ಬೆಂಗಳೂರು: ರಾಜ್ಯದ ಹಲವೆಡೆ ನಾಲ್ಕು ದಿನ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜೂನ್ 7ರವರೆಗೆ ಕರಾವಳಿ ಹಾಗೂ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ಎಲ್ಲೆಲ್ಲಿ ಅತಿ ಹೆಚ್ಚು ಮಳೆ: ಗುರುವಾರ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ 5 ಸೆಂ.ಮೀ., ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಮಾಣಿ, ತುಮಕೂರು ಜಿಲ್ಲೆಯ ಬರಗೂರಿನಲ್ಲಿ ತಲಾ 3 ಸೆಂ.ಮೀ. ಮಳೆಯಾಗಿದೆ.
ಗರಿಷ್ಠ ಉಷ್ಣಾಂಶ: ಕಲಬುರಗಿ ಮತ್ತು ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಪ್ರತಿಭಟನೆ ವೇಳೆ ಸುಟ್ಟುಹಾಕಿದ ಚಡ್ಡಿಯೇ ಅಪರಾಧವಾಗಿ ಕಂಡಿದೆ: ಸಿದ್ದರಾಮಯ್ಯ ಗರಂ