ETV Bharat / state

ಕರಾವಳಿ ಜಿಲ್ಲೆಗಳಿಗೆ ಕುಚ್ಚಲಕ್ಕಿ ಪೂರೈಕೆ: ನಳಿನ್‍ಕುಮಾರ್ ಕಟೀಲ್ ನಿಯೋಗದ ಮನವಿಗೆ ಸಿಎಂ ಸಮ್ಮತಿ

author img

By

Published : Sep 15, 2022, 8:26 PM IST

ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಪಡಿತರದಲ್ಲಿ ಕುಚ್ಚಲಕ್ಕಿಯನ್ನು ನೀಡುವಂತೆ ನಳಿನ್‍ಕುಮಾರ್ ಕಟೀಲ್ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ್ದು,ಇದಕ್ಕೆ ಮುಖ್ಯಮಂತ್ರಿಗಳು ಸಮ್ಮತಿ ಸೂಚಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ

distribution-of-boiled-rice-in-ration-to-coastal-districts
ಕರಾವಳಿ ಜಿಲ್ಲೆಗಳಿಗೆ ಕುಚ್ಚಲಕ್ಕಿ ಪೂರೈಕೆ: ನಳಿನ್‍ಕುಮಾರ್ ಕಟೀಲ್ ನಿಯೋಗದ ಮನವಿಗೆ ಮುಖ್ಯಮಂತ್ರಿ ಸಮ್ಮತಿ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನರ ಪ್ರಮುಖ ಆಹಾರವಾಗಿರುವ ಕುಚ್ಚಲಕ್ಕಿಯನ್ನು ಪಡಿತರದಾರರಿಗೆ ವಿತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾನಾ ಹಾಗೂ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ ಅವರು ಇಂದು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಚರ್ಚಿಸಿದರು.

ನಿಯೋಗದ ಪ್ರಸ್ತಾವನೆಗೆ ಸಮ್ಮತಿಸಿ ಪ್ರಸ್ತಾವನೆಯಂತೆ ಕರಾವಳಿ ಜಿಲ್ಲೆಗಳ ಪಡಿತರದಾರರಿಗೆ ಗುಣಮಟ್ಟದ ಕುಚಲಕ್ಕಿ ವಿತರಣೆಗೆ ಕ್ರಮ ವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಪ್ಪಿರುವುದಾಗಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತಿಳಿಸಿದರು.

ಕರಾವಳಿ ಜಿಲ್ಲೆಗಳಿಗೆ ಪಡಿತರದಲ್ಲಿ ಕುಚ್ಚಲಕ್ಕಿ ವಿತರಣೆ : ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪಡಿತರ ಚೀಟಿದಾರರಿಗೆ ಸಾರ್ವಜನಿಕ ವಿತರಣಾ ಪದ್ಧತಿ ಅಡಿ ಕುಚಲಕ್ಕಿಯನ್ನು ವಿತರಿಸಲು ಸಿಎಂ ಒಪ್ಪಿಗೆ ಸೂಚಿಸಿದ್ದಾರೆ. ಇದಕ್ಕೆ ಅಗತ್ಯವಿರುವ 299.33 ಕೋಟಿಗಳಷ್ಟು ಹಣ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಒಪ್ಪಿದ್ದು, ಕರಾವಳಿಗರ ಪರವಾಗಿ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

distribution-of-boiled-rice-in-ration-to-coastal-districts
ನಳಿನ್‍ಕುಮಾರ್ ಕಟೀಲ್ ನಿಯೋಗದ ಮನವಿಗೆ ಮುಖ್ಯಮಂತ್ರಿ ಸಮ್ಮತಿ

6 ಲಕ್ಷ ಕುಟುಂಬಗಳಿಗೆ ಅನುಕೂಲ: ಈ ಯೋಜನೆ ಅನುಷ್ಠಾನದಿಂದ 6,21,804 ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಅನುಕೂಲವಾಗಲಿದೆ. ಪ್ರಸ್ತುತ ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಯ ಪಡಿತರ ಚೀಟಿದಾರರಿಗೆ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸುವ ಅಕ್ಕಿಯ ಪ್ರಮಾಣದಲ್ಲಿ ಶೇ. 50 ರಷ್ಟು ಕುಚ್ಚಲಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ.

ಕುಚಲಕ್ಕಿಯನ್ನು ಭಾರತ ಆಹಾರ ನಿಗಮದಿಂದ ಎತ್ತುವಳಿ ಮಾಡದೇ ಸ್ಥಳೀಯವಾಗಿ ಸರ್ಕಾರವೇ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತವನ್ನು ಖರೀದಿಸಿ ಅದರಿಂದ ಕುಚಲಕ್ಕಿಯನ್ನಾಗಿ ಪರಿವರ್ತಿಸಿ ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ಚೀಟಿದಾರರಿಗೆ ವಿತರಿಸಬೇಕು. ಅದನ್ನು ಒಳ್ಳೆಯ ಆಹಾರವನ್ನಾಗಿ ಉಪಯೋಗಿಸುವರು ಹಾಗೂ ಇದರಿಂದ ಸ್ಥಳೀಯ ರೈತರಿಗೂ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಯವರಿಗೆ ವಿವರಿಸಲಾಯಿತು ಎಂದರು.

ಕೇರಳ ಮಾದರಿ ಪಡಿತರ ಹಂಚಿಕೆ : ಈಗಾಗಲೇ ಕೇರಳ ರಾಜ್ಯ ಈ ವ್ಯವಸ್ಥೆಯನ್ನು ಅಳವಡಿಕೊಂಡಿರುವುದಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು. ಪ್ರಸ್ತುತ ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಕುಚ್ಚಲಕ್ಕಿಯನ್ನು ಉಪಯೋಗಿಸುತ್ತಿದ್ದಾರೆ.

ಸದರಿ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಕೇರಳ ರಾಜ್ಯದ ಮಾದರಿಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಿ ಪರಿವರ್ತಿತ ಕುಚ್ಚಲಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಿದರೆ ಆ ಭಾಗದ ಜನರಿಗೆ ಹೆಚ್ಚು ಅನುಕೂಲವಾಗುತ್ತದೆ. ನಮ್ಮ ನಿಯೋಗದ ಮನವಿಯನ್ನು ಕುಲಂಕುಂಶವಾಗಿ ಆಲಿಸಿದ ಮುಖ್ಯಮಂತ್ರಿಯವರು ಪ್ರಸ್ತಾವನೆಗೆ ಸಮ್ಮತಿ ಸೂಚಿಸಿ ಸಂಬಂಧಿಸಿದ ಅನುದಾನ ಬಿಡುಗಡೆ ಮಾಡಲು ಒಪ್ಪಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಇದನ್ನೂ ಓದಿ : ಬೆಂಗಳೂರು ಮೈಸೂರು ಭಾಷೆ ಶೈಲಿ ಕುರಿತ ಸ್ವಾರಸ್ಯಕರ ಚರ್ಚೆ !

ETV Bharat Logo

Copyright © 2024 Ushodaya Enterprises Pvt. Ltd., All Rights Reserved.