಕ್ಕೆ ಅಗೌರವ ನೀಡಿದ್ದಾರೆ, ಯಾರು ಕಾನೂನು ಉಲ್ಲಂಘಿಸಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಬಿಜೆಪಿ ಅವರಿಗೆ 7 ತಿಂಗಳ ಕಾಲ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿರಲಿಲ್ಲ. ಈಗ ಚುನಾವಣೆ ಸಮೀಪಿಸುತ್ತಿದೆ. ಹೀಗಾಗಿ ತಾವು ರಾಜಕೀಯವಾಗಿ ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಹೀಗೆ ಮಾತನಾಡುತ್ತಿದ್ದಾರೆ. ಅವರು ಏನಾದರೂ ಮಾಡಿಕೊಳ್ಳಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಹಾಗೂ ಜನ ಇದಕ್ಕೆ ಉತ್ತರ ನೀಡುತ್ತೇವೆ. ನಾವು ಅವರಂತೆ ಅಧಿಕಾರ ದುರ್ಬಳಕೆ ಮಾಡಿಕೊಂಡು, ಅನ್ಯ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿಲ್ಲ. ಬಿಜೆಪಿ ಸರ್ಕಾರ ಇದ್ದಾಗ ಹುಬ್ಬಳ್ಳಿ, ಬೆಂಗಳೂರಿನಲ್ಲಿ ಎಷ್ಟು ಕಾಂಗ್ರೆಸ್​ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿದೆ ಎಂಬುದನ್ನು ನೋಡಿ. ನಾವು ಇದುವರೆಗೂ ಆ ರೀತಿ ಮಾಡಿಲ್ಲ. ಮುಂದೆಯೂ ಮಾಡಲ್ಲ ಎಂದು ಹೇಳಿದರು.

ಪೊಲೀಸ್ ಠಾಣೆ ಮುತ್ತಿಗೆ ಹಾಕಲು ವಿರೋಧ ಪಕ್ಷದ ನಾಯಕರು ಹುಬ್ಬಳ್ಳಿಗೆ ತೆರಳಿದ ಬಗ್ಗೆ ಮಾತನಾಡಿದ ಅವರು, ಹೋಗಿ ಕಟ್ಟಿ ಹಾಕಿಕೊಳ್ಳಲಿ. ಅವರ ಸರ್ಕಾರದಲ್ಲಿ ಏನೆಲ್ಲಾ ಮಾಡಿದ್ದರು ಎಂದು ನೋಡಿಕೊಳ್ಳಲಿ. ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಮವಸ್ತ್ರ ಬದಲು ಕೇಸರಿ ಬಟ್ಟೆ ಹಾಕಿಸಿದರು. ಅಂತಹ ಕೆಲಸ ನಾವು ಮಾಡಿಲ್ಲ ಎಂದು ತಿರುಗೇಟು ನೀಡಿದರು. ಇನ್ನು ತಮ್ಮ(ಡಿಕೆಶಿ) ವಿರುದ್ಧದ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ನೀಡಿದ್ದು, ತನಿಖೆ ಆರಂಭವಾಗಿರುವ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಯಾವುದೇ ರೀತಿಯ ನೊಟೀಸ್ ಬಂದಿಲ್ಲ. ಬಂದ ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: ರಾಮ ಭಕ್ತರ ಅರೆಸ್ಟ್​, ಪಿಎಫ್ಐಗಳ ಬಿಡುಗಡೆ: ಸರ್ಕಾರದ ವಿರುದ್ಧ ಆರ್​.ಅಶೋಕ್​ ಕಿಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.