ETV Bharat / state

ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

author img

By ETV Bharat Karnataka Team

Published : Oct 31, 2023, 10:55 PM IST

ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್​ ತೀರ್ಪು ಕಾಯ್ದಿರಿಸಿತು.

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ.

ಜಾಮೀನು ಕೋರಿ ಶಿವಮೂರ್ತಿ ಶರಣರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಧಾರವಾಡ ಪೀಠ ತೀರ್ಪು ಕಾಯ್ದಿರಿಸಿತು. ಮಂಗಳವಾರ ನಡೆದ ವಿಚಾರಣೆ ವೇಳೆ ದೂರು ಸಲ್ಲಿಸಲು ಸಂತ್ರಸ್ತರಿಗೆ ನೆರವಾಗಿದ್ದ ಒಡನಾಡಿ ಸೇವಾ ಸಂಸ್ಥೆಯ ಪರವಾಗಿ ವಕೀಲ ಡಿ.ಸಿ. ಶ್ರೀನಿವಾಸ್, ಆರೋಪಿ ಶರಣರು ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಅವರಿಗೆ ಜಾಮೀನು ನೀಡಿದರೆ ಪ್ರಕರಣದಲ್ಲಿನ ಸಂತ್ರಸ್ತರಾದ ಬಡ ಮಕ್ಕಳಿಗೆ ಬೆದರಿಕೆ ಎದುರಾಗುವ ಸಾಧ್ಯತೆ ಇದೆ. ಶರಣರು ತಮ್ಮನ್ನು ಲೈಂಗಿಕವಾಗಿ ಶೋಷಿಸಿದ್ದಾರೆ ಎಂಬುದಾಗಿ ಸಂತ್ರಸ್ತರು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಸ್ವಯಂಕೃತ ಹೇಳಿಕೆ ದಾಖಲಿಸಿದ್ದಾರೆ. ಈ ಅಂಶವನ್ನು ಗಂಭೀರವಾಗಿ ಪರಿಗಣಿಸಬೇಕು ಹಾಗೂ ಶರಣರಿಗೆ ಜಾಮೀನು ನೀಡಬಾರದು ಎಂದು ನ್ಯಾಯಪೀಠವನ್ನು ಕೋರಿದರು.

ಈ ಹಿಂದೆ ನಡೆದಿದ್ದ ವಿಚಾರಣೆಯಲ್ಲಿ ಸರ್ಕಾರಿ ಅಭಿಯೋಜಕರು, ಶಿವಮೂರ್ತಿ ಶರಣರು ತಮ್ಮ ಮಠದಲ್ಲಿನ ಹಾಸ್ಟೆಲ್‌ನ ವಿದ್ಯಾರ್ಥಿಗಳನ್ನು ಲೈಂಗಿಕವಾಗಿ ಶೋಷಿಸಿರುವುದು ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡು ಬಂದಿದೆ. ಇದರಿಂದ ಅವರಿಗೆ ಜಾಮೀನು ನೀಡಬಾರದು ಎಂದು ಹೈಕೋರ್ಟ್‌ಗೆ ಕೋರಿದ್ದರು. ಶರಣರ ಪರ ವಕೀಲರು, ಸಂತ್ರಸ್ತೆಯರ ಮೇಲೆ ಅರ್ಜಿದಾರರು ಲೈಂಗಿಕ ದೌರ್ಜನ್ಯ ನಡೆಸಿಲ್ಲ ಎಂಬುದು ವೈದ್ಯಕೀಯ ಪರೀಕ್ಷೆಯಲ್ಲಿ ಸಾಬೀತಾಗಿರುವ ಕಾರಣ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು. ಮೂರು ಪಕ್ಷಗಾರರ ವಾದವನ್ನು ಆಲಿಸಿರುವ ನ್ಯಾಯಪೀಠ ಅಂತಿಮ ತೀರ್ಪನ್ನು ಕಾಯ್ದಿರಿಸಿದೆ.

ಪ್ರಕರಣದ ಹಿನ್ನೆಲೆ : ಮುರುಘಾ ಮಠದ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ನಡೆಸುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿಯರು ನಮ್ಮ ಮೇಲೆ ಶರಣರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ 2022 ರ ಆ. 26ರಂದು ದೂರು ದಾಖಲಿಸಿದ್ದರು. ನಂತರ ಶರಣರನ್ನು 2022 ರ ಸೆ. 1ರಂದು ಪೊಲೀಸರು ಬಂಧಿಸಿದ್ದರು. ಅಂದಿನಿಂದಲೂ ಅವರು ಚಿತ್ರದುರ್ಗದ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ: ಮುರುಘಾ ಶರಣರಿಗೆ ಜಾಮೀನು ನೀಡದಂತೆ ಹೈಕೋರ್ಟ್‌ನಲ್ಲಿ ಸರ್ಕಾರದ ವಾದ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.