ETV Bharat / state

5 ಮತ್ತು 8ನೇ ತರಗತಿಗಳ ಬೋರ್ಡ್ ಪರೀಕ್ಷೆ ಮುಂದೂಡಲು ಮತ್ತೆ ನಿರಾಕರಿಸಿದ ಹೈಕೋರ್ಟ್

author img

By

Published : Mar 24, 2023, 8:59 PM IST

ಪ್ರಕರಣ ಸುಪ್ರೀಂ ಕೋರ್ಟ್​ನಲ್ಲಿ ಇರುವುದರಿಂದ ಪೀಠಕ್ಕೆ ಸಲ್ಲಿಸಿದ ಮನವಿಯನ್ನು ಹೈಕೋರ್ಟ್​ ನಿರಾಕರಿಸಿದೆ.

High Court
ಹೈಕೋರ್ಟ್

ಬೆಂಗಳೂರು: ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 5 ಮತ್ತು 8ನೇ ತರಗತಿಗಳಿಗೆ ಮಾ.27 ರಿಂದ ನಡೆಯಲಿರುವ ಬೋರ್ಡ್ ಮಟ್ಟದ (ಮಂಡಳಿ) ಪರೀಕ್ಷೆಗಳನ್ನು ಮುಂದೂಡುವುದಕ್ಕೆ ಹೈಕೋರ್ಟ್ ಮತ್ತೊಮ್ಮೆ ನಿರಾಕರಿಸಿದೆ. ಕರ್ನಾಟಕ ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ(ಕುಸ್ಮಾ) ಪರ ವಕೀಲ ಕೆ.ವಿ.ಧನಂಜಯ್ ಅವರು ಶುಕ್ರವಾರ ನ್ಯಾಯಮೂರ್ತಿ ಜಿ.ನರೇಂದ್ರ ಮತ್ತು ನ್ಯಾಯಮೂರ್ತಿ ಅಶೋಕ್​ ಎಸ್​ ಕಿಣಗಿ ಅವರ ವಿಭಾಗೀಯ ಪೀಠಕ್ಕೆ ಮನವಿ ಸಲ್ಲಿಸಿ, ಪರೀಕ್ಷೆ ಮುಂದೂಡಲು ಕೋರಿದರು.

ಅಲ್ಲದೆ, 5 ಮತ್ತು 8ನೇ ತರಗತಿಗಳಿಗೆ ಮಾ.27 ರಂದು ಪರೀಕ್ಷೆ ನಡೆಸುವುದಕ್ಕೆ ರಾಜ್ಯ ಪ್ರಾರ್ಥಮಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಸಂಬಂಧ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಾಲೆಗಳು ಮತ್ತು ಖಾಸಗಿ ಶಾಲೆಗಳ ಮಕ್ಕಳ ಪೋಷಕರು ಸಲ್ಲಿಸಿರುವ ಅರ್ಜಿಗಳು ಮಾ.27 ರಂದೇ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ. ಹೀಗಾಗಿ ಪರೀಕ್ಷೆ ಮತ್ತು ವಿಚಾರಣೆ ಒಂದೇ ದಿನ ಇರುವುದರಿಂದ ಪರೀಕ್ಷೆಯನ್ನು ಮುಂದೂಡಬೇಕು ಎಂದು ಅರ್ಜಿದಾರರ ಪರ ವಕೀಲಾರಾದ ಕೆ.ವಿ.ಧನಂಜಯ್ ಅವರು ಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಪ್ರಕರಣ ಪ್ರಸ್ತುತ ಸುಪ್ರೀಂಕೋರ್ಟ್ ಅಂಗಳದಲ್ಲಿದೆ. ಹೀಗಾಗಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಯಾವುದೇ ರೀತಿಯ ತೀರ್ಮಾನ ತೆಗೆದುಕೊಳ್ಳುವುದಕ್ಕೆ ಅವಕಾಶವಿಲ್ಲ. ಸುಪ್ರೀಂಕೋರ್ಟ್ ಯಾವ ತೀರ್ಪು ನೀಡುತ್ತದೆಯೋ ಎಂಬುದನ್ನು ಕಾದು ನೋಡಬೇಕು ಎಂದು ತಿಳಿಸಿತು. ಅಲ್ಲದೆ, ಪರೀಕ್ಷೆಗಳನ್ನು ಮುಂದೂಡುವಂತೆ ಕೋರಿದ್ದ ಮನವಿಯನ್ನು ತಿರಸ್ಕರಿಸಿತು.

ಪ್ರಕರಣದ ಹಿನ್ನೆಲೆ ಏನು? : ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ಹೊರಡಿಸಿದ್ದ ಸುತ್ತೋಲೆಗಳನ್ನು ರದ್ದುಪಡಿಸಿ ಏಕಸದಸ್ಯ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ದ್ವಿ ಸದಸ್ಯ ಪೀಠವು ಪರೀಕ್ಷೆ ನಡೆಸುವುದಕ್ಕೆ ಅನುಮತಿ ನೀಡಿತ್ತು. ಈ ಆದೇಶವನ್ನು ಖಾಸಗಿ ಶಾಲೆಗಳು ಸುಪ್ರೀಂ ಕೋರ್ಟ್​ನಲ್ಲಿ ಪ್ರಶ್ನಿಸಿದ್ದವು. ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಬೋರ್ಡ್‌ ಪರೀಕ್ಷೆಗೆ ತಡೆ ನೀಡಲು ನಿರಾಕರಿಸಿತ್ತು. ಅಲ್ಲದೆ, ಅರ್ಜಿಯನ್ನು ಮಾ.28 ರಂದು ವಿಚಾರಣೆ ನಡೆಸುವುದಾಗಿ ತಿಳಿಸಿತ್ತು.

ಮಂಗಳವಾರ ಕಲಾಪ ಪ್ರಾರಂಭವಾಗುತ್ತಿದ್ದಂತೆ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಅಶೋಕ್ ಎಸ್.ಕಿಣಗಿ ಅವರಿದ್ದ ನ್ಯಾಯಪೀಠದ ಮುಂದೆ ಖಾಸಗಿ ಶಾಲೆಗಳ ಪರ ವಕೀಲರು, 5 ಮತ್ತು 8ನೇ ತರಗತಿಗಳಿಗೆ ಬೋರ್ಡ್‌ ಪರೀಕ್ಷೆ ಮುಂದೂಡುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಸಿದ ನ್ಯಾಯಪೀಠ, ಪ್ರಕರಣ ಈಗಾಗಲೇ ಸುಪ್ರೀಂ ಕೋರ್ಟ್​ನಲ್ಲಿದೆ. ಈ ಸಂದರ್ಭದಲ್ಲಿ ನಾವು ಯಾವುದೇ ರೀತಿಯಲ್ಲಿಯೂ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಸುಪ್ರೀಂ ಕೋರ್ಟ್​ನಲ್ಲಿ ನಿಮ್ಮ ಮನವಿಯನ್ನು ತಿಳಿಸಿ ಎಂದು ಸೂಚನೆ ನೀಡಿತು. ಇದಾದ ಬಳಿಕ ಮತ್ತೆ ಇಂದು ಮತ್ತೊಂದು ಪೀಠದ ಮುಂದೆ ಕುಸ್ಮಾ ಪರ ವಕೀಲರು ಮನವಿ ಮಾಡಿದ್ದಾರೆ.

ಇದನ್ನೂ ಓದಿ :ಹೈಕೋರ್ಟ್ ನೀಡಿರುವ ತಾತ್ಕಾಲಿಕ ತಡೆ ಗೌರವಿಸಿ ಮುಷ್ಕರ ಮುಂದೂಡಿಕೆ: ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.