ETV Bharat / state

ಅನರ್ಹರಿಗೆ ಸರ್ಕಾರಿ ಭೂಮಿ ಮಂಜೂರು ಪ್ರಕರಣ: ಮಾಲೂರು ಶಾಸಕ ನಂಜೇಗೌಡ ವಿರುದ್ಧ ತನಿಖೆಗೆ ಹೈಕೋರ್ಟ್ ಅನುಮತಿ

author img

By ETV Bharat Karnataka Team

Published : Oct 1, 2023, 7:25 AM IST

ಅನರ್ಹರಿಗೆ ಭೂಮಿ ಮಂಜೂರು ಆರೋಪ ಪ್ರಕರಣ ರದ್ದು ಕೋರಿ ಮಾಲೂರು ಶಾಸಕ ಕೆ ವೈ ನಂಜೇಗೌಡ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

Etv Bharat
ಅನರ್ಹರಿಗೆ ಸರ್ಕಾರಿ ಭೂಮಿ ಮಂಜೂರು ಪ್ರಕರಣ

ಬೆಂಗಳೂರು: ಕಳೆದ 2019ರಲ್ಲಿ ಮಾಲೂರು ತಾಲೂಕು ಭೂ ಮಂಜೂರಾತಿ ಸಮಿತಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಕೋಟ್ಯಾಂತರ ರೂ. ಬೆಲೆಬಾಳುವ ಸುಮಾರು 80 ಎಕರೆ ಸರ್ಕಾರಿ ಭೂಮಿಯನ್ನು ಮೃತರು ಸೇರಿದಂತೆ ಅನರ್ಹರಿಗೆ ಮಂಜೂರು ಮಾಡಿದ್ದ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಮಾಲೂರು ಶಾಸಕ ಕೆ ವೈ ನಂಜೇಗೌಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ತನಿಖೆಗೆ ಅನುಮತಿಸಿದೆ.

ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ನಂಜೇಗೌಡ ಸೇರಿದಂತೆ ಸಮಿತಿಯ ಇತರೆ ಮೂವರು ಸದಸ್ಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಸರ್ಕಾರಿ ಭೂಮಿಯನ್ನು ಮಂಜೂರು ಮಾಡುವುದಕ್ಕೆ ಅರ್ಹರಲ್ಲದ ವ್ಯಕ್ತಿಗಳಿಗೆ ಹಂಚಿಕೆ ಮಾಡುವ ಮೂಲಕ ಜನ ಪ್ರತಿನಿಧಿಗಳಿಗೆ ನೀಡಿರುವ ಅಧಿಕಾರವನ್ನು ಅರ್ಜಿದಾರರು ದುರುಪಯೋಗ ಪಡಿಸಿಕೊಂಡಿರುವ ಪ್ರಕರಣಗಳಲ್ಲಿ ಇದು ಉದಾಹರಣೆಯಾಗಿದೆ ಎಂದು ಹೈಕೋರ್ಟ್ ತಿಳಿಸಿ, ಅರ್ಜಿ ವಜಾಗೊಳಿಸಿದೆ. ಜೊತೆಗೆ ಪ್ರಕರಣ ಸಂಬಂಧ ತನಿಖೆಗಾಗಿ ಈ ಹಿಂದೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದೆ.

ಅಲ್ಲದೆ, ಆರೋಪ ಸಂಬಂಧ ಈ ಮೊದಲೇ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಅರ್ಜಿದಾರರು ಆರೋಪಿಗಳಾಗಿಲ್ಲ. ಆದ್ದರಿಂದ ಎರಡನೇ ಎಫ್‌ಐಆರ್‌ನ್ನು ರದ್ದು ಪಡಿಸುವಂತೆ ಅರ್ಜಿದಾರರ ಕೋರಿಕೆಯನ್ನು ಹೈಕೋರ್ಟ್ ತಳ್ಳಿ ಹಾಕಿದೆ.

2004ರಲ್ಲಿ ಮೃತರಾಗಿದ್ದ ನಾರಾಯಣಪ್ಪ ಎಂಬುವರಿಗೆ 2019ರಲ್ಲಿ 1.39 ಎಕರೆ ಭೂಮಿ ಮಂಜೂರು ಮಾಡಲಾಗಿದೆ. ಕಳೆದ 50 ವರ್ಷಗಳಿಂದ ಭೂಮಿ ಸಾಗುವಳಿ ಮಾಡುತ್ತಿದ್ದ ಎಂಬ ಕಾರಣ ನೀಡಿ 40 ವರ್ಷದ ಆನಂದಗೌಡ ಎಂಬ ವ್ಯಕ್ತಿಗೆ ಜಮೀನು ಮಂಜೂರು ಮಾಡಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ಅಂಶಗಳನ್ನು ಪರಿಶೀಲಿಸಿದರೆ ಸಮಿತಿಯ ಅಧ್ಯಕ್ಷರಾಗಿದ್ದ ಅರ್ಜಿದಾರರು ಸರ್ಕಾರಿ ಭೂಮಿಯನ್ನು ಕಬಳಿಸಿದ್ದಾರೆ. ಜೊತೆಗೆ ಕಚೇರಿಯನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ನ್ಯಾಯಪೀಠ ಆದೇಶದಲ್ಲಿ ಉಲ್ಲೇಖಿಸಿದೆ.

ಪ್ರಕರಣದ ಹಿನ್ನೆಲೆ ಏನು? 2019ರಲ್ಲಿ ಶಾಸಕರಾಗಿದ್ದ ಅರ್ಜಿದಾರ ನಂಜೇಗೌಡರಿಗೆ ಸರ್ಕಾರಿ ಭೂಮಿಗಳನ್ನು ಅರ್ಹರಿಗೆ ಮಂಜೂರು ಮಾಡುವ ತಾಲೂಕು ಭೂ ಮಂಜೂರಾತಿ ಸಮಿತಿಯ ಅಧ್ಯಕ್ಷರಾಗಿದ್ದರು. ಈ ಸಂದರ್ಭದಲ್ಲಿ ಮೃತರು ಸೇರಿದಂತೆ ಅನರ್ಹರಿಗೆ ಕೋಟ್ಯಾಂತರ ರೂ ಬೆಲೆಬಾಳುವ ಸರ್ಕಾರಿ ಭೂಮಿಗಳನ್ನು ಮಂಜೂರು ಮಾಡಿದ್ದ ಆರೋಪ ಎದುರಾಗಿತ್ತು. ಈ ಸಬಂಧ ಕೋಲಾರದ ನಿವಾಸಿ ಸಮಾಜ ಸೇವಕ ಕೆ ಸಿ ರಾಜಣ್ಣ ಎಂಬುವರು ಮಾಲೂರು ಪೊಲೀಸ್ ಠಾಣೆಗೆ ದೂರು ನೀಡಿ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಕೋರಿದ್ದರು. ಆದರೆ, ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದರು.

ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ದೂರಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ನ್ಯಾಯಾಲಯ ಅರ್ಜಿದಾರ ನಂಜೇಗೌಡ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಮಾಲೂರು ಪೊಲೀಸರಿಗೆ ಸೂಚನೆ ನೀಡಿತ್ತು. ಈ ಆಧಾರದಲ್ಲಿ ನಂಜೇಗೌಡ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಇದನ್ನು ಪ್ರಶ್ನಿಸಿ ನಂಜೇಗೌಡ ಮತ್ತಿತರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದೇ ಆರೋಪ ಸಂಬಂಧ ತಹಶೀಲ್ದಾರ್ ವಿರುದ್ಧ ಈಗಾಗಲೇ ಒಂದು ಎಫ್‌ಐಆರ್ ದಾಖಲಾಗಿದೆ. ಇದೀಗ ವಿಶೇಷ ನ್ಯಾಯಾಲಯದ ಆದೇಶದಂತೆ ಮತ್ತೊಂದು ಎಫ್‌ಐಆರ್ ದಾಖಲಾಗಿದ್ದು, ಇದು ಕಾನೂನುಬಾಹಿರ ಎಂದು ನ್ಯಾಯಾಲಯದಲ್ಲಿ ಅರ್ಜಿದಾರರು ವಾದ ಮಂಡಿಸಿದ್ದರು. ಅರ್ಜಿದಾರರ ವಾದ ತಳ್ಳಿಹಾಕಿದ ನ್ಯಾಯಾಲಯ, ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಇದರಿಂದಾಗಿ ನಂಜೇಗೌಡ ಮತ್ತಿತರರು ತನಿಖೆ ಎದುರಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಇದನ್ನೂ ಓದಿ: ಸಾಲ ಹಿಂದಿರುಗಿಸುವಂತೆ ಒತ್ತಡ ಹಾಕುವುದು ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತಾಗುವುದಿಲ್ಲ : ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.