ETV Bharat / state

ರಾಜಕಾಲುವೆಗಳ ತೆರವಿಗೆ ಸಮಗ್ರ ನೀತಿ ಜಾರಿ ಮಾಡದ ಬಿಬಿಎಂಪಿ ಕ್ರಮಕ್ಕೆ ಹೈಕೋರ್ಟ್ ಗರಂ..

author img

By

Published : Jul 22, 2023, 6:15 PM IST

ರಾಜಕಾಲುವೆಗಳ ತೆರವಿಗೆ ಸಮಗ್ರ ನೀತಿ ಜಾರಿಗೊಳಿಸದ ಬಿಬಿಎಂಪಿ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ಹೊರಹಾಕಿದೆ.

High Court
ಹೈಕೋರ್ಟ್

ಬೆಂಗಳೂರು: ರಾಜಕಾಲುವೆಗಳ ಒತ್ತುವರಿ ಮಾಡಿರುವವರನ್ನು ತೆರವು ಮಾಡುವುದಕ್ಕೆ ಸಂಬಂಧಿಸಿದಂತೆ ಈ ಹಿಂದೆ ನೀಡಿದ್ದ ನಿರ್ದೇಶನಗಳಂತೆ ಸಮಗ್ರವಾದ ನಿಯಮಗಳನ್ನು ಜಾರಿ ಮಾಡದ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಕೆರೆ ಮತ್ತು ರಾಜಕಾಲುವೆಗಳ ಸಂರಕ್ಷಣೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಸಿಟಿಜನ್​ ಆಕ್ಷನ್​ ಗ್ರೂಪ್​ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್​. ಕಮಲ್ ಅವರಿದ್ದ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ, ರಾಜ ಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಯಾವುದೇ ಮಾಹಿತಿಯನ್ನು ನೀಡಿಲ್ಲ. ಜೊತೆಗೆ, ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡು ಕಟ್ಟಡಗಳ ನಿರ್ಮಾಣ ಮಾಡುವ ಸಂದರ್ಭದಲ್ಲಿ ಯಾವುದೇ ಕ್ರಮಕ್ಕೆ ಮುಂದಾಗದೇ ಕೈ ಕಟ್ಟಿ ಕುಳಿತುಕೊಂಡಿದ್ದ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಅಂಶವನ್ನು ತಿಳಿಸಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಆಗಸ್ಟ್​ 1ಕ್ಕೆ ವಿಚಾರಣೆ ಮುಂದೂಡಿಕೆ: ರಾಜಕಾಲುವೆಗಳ ಒತ್ತುವರಿ ತೆರವು ಮಾಡುವ ಸಂದರ್ಭದಲ್ಲಿ ಅಡ್ಡಿಪಡಿಸಿದವರ ವಿರುದ್ಧ ಕ್ರಿಮಿನಲ್​ ಪ್ರಕರಣ ದಾಖಲಿಸುವುದಾಗಿ ಅಧಿಕಾರಿಗಳು ತಿಳಿಸಿದ್ದರೂ, ತಪ್ಪಿತಸ್ಥರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಅಂಶವನ್ನು ವಿವರಿಸಲಾಗಿಲ್ಲ ಎಂದು ತಿಳಿಸಿದ ಪೀಠ ವಿಚಾರಣೆಯನ್ನು ಆಗಸ್ಟ್​ 1ಕ್ಕೆ ಮುಂದೂಡಿದೆ. ಅಲ್ಲದೆ, ಒತ್ತವರಿ ತೆರವಿಗೆ ಸಂಬಂಧಿಸಿದಂತೆ ಬಿಬಿಎಂಪಿ ಈವರೆಗೂ ಕೈಗೊಂಡಿರುವ ಕ್ರಮಗಳು ಕೇವಲ ಭಾಗಶಃ ಆಗಿವೆ. ಆದರೆ, ಸಮಗ್ರ ಯೋಜನೆಯನ್ನು ರೂಪಿಸಿಲ್ಲ ಎಂದು ಪೀಠ ತಿಳಿಸಿದೆ.

ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಅಧಿಕಾರಿಗಳು ತಮ್ಮಲ್ಲಿರುವ ಅವಕಾಶಗಳೊಂದಿಗೆ ವೈಜ್ಞಾನಿಕ ಸಲಹೆಗಳನ್ನು ಪಡೆದುಕೊಂಡು ಸಮಗ್ರವಾದ ಯೋಜನೆ ರೂಪಿಸಲಿದೆ ಎಂಬುದಾಗಿ ಈ ಹಿಂದೆ ನ್ಯಾಯಪೀಠ ನಿರ್ದೇಶನ ನೀಡಿತ್ತು. ಆದರೆ, ಪಾಲಿಕೆ ಅಧಿಕಾರಿಗಳು ನಿರೀಕ್ಷೆಯಂತೆ ಯಾವುದೇ ಸಮಗ್ರ ಯೋಜನೆಯನ್ನು ಜಾರಿ ಮಾಡಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ.

ಬಿಬಿಎಂಪಿ ಆಯುಕ್ತರು ಕೋರ್ಟ್​ಗೆ ಹಾಜರಾಗಲು ಸೂಚನೆ: ಕೆರೆ ಮತ್ತು ರಾಜಕಾಲುವೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಸಮಗ್ರ ಯೋಜನೆ ರೂಪಿಸುವುದಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವುದಕ್ಕಾಗಿ ಮುಂದಿನ ವಿಚಾರಣೆ ವೇಳೆ ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಗಿಂತ ಮೇಲಧಿಕಾರಿಗಳು ಖುದ್ದಾಗಿ ಹಾಜರಿರಬೇಕು.

ಬಿಬಿಎಂಪಿ ತಿಳಿಸಿದ್ದೇನು?: ಹೈಕೋರ್ಟ್ ನಿರ್ದೇಶನದಂತೆ ಅನುಪಾಲನಾ ವರದಿ ಸಲ್ಲಿಸಿದ್ದ ಬಿಬಿಎಂಪಿ, ಕೆರೆಗಳ ಒತ್ತುವರಿ ತೆರವು ಮಾಡಿದ ತಕ್ಷಣ ತ್ಯಾಜ್ಯವನ್ನು ವಿಲೇವಾರಿ ಮಾಡಿ ಮಳೆ ನೀರಿನ ಸರಾಗವಾಗಿ ಹರಿಯುವುದಕ್ಕೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ, ರಾಜ ಕಾಲುವೆಗಳ ಬದಿಗಳಲ್ಲಿ ಸೀಮೆಂಟ್​ನಿಂದ ಮಾಡಿದ ಕಂಬಗಳನ್ನು ಹಾಕಿ ಮುಂದಿನ ದಿನಗಳಲ್ಲಿ ಒತ್ತುವರಿಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಕಂದಾಯ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳ ನೇತೃತ್ವದಲ್ಲಿ ಕಾಲ ಕಾಲಕ್ಕೆ ಸಭೆಗಳನ್ನು ನಡೆಸಲಾಗುವುದು. ಒತ್ತುವರಿ ತೆರವು ಮಾಡುವ ಸಂದರ್ಭದಲ್ಲಿ ಅಡ್ಡಿಪಡಿಸುವವರ ವಿರುದ್ಧ ಕ್ರಿಮಿನಲ್​ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ರಾಜ್ಯಪಾಲರ ಭಾಷಣ ವೇಳೆ NSUI ಕಾರ್ಯಕರ್ತರಿಂದ ಪ್ರತಿಭಟನೆ : ಪ್ರತಿಭಟನಾಕಾರರು ಪೊಲೀಸರ ವಶಕ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.