ETV Bharat / state

ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

author img

By

Published : Jun 17, 2021, 3:39 PM IST

High Court
ಹೈಕೋರ್ಟ್

ಪುನರಾವರ್ತಿತ ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಈ ಅನುಕೂಲ ಕಲ್ಪಿಸಿಲ್ಲ. ಇದು ತಾರತಮ್ಯ ನೀತಿಯಾಗಿದೆ. ರಾಜ್ಯದಲ್ಲಿ ಸುಮಾರು 95 ಸಾವಿರ ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. ಅವರನ್ನೂ ಪರೀಕ್ಷೆ ಇಲ್ಲದೇ ಉತ್ತೀರ್ಣ ಮಾಡಬೇಕು. ಇಲ್ಲದಿದ್ದರೆ ಸರ್ಕಾರದ ನೋಟಿಫಿಕೇಷನ್ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಬೆಂಗಳೂರು: ಪುನರಾವರ್ತಿತ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ಸಂಬಂಧ ಸೂಕ್ತ ನಿರ್ಣಯ ಕೈಗೊಳ್ಳುವವರೆಗೆ ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸದಂತೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಹಿನ್ನೆಲೆ ಕೊರೊನಾದಿಂದ ಪರೀಕ್ಷೆ ನಡೆಸದೆ ಫಲಿತಾಂಶ ನೀಡಲು ಮುಂದಾಗಿದ್ದ ಇಲಾಖೆ ನಿರ್ಧಾರಕ್ಕೆ ತಡೆ ನೀಡಲಾಗಿದೆ.

ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೇ ಪ್ರಥಮ ಪಿಯು ಅಂಕಗಳ ಆಧಾರದ ಮೇಲೆ ಉತ್ತೀರ್ಣ ಮಾಡಲು ಮುಂದಾಗಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಬೆಂಗಳೂರಿನ ಜ್ಞಾನಮಂದಿರ ಟ್ರಸ್ಟ್​ನ ಸಿಂಗ್ರೇಗೌಡ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಬಿ.ವಿ ನಾಗರತ್ನ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರದ ಪರ ವಕೀಲರು, ಪದವಿಪೂರ್ವ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ (ಪರೀಕ್ಷೆ) ಕೃಷ್ಣಪ್ರಸಾದ್ ಅವರು ಸಿದ್ಧಪಡಿಸಿದ್ದ ಮೆಮೋ ಅನ್ನು ಪೀಠಕ್ಕೆ ಸಲ್ಲಿಸಿದರು. ಪ್ರಸಕ್ತ ಸಾಲಿನ 5.92 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳು ಹಾಗೂ 76 ಸಾವಿರ ಪುನರಾವರ್ತಿತ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ವಿಚಾರವಾಗಿ ಸೂಕ್ತ ತೀರ್ಮಾನ ಕೈಗೊಳ್ಳುವ ಬಗ್ಗೆ 12 ಮಂದಿ ತಜ್ಞರ ಸಮಿತಿ ರಚಿಸಲಾಗಿದೆ. ತಜ್ಞರ ಸಮಿತಿ 15 ದಿನಗಳಲ್ಲಿ ವರದಿ ನೀಡಲಿದ್ದು, ಆ ವರದಿ ಆಧರಿಸಿ ಸರ್ಕಾರ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್​ ಮಾಡುವ ಕುರಿತು ತೀರ್ಮಾನಿಸಲಿದೆ ಎಂದು ವಿವರಿಸಿದರು.

ಜುಲೈ 5ಕ್ಕೆ ವಿಚಾರಣೆ ಮುಂದೂಡಿಕೆ

ಹೇಳಿಕೆ ದಾಖಲಿಸಿಕೊಂಡ ಪೀಠ, ಸಾಮಾನ್ಯ ವಿದ್ಯಾರ್ಥಿಗಳು ಹಾಗೂ ರಿಪೀಟರ್ಸ್ ಮಧ್ಯೆ ತಾರತಮ್ಯ ಮಾಡುವುದು ಬೇಡ. ಎಲ್ಲರಿಗೂ ಒಂದೇ ರೀತಿಯ ನಿರ್ಣಯ ಕೈಗೊಳ್ಳುವುದು ಸೂಕ್ತ. ಹೀಗಾಗಿ ತಜ್ಞರ ಸಮಿತಿ ವರದಿ ಆಧರಿಸಿ ಸರ್ಕಾರ ಸಮಗ್ರವಾಗಿ ನಿರ್ಣಯ ಕೈಗೊಳ್ಳುವವರೆಗೆ ದ್ವಿತೀಯ ಪಿಯು ಫಲಿತಾಂಶವನ್ನು ಪ್ರಕಟಿಸಬಾರದು ಎಂದು ಮಧ್ಯಂತರ ಆದೇಶ ನೀಡಿ, ವಿಚಾರಣೆಯನ್ನು ಜುಲೈ 5ಕ್ಕೆ ಮುಂದೂಡಿತು.

ಹಿಂದಿನ ವಿಚಾರಣೆ ವೇಳೆ ಪ್ರಸಕ್ತ ಸಾಲಿನ ವಿದ್ಯಾರ್ಥಿಗಳನ್ನಷ್ಟೇ ಪಾಸು ಮಾಡುವ ಸರ್ಕಾರದ ಆದೇಶದ ವಿರುದ್ಧ ಪೀಠ ಅಸಮಾಧಾನ ವ್ಯಕ್ತಪಡಿಸಿತ್ತು. ಪ್ರಥಮ ಪಿಯು ಅಂಕಗಳನ್ನು ಆಧರಿಸಿ ಪ್ರಸಕ್ತ ಸಾಲಿನ ವಿದ್ಯಾರ್ಥಿಗಳನ್ನು ಪಾಸು ಮಾಡುವುದಾದರೆ ರಿಪೀಟರ್ಸ್ ಗಳನ್ನೂ ಅದೇ ರೀತಿ ಪಾಸು ಮಾಡಬಹುದಲ್ಲವೇ ಎಂದು ಪ್ರಶ್ನಿಸಿದ್ದ ಪೀಠ, ಪುನಾರಾವರ್ತಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸುವುದೇಕೆ. ಅವರಿಗೆ ಕೋವಿಡ್​​​ನಿಂದ ತೊಂದರೆಯಾಗುವುದಿಲ್ಲವೇ ಎಂದು ಕೇಳಿತ್ತು. ಜತೆಗೆ ಈ ಕುರಿತು ಸರ್ಕಾರ ಸೂಕ್ತ ನಿರ್ಣಯ ಕೈಗೊಳ್ಳಬೇಕೆಂದು ನಿರ್ದೇಶಿಸಿತ್ತು.

ಅರ್ಜಿದಾರರ ಕೋರಿಕೆ

ಪ್ರಸ್ತಕ ಸಾಲಿನಲ್ಲಿ ಸುಮಾರು 7 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳಬೇಕಿತ್ತು. ಆದರೆ ಕೋವಿಡ್ ಹಿನ್ನೆಲೆ ಪರೀಕ್ಷೆ ನಡೆಸದೇ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪಾಸು ಮಾಡಲು ಸರ್ಕಾರ ನಿರ್ಧರಿಸಿದೆ. ಪ್ರಥಮ ಪಿಯು ಪರೀಕ್ಷೆ ಅಂಕ ಪರಿಗಣಿಸಿ ಉತ್ತೀರ್ಣ ಮಾಡುವ ಸಂಬಂಧ ಜೂನ್ 3ರಂದು ರಾಜ್ಯ ಸರ್ಕಾರ ನೋಟಿಫಿಕೇಷನ್ ಹೊರಡಿಸಿದೆ.

ಆದರೆ ಪುನರಾವರ್ತಿತ ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಈ ಅನುಕೂಲ ಕಲ್ಪಿಸಿಲ್ಲ. ಇದು ತಾರತಮ್ಯ ನೀತಿಯಾಗಿದೆ. ರಾಜ್ಯದಲ್ಲಿ ಸುಮಾರು 95 ಸಾವಿರ ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. ಅವರನ್ನೂ ಪರೀಕ್ಷೆ ಇಲ್ಲದೇ ಉತ್ತೀರ್ಣ ಮಾಡಬೇಕು. ಇಲ್ಲದಿದ್ದರೆ ಸರ್ಕಾರದ ನೋಟಿಫಿಕೇಷನ್ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.