ETV Bharat / state

ಡಿಕೆ ಶಿವಕುಮಾರ್ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ವಿಚಾರಣೆ ಮುಂದೂಡಿದ ಹೈಕೋರ್ಟ್

author img

By

Published : Mar 18, 2023, 7:41 AM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣ - ತನಿಖೆ ರದ್ದು ಕೋರಿ ಡಿಕೆಶಿ ಅರ್ಜಿ- ವಿಚಾರಣೆ ಮುಂದೂಡಿದ ಹೈಕೋರ್ಟ್​

dk-shivakumar-cbi-case-high-court-adjourned-hearing
ಡಿಕೆ ಶಿವಕುಮಾರ್ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ : ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಕೇಂದ್ರ ತನಿಖಾ ದಳ(ಸಿಬಿಐ) ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೊರಡಿಸಿರುವ ಆದೇಶವನ್ನು ಮಾ. 24ರವರೆಗೆ ವಿಸ್ತರಿಸಿ ಹೈಕೋರ್ಟ್ ಆದೇಶಿಸಿದೆ. ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಕರಣ ಮತ್ತು ಈ ಸಂಬಂಧ ನಡೆಯುತ್ತಿರುವ ತನಿಖೆ ರದ್ದು ಕೋರಿ ಡಿ.ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರ ನ್ಯಾಯಪೀಠ ಈ ಆದೇಶ ನೀಡಿದೆ.

ಇದಕ್ಕೂ ಮುನ್ನ ವಿಚಾರಣೆ ವೇಳೆ, ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್ ವಾದ ಮಂಡಿಸಿ, ಅರ್ಜಿದಾರರ ವಿರುದ್ಧದ ತನಿಖೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಇದರಿಂದ ತನಿಖೆಗೆ ತೊಂದರೆಯಾಗುತ್ತಿದೆ. ಹೀಗಾಗಿ ತಡೆಯಾಜ್ಞೆ ತೆರವು ಕೋರಿ ಸಿಬಿಐ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಅದನ್ನು ಪರಿಗಣಿಸಬೇಕು. ಜತೆಗೆ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಮನವಿ ಮಾಡಿದರು.

ಆದರೆ, ಈ ಮನವಿಯ ಕುರಿತು ವಿಚಾರಣೆ ನಡೆಸಲು ಕಾಲಾವಕಾಶದ ಕೊರತೆಯ ಕಾರಣ ಅರ್ಜಿ ವಿಚಾರಣೆಯನ್ನು ಮಾ.24ಕ್ಕೆ ಮುಂದೂಡಿದ ನ್ಯಾಯಪೀಠ, ಅಲ್ಲಿಯವರೆಗೆ ಡಿ.ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ತಡೆಯಾಜ್ಞೆ ಮುಂದುವರೆಯಲಿದೆ ಎಂದು ತಿಳಿಸಿತು.

ಪ್ರಕರಣದ ಹಿನ್ನೆಲೆ : ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಸೆಕ್ಷನ್​​ಗಳ ಅಡಿ ಸಿಬಿಐ 2020ರ ಅಕ್ಟೋಬರ್​ 3ರಂದು ಡಿ.ಕೆ ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿತ್ತು. ಸಿಬಿಐ ದಾಖಲಿಸಿರುವ ಈ ಎಫ್‌ಐಆರ್ ಕಾನೂನು ಬಾಹಿರವಾಗಿದ್ದು, ತನಿಖೆ ರದ್ದುಪಡಿಸಬೇಕು ಎಂದು ಕೋರಿ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿಬಿಐ ತನಿಖೆಗೆ 2023ರ ಫೆ.10ರಂದು ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

ಕೆಎಂಎಫ್​ ನೇಮಕಾತಿಯಲ್ಲಿ ಅಕ್ರಮ.. ನೇಮಕಾತಿಗೆ ಹೈಕೋರ್ಟ್​ ತಡೆಯಾಜ್ಞೆ: ಕರ್ನಾಟಕ ಹಾಲು ಮಹಾಮಂಡಲ (ಕೆಎಂಎಫ್) ನಡೆಸುತ್ತಿದ್ದ 487 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ವಿಧಿಸಿದೆ. ಮುಂದಿನ ವಿಚಾರಣೆ ನಡೆಯುವವರೆಗೆ ನೇಮಕಾತಿ ಪಟ್ಟಿ ಬಿಡುಗಡೆ ಮಾಡದಂತೆ ನ್ಯಾಯಾಲಯವು ಕೆಎಂಎಫ್​​ಗೆ ಸೂಚನೆ ನೀಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಐತಪ್ಪನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಸೇರಿ ಐದು ಸಂಘಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಈ ಆದೇಶವನ್ನು ನೀಡಿದೆ.

ಸಾರ್ವಜನಿಕರ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ. ವೀರಪ್ಪ ಹಾಗೂ ನ್ಯಾಯಮೂರ್ತಿ ವೆಂಕಟೇಶ್ ಟಿ. ನಾಯಕ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. ಜೊತೆಗೆ ರಾಜ್ಯ ಸರ್ಕಾರ, ಕೆಎಂಎಫ್, ಗುಜರಾತ್ ಮೂಲದ ನೇಮಕಾತಿ ಏಜೆನ್ಸ್ ಇನ್‌ಸ್ಟಿಟ್ಯೂಟ್ ಫಾರ್ ರೂರಲ್ ಮ್ಯಾನೇಜ್‌ಮೆಂಟ್ ಮತ್ತು ಸಿಐಡಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಇಲ್ಲಿನ 487 ಹುದ್ದೆಗಳ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಅಭ್ಯರ್ಥಿಗಳ ಅಂಕಗಳನ್ನು ತಿದ್ದಲು ಪ್ರತಿ ಹುದ್ದೆಗೆ 30ರಿಂದ 50 ಲಕ್ಷ ರೂಪಾಯಿ ಲಂಚ ಪಡೆಯಲಾಗಿದೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿ : ಶಾಸಕ ಮಾಡಾಳ್ ಜಾಮೀನು ಅರ್ಜಿ ವಿಚಾರಣೆ ಪೂರ್ಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.