ETV Bharat / state

ಎಚ್ ಡಿ ರೇವಣ್ಣ ಶಾಸಕರಾಗಿ ಆಯ್ಕೆಯನ್ನು ಅಸಿಂಧುಗೊಳಿಸಲು ಕೋರಿ ಅರ್ಜಿ ಸಲ್ಲಿಕೆ

author img

By

Published : Aug 2, 2023, 1:55 PM IST

Updated : Aug 2, 2023, 9:15 PM IST

ಹೈಕೋರ್ಟ್
ಹೈಕೋರ್ಟ್

ಜೆಡಿಎಸ್ ಅಭ್ಯರ್ಥಿ ಎಚ್​ ಡಿ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾರರಿಗೆ ಕೋಳಿ ಮತ್ತು ಹಣ ಹಂಚುವ ಮೂಲಕ ಚುನಾವಣಾ ಅಕ್ರಮಗಳನ್ನು ನಡೆಸಿ ಜಯಶೀಲರಾಗಿರುವ ಹೊಳೆನರಸೀಪುರದ ಜೆಡಿಎಸ್ ಅಭ್ಯರ್ಥಿ ಎಚ್. ಡಿ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.

ಚುನಾವಣೆಯಲ್ಲಿ ಪರಾಜಿತ ಬಿಜೆಪಿ ಅಭ್ಯರ್ಥಿ ಹಾಗೂ ವಕೀಲ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯ ವಿಚಾರಣೆಯನ್ನು ನಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕ ಸದಸ್ಯಪೀಠ ವಿಚಾರಣೆ ನಡೆಸಿತು. ಅರ್ಜಿಗೆ ಸಂಬಂಧಿಸಿದಂತೆ ಕೆಲಕಾಲ ವಾದ ಆಲಿಸಿದ ಬಳಿಕ ನ್ಯಾಯಾಲಯ ಪ್ರತಿವಾದಿಗಳಾದ ಎಚ್. ಡಿ ರೇವಣ್ಣ, ಶ್ರೇಯಸ್ ಎಂ. ಪಟೇಲ್, ಗೀತಾ ಶಿವಸ್ವಾಮಿ, ಬಿ. ಕೆ. ನಾಗರಾಜ, ಎಚ್. ಎಸ್. ತಾರೇಶ್, ಡಿ. ಆರ್. ರಂಗಸ್ವಾಮಿ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಸೆಪ್ಟಂಬರ್ 4ಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ವಿಧಾನಸಭಾ ಚುನಾವಣೆಯಲ್ಲಿ ಎಚ್. ಡಿ ರೇವಣ್ಣ ಭಾರಿ ಅಕ್ರಮಗಳನ್ನು ಎಸಗಿ ಜಯಗಳಿಸಿದ್ದಾರೆ. ಜತೆಗೆ ಅವರು ಮತಗಳಿಕೆಯಲ್ಲಿ 2ನೇ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ ಕೂಡ ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಹಾಗಾಗಿ ಇವರಿಬ್ಬರ ಮತಗಳಿಕೆಯನ್ನು ಅಸಿಂಧುಗೊಳಿಸಬೇಕೆಂದು ಕೋರಿದರು.

ಚುನಾವಣೆಯಲ್ಲಿ ಎಚ್. ಡಿ ರೇವಣ್ಣ 88,103, ಎರಡನೇ ಅಭ್ಯರ್ಥಿ ಶ್ರೇಯಸ್ ಎಂ. ಪಟೇಲ್ 84,951 ಹಾಗೂ ಅರ್ಜಿದಾರರು 4850 ಮತಗಳನ್ನು ಪಡೆದಿದ್ದಾರೆ. ಉಳಿದ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ರೇವಣ್ಣ ವ್ಯಾಪಕ ಚುನಾವಣಾ ಅಕ್ರಮಗಳನ್ನು ಎಸಗಿದ್ದಾರೆ. ಆ ರೀತಿ ಅಕ್ರಮ ಎಸಗಿ ಗಳಸಿದ ಮತಗಳನ್ನು ಸಿಂಧುವೆಂದು ಪರಿಗಣಿಸಲು ಪ್ರಜಾಪ್ರತಿನಿಧಿ ಕಾಯಿದೆ 1951, ನೀತಿ ಸಂಹಿತೆ ಮತ್ತು ನಿಯಮ 1961 ಹಾಗೂ 2006ರ ಮಾರ್ಗಸೂಚಿಯಲ್ಲಿ ಅವಕಾಶವಿಲ್ಲ. ಹಾಗಾಗಿ, ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಮತ್ತು ಅರ್ಜಿದಾರರನ್ನು ಆಯ್ಕೆಯಾಗಿದ್ದಾರೆಂದು ಘೋಷಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.

ರೇವಣ್ಣ ಅವರ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ : ಜತೆಗೆ, ಪ್ರತಿವಾದಿ ರೇವಣ್ಣ ಅವರು ಪ್ರಜಾಪ್ರತಿನಿಧಿ ಕಾಯಿದೆ 1951ರ ಹಲವು ಸೆಕ್ಷನ್‌ಗಳಡಿ ಅಕ್ರಮಗಳನ್ನು ಎಸಗಿದ್ದಾರೆ. ರೇವಣ್ಣ ಅವರ ಬೆಂಬಲಿಗರು ಅಣ್ಣೆಹಳ್ಳಿಯಲ್ಲಿ ಮತದಾರರಿಗೆ 2 ಕೋಳಿಗಳು ಮತ್ತು 2000 ರೂ. ನಗದನ್ನು ಹಂಚಿದ್ದಾರೆ. ಶಾಂತಿಗ್ರಾಮದ ಬಳಿ ಜನರಿಗೆ ಆಮಿಷವೊಡ್ಡುತ್ತಿದ್ದುದನ್ನು ತಡೆಯಲು ಹೋದಾಗ ರೇವಣ್ಣ ಅವರ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಮಿಥುನ್, ಮೋಹನ್, ಮಂಜು ಮತ್ತು ಶಂಕರ್ ಸೇರಿ 30 ಮಂದಿ ವಿರುದ್ಧ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಭವಾನಿ ರೇವಣ್ಣ ಅವರ ಆಸ್ತಿಯ ವಿವರಗಳೂ ಸಹ ಸುಳ್ಳಿನಿಂದ ಕೂಡಿವೆ: ಜತೆಗೆ ರೇವಣ್ಣ ಅವರು ಸಲ್ಲಿಸಿರುವ ನಾಮಪತ್ರವೇ ದೋಷಪೂರಿತವಾಗಿದೆ. ಅವರು ತಮ್ಮ ಆಸ್ತಿ ವಿವರಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿಲ್ಲ. ಹಲವು ಮಾಹಿತಿಯನ್ನು ಮರೆಮಾಚಿದ್ದಾರೆ. ಆದರೂ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ಸಿಂಧು ಎಂದು ಘೋಷಿಸಿದ್ದಾರೆ. ಭವಾನಿ ರೇವಣ್ಣ ಅವರ ಆಸ್ತಿಯ ವಿವರಗಳೂ ಸಹ ಸುಳ್ಳಿನಿಂದ ಕೂಡಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಭವಾನಿಗೆ ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನ ಕೇಳಿಲ್ಲ: ಹೆಚ್ ಡಿ ರೇವಣ್ಣ

Last Updated :Aug 2, 2023, 9:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.