ETV Bharat / state

ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ ವಿಚಾರ: ಮಧ್ಯಂತರ ಆದೇಶ ತೆರವು

author img

By

Published : Mar 23, 2023, 11:59 AM IST

Updated : Mar 23, 2023, 12:54 PM IST

hc-vacated-interim-order-on-2a-reservation-for-lingayat-panchmasali
ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ ವಿಚಾರ : ಮಧ್ಯಂತರ ಆದೇಶ ತೆರವುಗೊಳಿಸಿದ ಹೈಕೋರ್ಟ್

ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ ವಿಚಾರ ಸಂಬಂಧ ಈ ಹಿಂದಿನ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವುಗೊಳಿಸಿದೆ.

ಬೆಂಗಳೂರು: ಪಂಚಮಸಾಲಿ ಲಿಂಗಾಯತ ಉಪ ಜಾತಿಗೆ ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ನೀಡುವ ಪ್ರಕ್ರಿಯೆ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವುಗೊಳಿಸಿ ಆದೇಶಿಸಿದೆ. ಪಂಚಮಸಾಲಿ ಲಿಂಗಾಯತ ಉಪ ಜಾತಿಗೆ ಪ್ರವರ್ಗ 2ಎ ಅಡಿ ಮೀಸಲಾತಿ ನೀಡುವ ಸಂಬಂಧದ ಸರ್ಕಾರದ ಪ್ರಕ್ರಿಯೆ ಪ್ರಶ್ನಿಸಿ ಬೆಂಗಳೂರಿನ ಡಿ.ಜಿ.ರಾಘವೇಂದ್ರ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಮೂರ್ತಿ ಆಶೋಕ್ ಎಸ್.ಕಿಣಗಿ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ರಾಜ್ಯ ಸರ್ಕಾರವು 2ಎ‌ ಪ್ರವರ್ಗಕ್ಕೆ ಯಾವುದೇ ತೊಂದರೆ ಆಗದಂತೆ ನಡೆದುಕೊಳ್ಳಲಾಗುವುದು. ಹೀಗಾಗಿ ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಈ ಹಿಂದೆ ನೀಡಿರುವ ಆದೇಶ ತೆರವು ಮಾಡಬೇಕು ಎಂದು ಕೋರಿದರು.

ಅಲ್ಲದೇ, ಈ‌ ಕುರಿತು ದಿನದ ಅಂತ್ಯದೊಳಗೆ ಲಿಖಿತ ಹೇಳಿಕೆಯನ್ನು ಸಲ್ಲಿಸಲಾಗುವುದು ಎಂದು ಸರ್ಕಾರಿ ವಕೀಲರು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಪ್ರಕರಣದಲ್ಲಿ ಸರ್ಕಾರ ಮುಂದೆ ಕೈಗೊಳ್ಳುವ ಎಲ್ಲ ಕ್ರಮಗಳು ಈ ಅರ್ಜಿ‌ ಕುರಿತಂತೆ ನ್ಯಾಯಾಲಯ ಹೊರಡಿಸುವ ಅಂತಿಮ‌ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿತು.

ಹೈಕೋರ್ಟ್​​ನ ಈ ಆದೇಶಸಿಂದ ಪಂಚಮಸಾಲಿ ಸೇರಿದಂತೆ ಲಿಂಗಾಯತರು ಪ್ರವರ್ಗಗಳನ್ನು ಹಿಂದುಳಿದ ವರ್ಗಗಳ ಪ್ರವರ್ಗ 2ಸಿ ಮತ್ತು ಒಕ್ಕಲಿಗರ ಸಮುದಾಯವನ್ನು 2ಡಿಗೆ ಸೇರಿಸಲು ಪ್ರಕ್ರಿಯೆ‌ ಕೈಗೊಳ್ಳಲು ಈವರೆಗೂ ಇದ್ದಂತಹ ಅಡ್ಡಿ ನಿವಾರಣೆ ಆದಂತಾಗಿದೆ. ಈ ಹಿಂದೆ ನಡೆದ ಅರ್ಜಿಯ ವಿಚಾರಣೆ ವೇಳೆ ಸರ್ಕಾರ, ಸಮುದಾಯವನ್ನು ಹಿಂದುಳಿದ ವರ್ಗಗಳ ಅಡಿ ಮೀಸಲು ಕಲ್ಪಿಸಲು ಕೋರಿದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿರುವ ರಾಜ್ಯ ಸರ್ಕಾರ, ಪ್ರತಿ ಹತ್ತು ವರ್ಷಕ್ಕೊಮ್ಮೆ ಹಿಂದುಳಿದ ವರ್ಗಗಳ ಮೀಸಲು ಪಟ್ಟಿಯನ್ನು ಪರಿಷ್ಕರಿಸುವ ಅಧಿಕಾರ ತನಗೆ ಇದೆ ಎಂದು ಪ್ರತಿಪಾದಿಸಿತ್ತು.

ಅಲ್ಲದೆ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾಯ್ದೆ-1995ರ ಸೆಕ್ಷನ್ 9ರ ಪ್ರಕಾರ ಯಾವುದಾದರೂ ಒಂದು ಸಮುದಾಯವು ತನ್ನನ್ನು ಹಿಂದುಳಿದ ವರ್ಗಕ್ಕೆ ಸೇರಿಸುವಂತೆ ಮನವಿ ಸಲ್ಲಿಸಿದರೆ, ಅದನ್ನು ಪರಿಶೀಲಿಸುವುದಕ್ಕೆ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಅವಕಾಶವಿದೆ. ನಿಯಮಗಳ ಪ್ರಕಾರ ಆಯೋಗವು ಮನವಿ ಮಾಡಿರುವ ಸಮುದಾಯಗಳು ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದೆಯೇ ವಿಚಾರಣೆ/ಸಮೀಕ್ಷೆ/ತನಿಖೆ ನಡೆಸಿ ನಾಗರಿಕರ ಹಿಂದುಳಿದ ವರ್ಗಗಳ ವರ್ಗೀಕರಣದ ಬಗ್ಗೆ ಸರ್ಕಾರಕ್ಕೆ ಶಿಫಾರಸು ಮಾಡಬೇಕಾಗುತ್ತದೆ ಎಂದು ಆಕ್ಷೇಪಣೆಯಲ್ಲಿ ಸರ್ಕಾರ ತಿಳಿಸಿತ್ತು.

ಅಲ್ಲದೆ, ಕಾಯ್ದೆಯ ಸೆಕ್ಷನ್ 11ರ ಪ್ರಕಾರ ರಾಜ್ಯ ಸರ್ಕಾರವು ಆಯೋಗದೊಂದಿಗೆ ಸಮಾಲೋಚಿಸಿ ಪ್ರತಿ ಹತ್ತು ವರ್ಷಗಳಿಗೊಮ್ಮೆ, ಹಿಂದುಳಿದ ವರ್ಗಗಳ ಪಟ್ಟಿಯನ್ನು ಪರಿಷ್ಕರಣೆ ಮಾಡಬಹುದಾಗಿದೆ. ಈ ರೀತಿಯಲ್ಲಿ ಒಂದಲ್ಲಾ ಒಂದು ಸಮುದಾಯ ಸಲ್ಲಿಸುವ ಮನವಿಯನ್ನು ಸದಾಶಿವ ಆಯೋಗದ ಮಂದೆ ಪರಿಗಣನೆಯಲ್ಲಿರುತ್ತದೆ. ಇದು ಸಹ ನಿರಂತರ ಪ್ರಕ್ರಿಯೆಯಾಗಿದೆ ಎಂದು ಆಕ್ಷೇಪಣೆಯಲ್ಲಿ ಸರ್ಕಾರ ವಿವರಿಸಿದೆ.

ಆಯೋಗ ಸಹ ಕಾಲ ಕಾಲಕ್ಕೆ ಸರ್ಕಾರಕ್ಕೆ ಹಲವು ಶಿಫಾರಸು ಮಾಡಿದ್ದು, ಅದಕ್ಕೆ ಅನುಗುಣವಾಗಿ ಸರ್ಕಾರವು ಹಲವು ಹಿಂದುಳಿದ ವರ್ಗಗಳನ್ನು ವರ್ಗೀಕರಣ ಮತ್ತು ಮರುವರ್ಗೀಕರಣ ಮಾಡಿಕೊಂಡು ಬಂದಿದೆ. ಯಾವುದೇ ಹಿಂದುಳಿದ ವರ್ಗದ ವ್ಯಕ್ತಿಯ ಸಾಮಾಜಿಕ ಸ್ಥಿತಿಗತಿ ಒಂದೇ ರೀತಿ ಇರುವುದಿಲ್ಲ. ತೀರಾ ಹಿಂದುಳಿದ ವರ್ಗದ ವ್ಯಕ್ತಿ ಭವಿಷ್ಯದಲ್ಲಿ ಮುಂದುವರೆದ ವರ್ಗಕ್ಕೆ ವರ್ಗಾವಣೆಯಾಗಬಹುದು ಎಂದು ಆಕ್ಷೇಪಣೆಯಲ್ಲಿ ತಿಳಿಸಲಾಗಿದೆ.

ಲಿಂಗಾಯತ ಪಂಚಮಸಾಲಿ ಸಮುದಾಯವು ತನ್ನನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿ ಮೀಸಲು ಕಲ್ಪಿಸಲು ಕೋರಿದೆ. ಆ ಬಗ್ಗೆ ಆಯೋಗವು ಪರಿಶೀಲನೆ ನಡೆಸಿ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದೆ. ಅದನ್ನು ಸರ್ಕಾರ ಈಗಾಗಲೇ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದೆ. ಈ ಅರ್ಜಿ ಸಲ್ಲಿಸಿರುವ ಅರ್ಜಿದಾರರ ನಡೆಯು ಅಕಾಲಿಕವಾಗಿದೆ. ಅರ್ಜಿಯಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲವಾಗಿದೆ. ಆದ್ದರಿಂದ ಅರ್ಜಿ ವಿಚಾರಣಾ ಮಾನ್ಯತೆ ಹೊಂದಿಲ್ಲ ಹಾಗೂ ವಜಾಗೊಳಿಸಲು ಅರ್ಹವಾಗಿದೆ ಎಂದು ಆಕ್ಷೇಪಣೆಯಲ್ಲಿ ಸರ್ಕಾರ ನ್ಯಾಯಾಲಯವನ್ನು ಕೋರಿದೆ.

ಇದನ್ನೂ ಓದಿ: ನವವೃಂದಾವನಗಡ್ಡೆ ವಿವಾದ: ಮಂತ್ರಾಲಯ ಮಠಕ್ಕೆ ಹೈಕೋರ್ಟ್​ ಅಸ್ತು

Last Updated :Mar 23, 2023, 12:54 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.