ETV Bharat / state

ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಬಿಡುಗಡೆ ವಿಳಂಬ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

author img

By

Published : Apr 4, 2023, 11:00 PM IST

ಕೊರೊನಾ ಎರಡನೇ ಅಲೆಯ ಸಂದರ್ಭ ಸೇವೆ ಸಲ್ಲಿಸಿದ್ದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡದೇ ಇರುವುದಕ್ಕೆ ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್​ ಜಾರಿ ಮಾಡಿದೆ.

delay-in-release-of-incentives-to-medical-students-dot-high-court-issued-notice-to-govt
ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಬಿಡುಗಡೆ ವಿಳಂಬ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಎಂಬಿಬಿಎಸ್ ಅಂತಿಮ ವರ್ಷದ 151 ವಿದ್ಯಾರ್ಥಿಗಳು ಮೂರು ತಿಂಗಳು ಮಾಡಿರುವ ಸೇವೆಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಬೆಂಗಳೂರಿನ ಎನ್.ಲಕ್ಮ್ಷೀ ಅವಿನಾಶ್​ ಸೇರಿದಂತೆ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ತುಮಕೂರಿನ ಎಲ್.ವಿಕಾಸ್ ಮತ್ತು ಚಿತ್ರದುರ್ಗದ ಎಂ. ಅಜಯ್ ಅವರು ತಮ್ಮನ್ನೂ ಒಳಗೊಂಡು ಶಿವಮೊಗ್ಗದ ವೈದ್ಯಕೀಯ ವಿಜ್ಞಾನ ಸಂಸ್ಥೆಯ 151 ವಿದ್ಯಾರ್ಥಿಗಳಿಗೆ 2021ರ ಮೇ-ಜುಲೈ ಅವಧಿಯಲ್ಲಿ ತಲಾ 20 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯಕ್ಕೆ ನಿರ್ದೇಶಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.

ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಾನವ ಸಂಪನ್ಮೂಲ ಬಳಕೆ ಮಾಡಿಕೊಳ್ಳುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2021ರ ಮೇ 3ರಂದು ಆದೇಶಿಸಿತ್ತು. ಅದಕ್ಕೆ ಪ್ರತಿಯಾಗಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಬೇಕು ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವು 2021ರ ಮಾರ್ಚ್ 20ರಂದು ಸರ್ಕಾರಿ ವೈದ್ಯಕೀಯ ಸಂಸ್ಥೆಗಳು ಮತ್ತು ದಂತ ವಿಜ್ಞಾನ ಸಂಸ್ಥೆಗಳಿಗೆ ಪತ್ರ ಬರೆದು ಪದವಿ ಮತ್ತು ಸ್ನಾತಕೋತ್ತರ ಎಂಬಿಬಿಎಸ್ ವಿದ್ಯಾರ್ಥಿಗಳ ಸೇವೆಯನ್ನು ಕೊರೋನಾ ಎರಡನೇ ಅಲೆ ತಡೆಯಲು ಬಳಕೆ ಮಾಡಿಕೊಳ್ಳಬಹುದು ಎಂದು ಹೇಳಿತ್ತು.

ಇದರ ಮುಂದುವರೆದ ಭಾಗವಾಗಿ ಶಿವಮೊಗ್ಗದ ವೈದ್ಯಕೀಯ ವಿಜ್ಞಾನ ಸಂಸ್ಥೆಯು 151 ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಕೊರೋನಾ ಕರ್ತವ್ಯಕ್ಕೆ ನಿಯೋಜಿಸಿತ್ತು. ಕೊರೊನಾ ಕರ್ತವ್ಯ ಮಾಡಿದ್ದ ಜೂನಿಯರ್ ಮತ್ತು ಸೀನಿಯರ್ ರೆಸಿಡೆಂಟ್, ಸ್ನಾತಕೋತ್ತರ ಮತ್ತು ಇಂಟರ್ನ್​ಗಳಿಗೆ 2021ರ ಮೇ 15ರಂದು ಮತ್ತು ಜಿಎನ್‌ಎಂ/ಬಿಎಸ್ಸಿ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳು ಮತ್ತು ನರ್ಸಿಂಗ್ ಅಧಿಕಾರಿಗಳಿಗೆ 2021ರ ಮೇ 17ರಂದು ಹಾಗೂ 108 ಇಂಟರ್ನ್​ಗಳಿಗೆ ಮಾಸಿಕ ತಲಾ 10 ಸಾವಿರದಂತೆ ಪ್ರೋತ್ಸಾಧನ ಬಿಡುಗಡೆ ಮಾಡಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವು ಆದೇಶಿಸಿತ್ತು. ಆದರೆ, ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡಿರಲಿಲ್ಲ.

ಜತೆಗೆ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯಕ್ಕೆ ಶಿವಮೊಗ್ಗದ ವೈದ್ಯಕೀಯ ವಿಜ್ಞಾನ ಸಂಸ್ಥೆಯು ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾಸಿಕ 20 ಸಾವಿರ ರೂಪಾಯಿ ಪ್ರೋತ್ಸಾಹ ಧನ ಬಿಡುಗಡೆ ಮಾಡುವಂತೆ ಪತ್ರ ಬರೆದಿತ್ತು. ಈ ಸಂಬಂಧ ಹಲವು ಬಾರಿ ಕೋರಿಕೆ ಸಲ್ಲಿಸಿದರೂ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವು ಯಾವುದೇ ಕ್ರಮ ಜರುಗಿಸಿಲ್ಲ. ಹೀಗಾಗಿ, ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ : ಅಪ್ರಾಪ್ತೆಯನ್ನು ವಿವಾಹವಾಗಿ ಸಮ್ಮತಿಯ ಲೈಂಗಿಕ ಸಂಪರ್ಕ: ಜಾಮೀನು ನಿರಾಕರಿಸಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.