ETV Bharat / state

ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣೆಗೆ ಪಿಐಎಲ್​​​: ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಆದೇಶ

author img

By

Published : May 27, 2021, 5:19 PM IST

ಹೆಸರುಘಟ್ಟ ಹುಲ್ಲುಗಾವಲು ಪ್ರದೇಶವನ್ನು ಸಂರಕ್ಷಿತ ಪ್ರದೇಶ ಎಂದು ಘೋಷಿಸಬೇಕು. ಆದರೆ, ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ವಿಶೇಷ ಪ್ರತಿನಿಧಿಯಾಗಿ ಪಾಲ್ಗೊಂಡಿದ್ದ ಶಾಸಕ ಎಸ್.ಆರ್. ವಿಶ್ವನಾಥ್, ಹೆಸರಘಟ್ಟ ಹುಲ್ಲುಗಾವಲು ಪ್ರದೇಶವನ್ನು ಸಂರಕ್ಷಿತ ಪ್ರದೇಶವೆಂದು ಘೋಷಿಸಲು ವಿರೋಧ ವ್ಯಕ್ತಪಡಿಸಿದ್ದರು.

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ವನ್ಯಜೀವಿ ಹಾಗೂ ಪಕ್ಷಿ ಸಂಕುಲದಿಂದ ಕೂಡಿರುವ ಹೆಸರಘಟ್ಟ ಹುಲ್ಲುಗಾವಲು ಪ್ರದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಈ ಕುರಿತು ಪರಿಸರವಾದಿ ವಿಜಯ್ ನಿಶಾಂತ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲಕಾಲ ವಾದ ಆಲಿಸಿದ ಪೀಠ, ಹುಲ್ಲುಗಾವಲು ಪ್ರದೇಶವು ಅಪರೂಪದ 40 ಬಗೆಯ ವನ್ಯಜೀವಿ ಹಾಗೂ 133 ಬಗೆಯ ಪಕ್ಷಿ ಸಂಕುಲಗಳ ಆವಾಸ ಸ್ಥಾನವಾಗಿದೆ. ಹೀಗಾಗಿ ಈ ಪ್ರದೇಶದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಬಾರದು, ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಮಧ್ಯಂತರ ಆದೇಶ ನೀಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದಿಸಿದ ವಕೀಲ ಕೆ. ನಿಖಿಲ್, 2021ರ ಜನವರಿ 19ರಂದು ನಡೆದ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ಹೆಸರಘಟ್ಟ ಹುಲ್ಲುಗಾವಲು ಪ್ರದೇಶವನ್ನು ಸಂರಕ್ಷಿತ ಪ್ರದೇಶ ಎಂದು ಘೋಷಿಸುವ ಪ್ರಸ್ತಾವವನ್ನು ತಿರಸ್ಕರಿಸಲಾಗಿದೆ. ಅಲ್ಲದೇ ಸಭೆಯಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿರುವ ಹಿನ್ನೆಲೆ ಸಂರಕ್ಷಣಾ ಪ್ರದೇಶ ಎಂದು ಘೋಷಿಸುವ ಪ್ರಸ್ತಾವ ಮುಂದೂಡುವ ಅಭಿಪ್ರಾಯ ವ್ಯಕ್ತವಾಗಿದೆ ಎಂದರು.

ಅರ್ಜಿದಾರರ ಕೋರಿಕೆ

ಹೆಸರುಘಟ್ಟ ಹುಲ್ಲುಗಾವಲು ಪ್ರದೇಶವನ್ನು ಸಂರಕ್ಷಿತ ಪ್ರದೇಶ ಎಂದು ಘೋಷಿಸಬೇಕು. ಆದರೆ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ವಿಶೇಷ ಪ್ರತಿನಿಧಿಯಾಗಿ ಪಾಲ್ಗೊಂಡಿದ್ದ ಶಾಸಕ ಎಸ್.ಆರ್. ವಿಶ್ವನಾಥ್, ಹೆಸರಘಟ್ಟ ಹುಲ್ಲುಗಾವಲು ಪ್ರದೇಶವನ್ನು ಸಂರಕ್ಷಿತ ಪ್ರದೇಶ ಎಂದು ಘೋಷಿಸಲು ವಿರೋಧ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಹುಲ್ಲುಗಾವಲು ಪ್ರದೇಶ ಒತ್ತುವರಿಯಾಗಿ ಸದ್ಯ 5,010 ಎಕರೆ ಮಾತ್ರ ಉಳಿದಿದೆ. ಅಪರೂಪದ ಪ್ರಾಣಿ, ಪಕ್ಷಿಗಳು ನೆಲೆಸಿರುವ ಈ ಪ್ರದೇಶವನ್ನು ಸಂರಕ್ಷಿತ ಪ್ರದೇಶ ಎಂದು ಘೋಷಿಸಲು ಪಶುಸಂಗೋಪನಾ ಮತ್ತು ಮೀನುಗಾರಿಕೆ ಇಲಾಖೆ ಸರಕಾರಕ್ಕೆ ಶಿಫಾರಸು ಮಾಡಿತ್ತು. ಆದರೆ, ಸರ್ಕಾರ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಹುಲ್ಲುಗಾವಲು ಪ್ರದೇಶವನ್ನು ಸಂರಕ್ಷಣಾ ಪ್ರದೇಶವಾಗಿ ಘೋಷಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಓದಿ: ಪಾಲಿಕೆ ಮೇಯರ್ ರುಕ್ಮಿಣಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್: ಹೊಸದಾಗಿ ಚುನಾವಣೆಗೆ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.