ETV Bharat / state

ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

author img

By

Published : May 24, 2021, 9:09 PM IST

hc-refuses-to-grant-bail-to-former-minister-vinay-kulkarni
ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ತಿರಸ್ಕರಿಸಿದ ಹೈಕೋರ್ಟ್

ಜಾಮೀನು ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾ. ಕೆ. ನಟರಾಜನ್ ಅವರಿದ್ದ ಪೀಠ ಇಂದು ಪ್ರಕಟಿಸಿತು.

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್​ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ತಿರಸ್ಕರಿಸಿದೆ.

ಜಾಮೀನು ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾ. ಕೆ. ನಟರಾಜನ್ ಅವರಿದ್ದ ಪೀಠ ಇಂದು ಪ್ರಕಟಿಸಿತು. ಆರೋಪಿ ಪ್ರಭಾವಿಯಾಗಿದ್ದು, ಜಾಮೀನು ದೊರೆತರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ. ಅಲ್ಲದೇ, ಅರ್ಜಿದಾರರು ಜಾಮೀನು ಕೋರಿ ಒಂದರ ಹಿಂದೊಂದು ಅರ್ಜಿ ಸಲ್ಲಿಸುತ್ತ ಬಂದಿದ್ದು, ಅವು ಈಗಾಗಲೇ ವಜಾಗೊಂಡಿವೆ. ಹಿಂದೆ ಸಲ್ಲಿಸಿದ್ದ ಅರ್ಜಿಗಳಲ್ಲಿ ಮಾಡಲಾಗಿದ್ದ ಮನವಿಗಳ ಆಧಾರದ ಮೇಲೆ ಮತ್ತೆ ಜಾಮೀನು ಕೋರಲಾಗಿದ್ದು, ಜಾಮೀನು ಮಂಜೂರು ಮಾಡಲು ಪರಿಗಣಿಸಬಹುದಾದ ಯಾವುದೇ ಹೊಸ ಅಂಶಗಳನ್ನು ಒದಗಿಸಿಲ್ಲ ಎಂದು ಅಭಿಪ್ರಾಯಪಟ್ಟು, ಅರ್ಜಿ ವಜಾಗೊಳಿಸಿತು.

ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ್ದ ವಕೀಲ ಪಿ. ಪ್ರಸನ್ನ ಕುಮಾರ್, ವಿನಯ್ ಕುಲಕರ್ಣಿ ಹಾಗೂ ಯೋಗೇಶ್ ಗೌಡ ನಡುವೆ ವೈಯಕ್ತಿಕ ದ್ವೇಷ ಹಾಗೂ ರಾಜಕೀಯ ವೈಷಮ್ಯವಿತ್ತು. ಇದೇ ಕಾರಣಕ್ಕೆ ವಿನಯ್ ಕುಲಕರ್ಣಿ ಹತ್ಯೆಗೆ ಸಂಚು ರೂಪಿಸಿದ್ದು, ತನಿಖೆಯಿಂದ ತಿಳಿದು ಬಂದಿದೆ. ಈ ಬಗ್ಗೆ ಸಾಕಷ್ಟು ಸಾಕ್ಷ್ಯಗಳು ಸಿಕ್ಕಿವೆ. ಆರೋಪಿ ಪ್ರಭಾವಿಯಾಗಿದ್ದು, ಜಾಮೀನು ನೀಡಿದರೆ ಸಾಕ್ಷ್ಯ ನಾಶ ಪಡಿಸುವ ಸಾದ್ಯತೆ ಇದೆ. ಆದ್ದರಿಂದ, ಅರ್ಜಿ ವಜಾಗೊಳಿಸಬೇಕು ಎಂದು ಮನವಿ ಮಾಡಿದ್ದರು.

ವಿನಯ್ ಕುಲಕರ್ಣಿ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಶಶಿ ಕಿರಣ್ ಶೆಟ್ಟಿ, ಯೋಗೇಶ ಗೌಡರ್ ಹತ್ಯೆಗೂ ಅರ್ಜಿದಾರರಿಗೂ ಯಾವುದೇ ಸಂಬಂಧ ಇಲ್ಲ. ಪ್ರಕರಣದ ತನಿಖೆ ನಡೆಸಿರುವ ಸಿಬಿಐ ಈಗಾಗಲೇ ವಿಚಾರಣಾ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ. ಆದ್ದರಿಂದ, ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದ್ದರು.

ಪ್ರಕರಣದ ಹಿನ್ನೆಲೆ: 2016ರ ಜೂ.15ರಂದು ಯೋಗೇಶ್ ಗೌಡ ಹತ್ಯೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 2020 ನ. 5ರಂದು ಸಿಬಿಐ ವಿನಯ್ ಬಂಧಿಸಿತ್ತು. ಆ ಬಳಿಕ ಜಾಮೀನು ಕೋರಿ ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅಲ್ಲಿ ಜಾಮೀನು ಸಿಗದೇ ಧಾರವಾಡ ಹೈಕೋರ್ಟ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಕೂಡ ಜಾಮೀನು ನಿರಾಕರಿಸಿತ್ತು. ಆ ಬಳಿಕ ಪ್ರಕರಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿತ್ತು. ಅಲ್ಲಿಯೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ವಿಶೇಷ ನ್ಯಾಯಾಲಯ ವಜಾಗೊಳಿಸಿದ್ದರಿಂದ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಓದಿ: ರಾಜ್ಯದಲ್ಲಿಂದು 529 ಸೋಂಕಿತರು ಕೋವಿಡ್​​ಗೆ ಬಲಿ.. 57 ಸಾವಿರ ಮಂದಿ ಡಿಸ್ಚಾರ್ಜ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.